ಅಥವಾ

ಒಟ್ಟು 373 ಕಡೆಗಳಲ್ಲಿ , 45 ವಚನಕಾರರು , 291 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣ ಸಕಾಯನೆಂಬೆನೆ ಸಕಾಯನಲ್ಲ. ಅಕಾಯನೆಂಬೆನೆ ಅಕಾಯನಲ್ಲ. ಅದೇನು ಕಾರಣವೆಂದಡೆ; ಶಿವಕಾಯವಾದ ನಿಜಬೋಧವೆ ಕಾಯವಾದ ಕಾರಣ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ ಶರಣನು, ಪರಕಾಯರೂಪನು.
--------------
ಸ್ವತಂತ್ರ ಸಿದ್ಧಲಿಂಗ
ಗುರುಶಿಷ್ಯರಿಬ್ಬರೂ ಸಹಪಂಕ್ತಿಯಲ್ಲಿ ಲಿಂಗಾರ್ಚನೆ ಮಾಡಿಹೆವೆಂಬರಯ್ಯಾ! ಹೋ! ಹೋ! ಬಾಲಭಾಷೆಯ ಕೇಳಲಾಗದು. ಅಲ್ಲಲ್ಲ, ಮಾಡಬಹುದು. ಅದೇನು ಕಾರಣ? ಗುರುವಿನ ಅರಿವಿನ ಹರಿವನರಿಯಬಲ್ಲಡೆ ಮಾಡಬಹುದು, ಮಾಡಬಹುದು. ಶಿಷ್ಯ ಪ್ರಸಾದವೆಂಬುಭಯಸಂದೇಹ ಹಿಂದುಳಿಯಬಲ್ಲಡೆ, ಮಾಡಬಹುದು, ಮಾಡಬಹುದು. ಇದಲ್ಲದೆ ಲಿಂಗಪ್ರಸಾದದ ಮೇಲೆ ಗುರುಪ್ರಸಾದವನಿಕ್ಕಿಹೆನೆಂಬ ಶಿವದ್ರೋಹಿಗಳನೇನೆಂಬೆ! ಕೊಂಡೆಹೆನೆಂಬ ಗುರುದ್ರೋಹಿಗಳನೇನೆಂಬೆ! ಇದು ಕಾರಣ, ಮಹಾಘನಸೋಮೇಶ್ವರಾ, ನಿಮ್ಮಲ್ಲಿ, ಇವರಿಬ್ಬರ ಗುರು ಶಿಷ್ಯರೆಂದೆನಾದಡೆ, ಎನ್ನನದ್ದಿ ನೀನೆದ್ದು ಹೋಗಯ್ಯಾ?
--------------
ಅಜಗಣ್ಣ ತಂದೆ
ಇಷ್ಟಲಿಂಗವ ಹಿಡಿದು ಕಷ್ಟಯೋನಿಗೆ ತಿರುಗುವ ಕೆಟ್ಟ ಪಾತಕರ ನೋಡಲಾಗದು. ಜಂಗಮವೆಂದು ಮಾಡಲಾಗದು ಪೂಜೆಯ. ನಮಿಸಿಕೊಳ್ಳಲಾಗದು ಹರನೆಂದು. ಅದೇನು ಕಾರಣವೆಂದೊಡೆ : ತನುಮನಭಾವನಷ್ಟವಾದಿಷ್ಟಲಿಂಗಜಂಗಮವು ಪೂಜೆಗೆ ಯೋಗ್ಯ. ತನುಮನಭಾವವು ತ್ರಿವಿಧಮಲದಲ್ಲಿ ಮುಳುಗಿ ಮಲರೂಪಮನುಜರಿಗೆ, ಗುರುನಿರಂಜನ ಚನ್ನಬಸವಲಿಂಗವೆಂದೊಡೆ ನಾಚಿಕೆಗೊಂಡಿತ್ತು ಆಚಾರ.
--------------
ದೇಶಿಕೇಂದ್ರ ಸಂಗನಬಸವಯ್ಯ
ಶಿವನೆ, ನೀನು ಗುರುವಾದೆ ಲಿಂಗವಾದೆ ಜಂಗಮವಾದೆ ಭಕ್ತನಾದೆ. ಗುರುವಾಗಿದ್ದು ಭಕ್ತನೊಳಡಗಿದೆ. ಅದೇನು ಕಾರಣವೆಂದಡೆ ಗುರುವಿಂಗೆ ಅರ್ಥಪ್ರಾಣಾಭಿಮಾನವನು ಕೊಟ್ಟು, ಆತ ಭೋಗಿಸಿದ ಬಳಿಕ ತಾನಾ ಪ್ರಸಾದ ಮುಂತಾಗಿ ಭೋಗಿಸುವನಾಗಿ, ಆ ಗುರುವು ತನ್ನೊಳಡಗಿದ. ಲಿಂಗವಾಗಿದ್ದು ಭಕ್ತನೊಳಡಗಿದೆ. ಅದೇನು ಕಾರಣವೆಂದಡೆ ಲಿಂಗಕ್ಕೆ ಅರ್ಥಪ್ರಾಣಾಭಿಮಾನವನು ಕೊಟ್ಟು, ಆತ ಭೋಗಿಸಿದ ಬಳಿಕ ತಾನಾ ಪ್ರಸಾದ ಮುಂತಾಗಿ ಭೋಗಿಸುವನಾಗಿ, ಆ ಲಿಂಗವು ಭಕ್ತನೊಳಡಗಿದ. ಜಂಗಮವಾಗಿದ್ದು ಭಕ್ತನೊಳಡಗಿದೆ. ಅದೇನು ಕಾರಣವೆಂದಡೆ ಜಂಗಮಕ್ಕೆ ಅರ್ಥಪ್ರಾಣಾಭಿಮಾನವನು ಕೊಟ್ಟು, ಆ ಜಂಗಮವು ಭೋಗಿಸಿದ ಬಳಿಕ ತಾನಾ ಪ್ರಸಾದ ಮುಂತಾಗಿ ಭೋಗಿಸುವನಾಗಿ, ಆ ಜಂಗಮವು ಭಕ್ತನೊಳಡಗಿದ. ಇಂತಡಗುವರೆ ಹಿರಿಯರು; ಇಂತಡಗುವರೆ ಗುರುವರು; ಇಂತಡಗುವರೆ ಮಹಿಮರು; ಇವರಿಗೆ ಭಾಜನವೊಂದೆ ಭೋಜನವೊಂದೆ. ಈ ನಾಲ್ಕು ಒಂದಾದ ಘನಕ್ಕೆ ಪರಿಯಾಣಬೇರೆಂಬ ಶಾಸ್ತ್ರದ ಸೂತಕಿಗಳನೆನಗೆ ತೋರದಿರಯ್ಯಾ, ಮಸಣಯ್ಯಪ್ರಿಯ ಗಜೇಶ್ವರಾ.
--------------
ಗಜೇಶಮಸಣಯ್ಯಗಳ ಪುಣ್ಯಸ್ತ್ರೀ
ಬಂದ ಬಟ್ಟೆಯ ನಿಂದು ನೋಡಲೊಲ್ಲೆ ಕಂದಾ, ಅದೇನು ಸೋಜಿಗವೊ ? ಬಿಂದು ಛಂದವಲ್ಲ ಬಂದ ಪರಿಯನು ಗುಹೇಶ್ವರ ಬಲ್ಲ ಕಂದಾ.
--------------
ಅಲ್ಲಮಪ್ರಭುದೇವರು
ಭವಬಂಧನಂಗಳ ಹಿಂಗಿಸಬೇಕೆಂಬಣ್ಣಗಳು ನೀವು ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಶ್ರೀಗುರುಪುತ್ರನಾಗಿ ಅವರು ತಮ್ಮ ಅಂತಃಕರಣ ಕೃಪೆಯಿಂದ ಪೇಳಿದ ಪ್ರಸಾದವಾಕ್ಯವನು ಅವರ ದಯದಿಂದ ಪೇಳುತಿರ್ದೆನು ಕೇಳಿರಯ್ಯ. ಅದೆಂತೆಂದಡೆ : ಆಶೆ ಆಮಿಷ ತಾಮಸದೊಡನೆ ಕೂಡಿ ಕ್ಲೇಶಪಡುತಿರ್ದಂತೆ ಗುರುಗಳಲ್ಲಿ ಅಥವಾ ಜಂಗಮಲಿಂಗಿಗಳಲ್ಲಿ ಇಂತೀ ಉಭಯ ಪಾಶಬದ್ಧರ ಕೈಯಿಂದ ಅಹಂಕಾರ ಮಮಕಾರದಲ್ಲಿ ಆಣವಮಲ, ಮಾಯಾಮಲ, ಕಾರ್ಮಿಕಮಲವೆಂಬ ಮಲತ್ರಯಂಗಳ ಕಚ್ಚಿ, ಸಂಸಾರವಿಷಯದಲ್ಲಿ ಲಂಪಟರಾದ ಭಕ್ತಜನಂಗಳು ಅಥವಾ ಶಿಷ್ಯೋತ್ತಮನಾದಂಥವರು ಇಂತಪ್ಪವರು ಲಿಂಗವ ಪಡೆದು, ಉಪದೇಶವ ಹಡದು, ಆಚರಿಸುವರ ಆಚರಣೆಯೆಂತಾಯಿತ್ತೆಂದಡೆ, ತಲೆಯಿಲ್ಲದ ಪುರುಷನ ಸಂಗ, ಕಣ್ಣಿಲ್ಲದ ಸ್ತ್ರೀ ಸಂಯೋಗವ ಮಾಡಿ, ಜೀವವಿಲ್ಲದೊಂದು ಮಗನ ಹಡದಂತಾಯಿತ್ತಯ್ಯ. ಅಂತಪ್ಪ ದೇವ ಭಕ್ತ ಗುರು ಶಿಷ್ಯರೆಂಬ ಈ ಚತುರ್ವಿಧ ಪುರುಷರಿಗೆ ಭವಹಿಂಗದು, ಮುಕ್ತಿ ಎಂದಿಗೂ ತೋರದು. ಅದೇನು ಕಾರಣವೆಂದಡೆ : ತಾವ್ಯಾರು, ತಮ್ಮ ಸ್ವರೂಪವಾವುದು ಎಂಬ ನಿಲುಕಡೆಯ ತಿಳಿಯದ ಕಾರಣ. ಮತ್ತಂ ಪೇಳ್ವೆ : ತಮ್ಮ ನಿಜವ ತಾವರಿದು, ಸರ್ವಾಚಾರಸಂಪತ್ತು ಅಳವಟ್ಟು, ಸರ್ವಾಂಗಲಿಂಗಮಯವಾಗಿರುವಂಥ ನಿಃಕಲ ಸದ್ರೂಪಸ್ವರೂಪರಾದ ಆಚಾರ್ಯಂಗಳಲ್ಲಾಗಲಿ, ಅಥವಾ ಸತ್ತುಚಿತ್ತಾನಂದ ನಿತ್ಯಪರಿಪೂರ್ಣಭರಿತನಾದ ನಿಃಕಲಪರಮಾನಂದಸ್ವರೂಪರಾದ ನಿರಂಜನಜಂಗಮದಲ್ಲಾಗಲಿ ಇಂತೀ ಉಭಯ ಪರಮೂರ್ತಿಗಳ ಕರುಣಕೃಪೆಯಿಂದ ಶಿವಜ್ಞಾನೋದಯವಾಗಿ ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ ಲಿಂಗಾಂಗಸಮರಸದನುಭವವಳವಟ್ಟು ತ್ರಿವಿಧ ವಂಚನೆಯಿಲ್ಲದೆ ಕ್ಷಮೆ, ದಮೆ, ಶಾಂತಿ, ಸೈರಣೆ ಗುಣವುಳ್ಳಂಥ ಸದ್ಭಕ್ತ ಶರಣಜನಂಗಳಲ್ಲಾಗಲಿ ಅಥವಾ ಶಿಷ್ಯೋತ್ತಮನಾದಂಥವರುಗಳಲ್ಲಾಗಲಿ ಇಂತೀ ಉಭಯ ಭಕ್ತಗಣಂಗಳು ಚಿದ್ಘನಮಹಾಲಿಂಗವೆಂಬ ಇಷ್ಟಲಿಂಗವ ಕರಸ್ಥಲಕ್ಕೆ ಪಡಕೊಂಡು, ತಾರಕಮಂತ್ರವೆಂಬ ಮಂತ್ರೋಪದೇಶವ ಹಡಕೊಂಡು, ಆಚರಿಸುವ ಸದ್ಭಕ್ತ ಶರಣಜನಂಗಳ ಆಚರಣೆಯೆಂತಾಯಿತ್ತಯ್ಯಯೆಂದಡೆ: ಸೂರ್ಯಪ್ರಕಾಶವನುಳ್ಳಂಥ ಕನ್ಯಕುಮಾರ ರಾಜನಸಂಗ ಚಂದ್ರಕಾಂತಿಪ್ರಕಾಶವನುಳ್ಳಂಥ ಕನ್ಯಸ್ತ್ರೀಯಳು ಸಂಯೋಗವ ಮಾಡಿ ಅಗ್ನಿಕಾಂತಿಪ್ರಕಾಶವನುಳ್ಳಂಥ ಪುತ್ರನ ಹಡೆದಂತಾಯಿತ್ತಯ್ಯ. ಇಂತಪ್ಪ ಆಚಾರವನುಳ್ಳ ಗುರು ಶಿಷ್ಯರು ದೇವ ಭಕ್ತರೆಂಬ ಈ ನಾಲ್ಕು ಪರಪುರುಷರಿಗೆ ಭವಹಿಂಗುವುದು. ಮುಕ್ತಿಯೆಂಬುದು ಕರತಳಾಮಳಕವಾಗಿ ತೋರುವುದು. ಮತ್ತಂ, ಲಿಂಗಾಂಗಸಂಬಂದ್ಥಿಯಾಗಿ ಸರ್ವಾಚಾರ ನೆಲೆಗೊಂಡು ಸರ್ವಾಗಲಿಂಗಿಯಾದಂಥ ವೀರಮಾಹೇಶ್ವರರಾಗಲಿ, ಅಥವಾ ಗುರುಗಳಾಗಲಿ, ಸದ್ಭಕ್ತ ಶರಣಜನಂಗಳಾಗಲಿ, ಇಂತಪ್ಪ ತ್ರಿವಿಧಶಿವಜ್ಞಾನಿಗಳ ಚರಣಕಮಲಕ್ಕೆ ದೀರ್ಘದಂಡನಮಸ್ಕಾರಮಂ ಮಾಡಿ ಸುಜ್ಞಾನೋದಯವಾಗಿ ಮೋಕ್ಷವ ಹಡೆಯಬೇಕೆಂಬ ಜ್ಞಾನಕಲಾತ್ಮರಾದಂಥವರು ಲಿಂಗಾಂಗಸಮರಸದನುಭಾವವ ವಿಚಾರಿಸಿಕೊಳ್ಳಬೇಕು. ಅಂತಪ್ಪ ಪರಶಿವಮೂರ್ತಿಗಳಾದ ಗುರುಗಳಲ್ಲಾಗಲಿ, ಅಥವಾ ಜಂಗಮಲಿಂಗಿಗಳಲ್ಲಾಗಲಿ, ಅಥವಾ ಇಂತಹ ಶಿವಜ್ಞಾನಿಗಳಾದ ಭಕ್ತರಲ್ಲಾಗಲಿ, ಶಿಷ್ಯೋತ್ತಮರಲ್ಲಾಗಲಿ, ಇಂತಪ್ಪವರಿಗೆ ಲಿಂಗಾಂಗಸಮರಸವ ತೋರಬೇಕು, ತೋರದಿದ್ದರೆ ಪ್ರಮಥರು ಮೆಚ್ಚರು. ಇಂತಪ್ಪ ತ್ರಿಮೂರ್ತಿಗಳು ಹೇಳಿದ ಹಾಂಗೆ ಕೇಳಿ ವಿಶ್ವಾಸದಿಂದ ಆಚರಿಸದಿದ್ದರೆ ಭವಹಿಂಗದು ಮುಕ್ತಿಯೆಂಬುದು ಎಂದೆಂದಿಗೂ ತೋರದು ಎಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಪಾದಪೂಜೆಯ ಮಾಡಿ, ಅಂಗುಷ್ಠವೆರಡು ಅಂಗುಲವೆಂಟು ಉಭಯಹಸ್ತದಲ್ಲಿ ಮಾಡಿಕೊಂಬುದೆ ಶಿಕ್ಷಾಪಾದೋದಕ. ಲಿಂಗಧಾರೀ ಮಹಾಯೋಗೀ ಚರಪಾದೋದಕಂ ವಿನಾ ದಿನೇನ ದಶಜನ್ಮಾನಿ ಮಾಸೇನ ಶತಜನ್ಮಸು ವರ್ಷೇ ಸಹಸ್ರಜನ್ಮಾನಿ ವರ್ಷಾರ್ಧೇ ಘೂಕವಾಯ¸õ್ಞ ದ್ವಿವರ್ಷೇ ¸õ್ಞಕರೇ ಗರ್ಭೇ ಜಾಯತೇ ನಾತ್ರ ಸಂಶಯಃ ಎಂದುದಾಗಿ ಆ ಶಿಕ್ಷಾಪಾದೋದಕವನೆ ಆ ವಿಭೂತಿಯಲ್ಲಿ ಸಮ್ಮಿಶ್ರವ ಮಾಡಿ ಲಲಾಟ ಮೊದಲಾದ ನಾಲ್ವತ್ತೆಂಟು ಸ್ಥಾನಂಗಳಲ್ಲಿ ಧಾರಣವ ಮಾಡುವುದು ಇದು ವೀರಶೈವರಿಗೆ ಸಲ್ಲುವ ನಡತೆ. ಶುದ್ಧಶೈವರಿಗೆ ಗಿಂಡಿಯಲ್ಲಿ ತುಂಬುವ ನಡತೆ. ವಿಶೇಷವೀರಶೈವರು ಗಿಂಡಿಯ ಮಾಡಲಾಗದು, ಅದೇನು ಕಾರಣವೆಂದಡೆ:ಅವರಿಗೆ ತ್ರಿವಿಧ ಪಾದೋದಕವು ನಿತ್ಯದ ಸಹಬಂಧವಾಗುವುದೆಂದು. [ಇದ]ನರಿದು ಆಚರಿಸುವಾತನೆ ನಿತ್ಯಮುಕ್ತನಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಮಹದಲ್ಲಿ ಮನಮುಳುಗಿಸಿದ ಮಹಾಂತನ ಬಗೆಗೊಳ್ಳದೆ ಬೊಗಳಲಾಗದು. ಅದೇನು ಕಾರಣವೆಂದೊಡೆ, ಲಿಂಗದೊಳಗಿರ್ದು ಬಲ್ಲಂತೆ ನಡೆವನು ಬಲ್ಲಂತೆ ನುಡಿವನು. ಬಲ್ಲಂತೆ ಸಕಲ ವ್ಯವಹಾರದೊಳಗಿರ್ದರು ಎಂತಿರ್ದಂತೆ ನಿಜವು ತಾನೆ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಆಸುವಳಿದ ಕಾಯದಂತೆ ದೆಸೆಗೆಟ್ಟಿನಯ್ಯ ದೆಸೆಗೆಟ್ಟಿನಯ್ಯ. ಅದೇನು ಕಾರಣವೆಂದಡೆ: ಪಶುಪತಿಯ ಭಕ್ತಿ ವಿಶ್ವಾಸವಿಲ್ಲದೆ ವಿಷಯಾತುರನಾಗಿರ್ದೆನಯ್ಯ. ಇದು ಕಾರಣ, ಎನ್ನ ಸಂಸಾರವಿಷಯಂಗಳ ಮಾಣಿಸಿ ಭಕ್ತನೆಂದೆನಿಸಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಕಾಣದಠಾವಿನಲಿ ಜರೆದರೆಂದಡೆ ಕೇಳಿ ಪರಿಣಾಮಿಸಬೇಕು. ಅದೇನು ಕಾರಣ ಕೊಳ್ಳದೆ ಕೊಡದೆ ಅವರಿಗೆ ಸಂತೋಷವಹುದಾಗಿ ! ಎನ್ನ ಮನದ ತದ್‍ದ್ವೇಷವಳಿದು ನಿಮ್ಮ ಶರಣರಿಗೆ ಶರಣೆಂಬುದ ಕರುಣಿಸು, ಕೂಡಲಸಂಗಮದೇವಾ. 250
--------------
ಬಸವಣ್ಣ
ಸದ್ಗುರುಕಾರುಣ್ಯವ ಪಡೆದು ಲಿಂಗಾಂಗಸಮರಸವುಳ್ಳ ವೀರಶೈವ ಭಕ್ತ ಮಹೇಶ್ವರರೆನಿಸಿಕೊಂಡ ಬಳಿಕ ತಮ್ಮಂಗದ ಮೇಲಣ ಲಿಂಗವು ಷಟ್‍ಸ್ಥಾನಂಗಳಲ್ಲಿ ಬ್ಥಿನ್ನವಾದಡೆ ಆ ಲಿಂಗದಲ್ಲಿ ತಮ್ಮ ಪ್ರಾಣವ ಬಿಡಬೇಕಲ್ಲದೆ, ಮರಳಿ ಆ ಬ್ಥಿನ್ನವಾದ ಲಿಂಗವ ಧರಿಸಲಾಗದು. ಅದೇನು ಕಾರಣವೆಂದಡೆ : ತಾನು ಸಾಯಲಾರದೆ ಜೀವದಾಸೆಯಿಂದೆ ಆ ಬ್ಥಿನ್ನವಾದ ಲಿಂಗವ ಧರಿಸಿದಡೆ ಮುಂದೆ ಸೂರ್ಯಚಂದ್ರರುಳ್ಳನ್ನಕ್ಕರ ನರಕಸಮುದ್ರದಲ್ಲಿ ಬಿದ್ದು ಮುಳುಗಾಡುವ ಪ್ರಾಪ್ತಿಯುಂಟಾದ ಕಾರಣ, ಇದಕ್ಕೆ ಸಾಕ್ಷಿ : ``ಶಿರೋ ಯೋನಿರ್ಗೋಮುಖಂ ಚ ಮಧ್ಯಂ ವೃತ್ತಂ ಚ ಪೀಠಕಂ | ಷಟ್‍ಸ್ಥಾನೇ ಛಿದ್ರಯೋಗೇ ತು ತಲ್ಲಿಂಗಂ ನೈವ ಧಾರಯೇತ್ | ತಥಾಪಿ ಧಾರಣಾತ್ ಯೋಗೀ ರೌರವಂ ನರಕಂ ವ್ರಜೇತ್ ||'' -ಸೂP್ಷ್ಞ್ಮ ಗಮ. ಇಂತಪ್ಪ ನರಕಜೀವಿಗಳ ಎನ್ನತ್ತ ತೋರದಿರಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಒಬ್ಬರು ನಡೆದಾಚರಣೆಯಲ್ಲಿ ನಡೆಯರು. ಒಬ್ಬರು ಹಿಡಿದ ಶೀಲವ ಹಿಡಿಯರು. ಒಬ್ಬರು ನುಡಿದ ಭಾಷೆಯ ನುಡಿಯರು. ಅದೇನು ಕಾರಣವೆಂದೊಡೆ : ತಮ್ಮ ಲಿಂಗಮಚ್ಚಿ ನಡೆವರು. ತಮ್ಮ ಲಿಂಗಮಚ್ಚಿ ಹಿಡಿವರು. ತಮ್ಮ ಲಿಂಗಮಚ್ಚಿ ನುಡಿವರು. ಇದು ಕಾರಣ. ಅಖಂಡೇಶ್ವರಾ, ನಿಮ್ಮ ಶರಣರು ಪರಮ ಸ್ವತಂತ್ರಶೀಲರು.
--------------
ಷಣ್ಮುಖಸ್ವಾಮಿ
ತಾ ಸವಿದಲ್ಲದೆ ಆ ಸವಿಯ ಲಿಂಗಕ್ಕರ್ಪಿಸಲಾಗದು. ಅದೇನು ಕಾರಣವೆಂದಡೆ, ಆ ಲಿಂಗವು ಕಹಿ-ಸಿಹಿಯರಿಯದಾಗಿ. ಇದು ಕಾರಣ, ಕಹಿ ಎಂದು ಕಳೆದು, ಸಿಹಿ ಎಂದು ಕೊಂಡಡೆ, ಕೊಂಡುದು ಕಿಲ್ಬಿಷ, ಕೂಡಲಸಂಗಮದೇವಾ.
--------------
ಬಸವಣ್ಣ
ಗುರುಭಕ್ತರಾದವರು ತ್ರಿಕಾಲದಲ್ಲಿ ಹರಸ್ಮರಣೆಯಲ್ಲದೆ ಹರಿಯೆಂದು ನುಡಿಯಲಾಗದು. ಹರಿ ಶಬ್ದವ ಕೇಳಲಾಗದು, ಹರಿಯ ರೂಪವ ನೋಡಲಾಗದು. ಅದೇನು ಕಾರಣವೆಂದೊಡೆ : ಪೂರ್ಣಾಯುಷ್ಯವು, ವಿಮಲಮತಿಯು, ಸತ್ಕೀರ್ತಿಯು, ಮಹಾಬಲವು, ಕೆಟ್ಟು ಹೋಗುತ್ತಿಹುದು ನೋಡಾ ! ಅದೆಂತೆಂದೊಡೆ :ಬ್ರಹ್ಮಾಂಡಪುರಾಣೇ ``ನ ಪ್ರದೋಷೇ ಹರಿಂ ಪಶ್ಯೇತ್ ಯದಿ ಪಶ್ಯೇತ್ ಪ್ರಮಾದತಃ | ಚತ್ವಾರಿ ತಸ್ಯ ನಶ್ಯಂತಿ ಆಯುಃ ಪ್ರಜ್ಞಾ ಯಶೋ ಬಲಮ್ ||'' ಎಂದುದಾಗಿ, ಸತ್ತು ಹುಟ್ಟುವ ಹರಿಗೆ ಇನ್ನೆತ್ತಣ ದೇವತ್ವ ಹೇಳಾ ಅಖಂಡೇಶ್ವರಾ ?
--------------
ಷಣ್ಮುಖಸ್ವಾಮಿ
ಮಲದೇಹಿಗಳ ಅಂಗದ ಮೇಲೆ ಲಿಂಗವಿದ್ದರೇನು ಅದು ಲಿಂಗವಲ್ಲ. ಅದೇನು ಕಾರಣವೆಂದರೆ, ಅವನು ಪ್ರಸಾದದೇಹಿ ಸಂಸ್ಕಾರಿದೇಹಿಯಲ್ಲ. ಅವನ ಸೋಂಕಿದ ಲಿಂಗವು ಕೆರೆಯ ಕಟ್ಟೆಯ ಶಿಲೆಯಂತಾಯಿತು. ಅವನು ಲಿಂಗಾಂಗಿ ಲಿಂಗಪ್ರಾಣಿಯಾಗದೆ ಅವನು ಮುಟ್ಟಿದ ಭಾಂಡ ಭಾಜನಂಗಳೆಲ್ಲ ಹೊರಮನೆ ಊರ ಅಗ್ಗವಣಿ ಎಂದೆನಿಸುವವು. ಅವನು ಮಲದೇಹಿ. ಅವನಂಗದಲ್ಲಿ ಗುರುವಿಲ್ಲ ಜಂಗಮವಿಲ್ಲ, ಪಾದೋದಕವಿಲ್ಲ ಪ್ರಸಾದವಿಲ್ಲ. ಅವನು ಅಶುದ್ಧ ಮಲದೇಹಿ. ಅವನ ಪೂಜಿಸಿದವಂಗೆ ರೌರವ ನರಕ ತಪ್ಪದೆಂದಾತ ನಿಮ್ಮ ಶರಣ ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ಇನ್ನಷ್ಟು ... -->