ಅಥವಾ
(247) (109) (40) (3) (37) (5) (0) (0) (43) (7) (8) (33) (6) (0) ಅಂ (63) ಅಃ (63) (196) (4) (38) (10) (0) (8) (0) (42) (0) (0) (0) (0) (1) (0) (0) (87) (0) (16) (13) (104) (70) (0) (63) (53) (93) (9) (14) (0) (29) (30) (30) (2) (78) (81) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಖೇಚರರಾಗಲಿ ಭೂಚರರಾಗಲಿ ಲಾಂಛನಧಾರಿಯಾಗಲಿ, ಮರಣವಾರಿಗೂ ಮನ್ನಣೆಯಿಲ್ಲ! ಸನಕ ಸನಂದಾದಿಗಳಿಗೂ ಮರಣ ಮನ್ನಣೆಯಿಲ್ಲ. ಇದು ಕಾರಣ _ ಗುಹೇಶ್ವರಾ ನಿಮ್ಮ ಶರಣರು ಕಾಲನ ಬಾರಿಗೆ ಕಲ್ಪಿತರಾಗರು !
--------------
ಅಲ್ಲಮಪ್ರಭುದೇವರು
ಖೇಚರಪವನದಂತೆ ಜಾತಿಯೋಗಿಯ ನಿಲುವು ! ಮಾತಿನೊಳು ಧಾತು ನುಂಗಿ ಉಗುಳದಿನ್ನೆಂತೊ ? ಭೂಚಕ್ರವಳಯವನು ಆಚಾರ್ಯ ರಚಿಸಿದ. ಗ್ರಾಮವೆಲ್ಲವ ಸುಟ್ಟು, ನೇಮ ನಾಮವ ನುಂಗಿ ಗ್ರಾಮದ ಪ್ರಭುವನೆ ನುಂಗಿ, `ಗುಹೇಶ್ವರ ಗುಹೇಶ್ವರ' ಎನುತ ನಿರ್ವಯಲಾಗಿತ್ತು.
--------------
ಅಲ್ಲಮಪ್ರಭುದೇವರು
ಖಂಡಾಖಂಡ ಸಂಯೋಗವಿಲ್ಲದ ಅಖಂಡಿತನ ನಿಲವು, ತನ್ನಲ್ಲಿ ಅಲ್ಲದೆ ಮತ್ತೆಲ್ಲಿಯೂ ಇಲ್ಲ. ಬಯಲ ಹಿರಿಯರು ಬಯಲನೆ ಅರಸುವರು. ಅಲ್ಲಿ ಉಂಟೆ ಹೇಳಾ ಗುಹೇಶ್ವರಾ?
--------------
ಅಲ್ಲಮಪ್ರಭುದೇವರು
ಖಂಡಿತವಿಲ್ಲಾಗಿ ಸರ್ವಾಂಗವೆಲ್ಲವೂ ನಾಸಿಕವಾಯಿತ್ತು. ತಾನಲ್ಲದೆ ಅನ್ಯ ವಾಸನೆ ಇಲ್ಲವಾಗಿ, ಅಲ್ಲಿಯೆ ಮಹತ್ತಪ್ಪ ಪೃಥ್ವಿಯಡಗಿತು. ಖಂಡಿತವಿಲ್ಲಾಗಿ ಸರ್ವಾಂಗವೆಲ್ಲವೂ ಜಿಹ್ವೆಯಾಯಿತ್ತು. ತಾನಲ್ಲದೆ ಅನ್ಯ ರುಚಿ ಇಲ್ಲವಾಗಿ, ಅಲ್ಲಿಯೆ ಮಹತ್ತಪ್ಪ ಅಪ್ಪು ಅಡಗಿತ್ತು. ಖಂಡಿತವಿಲ್ಲಾಗಿ ಸರ್ವಾಂಗವೆಲ್ಲವೂ ನೇತ್ರವಾಯಿತ್ತು. ತಾನಲ್ಲದೆ ಅನ್ಯ ರೂಪಿಲ್ಲವಾಗಿ, ಅಲ್ಲಿಯೆ ಮಹತ್ತಪ್ಪ ಅಗ್ನಿ ಅಡಗಿತ್ತು. ಖಂಡಿತವಿಲ್ಲಾಗಿ ಸರ್ವಾಂಗವೆಲ್ಲವೂ ತ್ವಕ್ಕಾಯಿತ್ತು. ತಾನಲ್ಲದೆ ಅನ್ಯ ಸೋಂಕಿಲ್ಲವಾಗಿ, ಅಲ್ಲಿಯೆ ಮಹತ್ತಪ್ಪ ವಾಯು ಅಡಗಿತ್ತು. ಖಂಡಿತವಿಲ್ಲಾಗಿ ಸರ್ವಾಂಗವೆಲ್ಲವೂ ಶ್ರೋತ್ರವಾಯಿತ್ತು. ತಾನಲ್ಲದೆ ಅನ್ಯ ಶಬ್ದವಿಲ್ಲಾಗಿ, ಅಲ್ಲಿಯೆ ಮಹತ್ತಪ್ಪ ಆಕಾಶವಡಗಿತ್ತು. ಇಂತು ಪಂಚಭೂತಂಗಳಡಗಿದಡೆ, ಪಂಚಬ್ರಹ್ಮಮಯವಾಯಿತ್ತು. ಅದರೊಳಗೆ ಜಗತ್ತಡಗಿದ ಭೇದವದೆ. ಪಂಚವರ್ಣಾತೀತವಾಗಿ ಮಹತ್ತನೊಳಕೊಂಡ ಶರಣನ ಭೇದವನು ಏನೆಂದುಪಮಿಸುವೆನಯ್ಯಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು