ಅಥವಾ

ಒಟ್ಟು 149 ಕಡೆಗಳಲ್ಲಿ , 52 ವಚನಕಾರರು , 142 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಶಿಷ್ಯರಿಬ್ಬರೂ ಸಹಪಂಕ್ತಿಯಲ್ಲಿ ಲಿಂಗಾರ್ಚನೆ ಮಾಡಿಹೆವೆಂಬರಯ್ಯಾ! ಹೋ! ಹೋ! ಬಾಲಭಾಷೆಯ ಕೇಳಲಾಗದು. ಅಲ್ಲಲ್ಲ, ಮಾಡಬಹುದು. ಅದೇನು ಕಾರಣ? ಗುರುವಿನ ಅರಿವಿನ ಹರಿವನರಿಯಬಲ್ಲಡೆ ಮಾಡಬಹುದು, ಮಾಡಬಹುದು. ಶಿಷ್ಯ ಪ್ರಸಾದವೆಂಬುಭಯಸಂದೇಹ ಹಿಂದುಳಿಯಬಲ್ಲಡೆ, ಮಾಡಬಹುದು, ಮಾಡಬಹುದು. ಇದಲ್ಲದೆ ಲಿಂಗಪ್ರಸಾದದ ಮೇಲೆ ಗುರುಪ್ರಸಾದವನಿಕ್ಕಿಹೆನೆಂಬ ಶಿವದ್ರೋಹಿಗಳನೇನೆಂಬೆ! ಕೊಂಡೆಹೆನೆಂಬ ಗುರುದ್ರೋಹಿಗಳನೇನೆಂಬೆ! ಇದು ಕಾರಣ, ಮಹಾಘನಸೋಮೇಶ್ವರಾ, ನಿಮ್ಮಲ್ಲಿ, ಇವರಿಬ್ಬರ ಗುರು ಶಿಷ್ಯರೆಂದೆನಾದಡೆ, ಎನ್ನನದ್ದಿ ನೀನೆದ್ದು ಹೋಗಯ್ಯಾ?
--------------
ಅಜಗಣ್ಣ ತಂದೆ
ಕಲ್ಲು ಕಲ್ಲು ತಾಕಿದಲ್ಲಿ ಕಿಚ್ಚಿನ ಕಿಡಿಯಲ್ಲದೆ, ಹೆಂಟೆ ಶಿಲೆ ಹೋರಿದಲ್ಲಿವುಂಟೆ? ಅರಿದವನಲ್ಲಿ ಒಡಗೂಡುವ ಸುಖವಲ್ಲದೆ, ಬರಿಯನಲ್ಲಿ, ಅರಿವು ಹೀನನಲ್ಲಿ, ಅರಿವಿನ ಕುರುಹ ಮರೆದಾಡುವನಲ್ಲಿ, ಸುರೆಯ ಮಡಕೆಯ ಪೂಜಿಸಿ ಕುಡಿವವನಂತಾಗಬೇಡ. ಬರಿಯ ವಾಚಾಸಿದ್ಧಿಯಲ್ಲಿ ಅರಿದೆಹೆನೆಂದು ಅವ ಕೊಟ್ಟರಿವಿನ ಕುರುಹ ಮರೆಯಬೇಡ. ಆ ಮರೆಯಲ್ಲಿ ಬೆಳಗು ತೋರುತ್ತದೆ ಸದಾಶಿವಮೂರ್ತಿಲಿಂಗದಲ್ಲಿ ಅದೆ.
--------------
ಅರಿವಿನ ಮಾರಿತಂದೆ
ಕೆಯಿ ಬೆಳೆವಲ್ಲಿ ಸದೆಗೆ ಮುನಿವರಲ್ಲದೆ ಬೆಳೆಗೆ ಮುನಿದವರುಂಟೆ ಅಯ್ಯಾ? ಅರಿದಂಗವ ತಾಳಿದವರಲ್ಲಿ ಮರವೆಗೆ ಮುನಿವರಲ್ಲದೆ ಅರಿವಿಗೆ ಮುನಿವರುಂಟೆ ಅಯ್ಯಾ? ಕೊಲ್ಲಿ ಆವಿಂಗೆ ಕಾಲ ಕಟ್ಟುವರಲ್ಲದೆ ಮೊಲೆಯ ಕಟ್ಟಿದರುಂಟೆ ಅಯ್ಯಾ? ಗುರುವಾದಡೂ ಆಗಲಿ, ಲಿಂಗವಾದಡೂ ಆಗಲಿ, ಜಂಗಮವಾದಡೂ ಆಗಲಿ ಅರಿವಿಂಗೆ ಶರಣು ಮರವಿಂಗೆ ಮಥನವ ಮಾಡಿದಲ್ಲದೆ ಇರೆ. ಇದು ನೀವು ಕೊಟ್ಟ ಅರಿವಿನ ಮಾರನ ಇರವು, ಸದಾಶಿವಮೂರ್ತಿಲಿಂಗದ ಬರವು.
--------------
ಅರಿವಿನ ಮಾರಿತಂದೆ
ಅರಿವಿನ ಪಥವನರಿಯದಿರ್ದಡೆ, ಮುಂದೆ ಹೆರರಿಗೆ ದೀಕ್ಷೆಯ ಮಾಡಲೇಕೆ? ತೊರೆಯಲದ್ದವನಸೀಲರಿಯದವ ತೆಗೆಯ ಹೋದಂತಾಯಿತ್ತರಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಕುರುಹಿನ ಕುರುಹಿನಲ್ಲಿ, ಅರಿವಿನ ಅರಿವಿನಲ್ಲಿ ಜ್ಞಾನದ ಜ್ಞಾನದಲ್ಲಿ ಇಂತೀ ಸಲೆಸಂದ ಭೇದಂಗಳಲ್ಲಿ ನಿಂದು ನೋಡು. ಏಣಾಂಕಧರ ಸೋಮೇಶ್ವರಲಿಂಗದಲ್ಲಿ ಅರಿವಿನ ಅರಿವು, ಬೆಳಗಾಯಿತ್ತು.
--------------
ಬಿಬ್ಬಿ ಬಾಚಯ್ಯ
ಎನಗೆ ನೀನಿಂಬಕೊಡುವಲ್ಲಿ ಸಕಲವ ಪ್ರಮಾಣಿಸುವದ ಬಿಟ್ಟು, ನಿಃಕಲವಸ್ತುವಾಗು. ಶಕ್ತಿಸಮೇತವ ಬಿಟ್ಟು ನೀ ಶಕ್ತಿ ನಿರ್ಲೇಹವಾಗು. ಚಿತ್ತವ ನೋಡಿಹೆನೆಂಬ ಹೆಚ್ಚು ಕುಂದಬಿಟ್ಟು ನಿಶ್ಚಿಂತನಾಗು. ಅಂದು ಮಿಕ್ಕಾದ ಭಕ್ತರ ಗುಣವ ನೋಡೆಹೆನೆಂದು ಕೊಟ್ಟ ಠಕ್ಕುಠವಾಳವ ಬಿಡು. ಸರ್ವರಾಗ ವಿರಾಗನಾಗಿ, ಸರ್ವಗುಣಸಂಪನ್ನನಾಗಿ, ಜ್ಞಾನಸಿಂಧು ಸಂಪೂರ್ಣನಾಗಿ, ನಿನ್ನ ಅರಿವಿನ ಗುಡಿಯ ಬಾಗಿಲ ತೆರೆದೊಮ್ಮೆ ತೋರಾ. ಎನ್ನಡಿಗೆ ನಿನ್ನ ಗುಡಿಯ ಸಂಬಂಧವ ನೊಡಿಹೆ, ಇದಕ್ಕೆ ಗನ್ನಬೇಡ ಚೆನ್ನ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಕಾಯದ ಕೈಯಲ್ಲಿಪ್ಪುದು ರೂಪುವಿಡಿದ ಲಿಂಗ. ಮನದ ಕೊನೆಯಲ್ಲಿಪ್ಪುದು ಸಾಕಾರವಿರಹಿತಲಿಂಗ. ಅರಿವಿನ ಭೇದಂಗಳ ತಿಳಿದು ನೋಡಿ, ಕಂಡೆಹೆನೆಂಬ ಸನ್ಮತ ಸದ್ಭಾವಿಗಳು ಕೇಳಿರೊ. ಅದು ಚಿದ್ಘನ ಚಿದಾದಿತ್ಯ ಚಿತ್ಸ್ವರೂಪ ಸದಮಲಾನಂದ ಗೂಡಿನ ಗುಮ್ಮಟನಾಥನೊಡೆಯ ಅಗಮ್ಯೇಶ್ವರಲಿಂಗ. ಇದಾರಿಗೂ ಅಪ್ರಮಾಣಮೂರ್ತಿ.
--------------
ಮನುಮುನಿ ಗುಮ್ಮಟದೇವ
ಮನವಿಕಾರದಲ್ಲಿ ತೋರುವ ಸುಳುಹು ತನುವಿಕಾರದಲ್ಲಿ ಕಾಣಿಸಿಕೊಂಡ ಮತ್ತೆ ಅರಿವಿನ ಭೇದ ಎಲ್ಲಿ ಅಡಗಿತ್ತು ? ಅರಿದು ತೋರದ ಮತ್ತೆ ನೆರೆ ಮುಟ್ಟಬಲ್ಲುದೆ ತ್ರಿವಿಧದ ಗೊತ್ತ ? ಇಂತೀ ಭಗಧ್ಯಾನರನೊಪ್ಪ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವು.
--------------
ಪ್ರಸಾದಿ ಭೋಗಣ್ಣ
ಬೀಜದೊಳಗಣ ವೃಕ್ಷದ ಹಣ್ಣ ಅದನಾರು ಮೆಲಬಹುದು ? ಸಸಿಯೊಳಗಣ ಲತೆ ಪರ್ಣ ತಲೆದೋರದ ನಸುಗಂಪಿನ ಕುಸುಮವ ಅದಾರು ಮುಡಿವರು ? ಇಂತೀ ಅರಿವಿನ ಅರಿವ ಕುರುಹಿಟ್ಟು ಕೂಡುವನೆ ಲಿಂಗಾಂಗಿ ? ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನಲ್ಲಿ ಇದು ಸ್ವಾನುಭಾವಿಯ ಸನ್ನದ್ಧಸ್ಥಲ.
--------------
ಮೋಳಿಗೆ ಮಹಾದೇವಿ
ತನ್ನ ತಾನರಿತು ಮಾಡುವಲ್ಲಿ ತಾ ಬೇಡದೆ ಅನ್ಯರಿಗೆ ಹೇಳಿ ಈಸಿಕೊಂಬ ಡಾಳಕತನವೇಕೆ? ಅದು ಗುರುಚರಕ್ಕೆ ಅರಿವಿನ ಮತವಲ್ಲ. ಇಂತಿವನರಿದು ಮರಳಿ ಕಾಡುವ ಶಬರವೇಷಿಗಳು ಸದಾಶಿವಮೂರ್ತಿಲಿಂಗಕ್ಕೆ ಹೊರಗು.
--------------
ಅರಿವಿನ ಮಾರಿತಂದೆ
ಉಪಮೆ ಉಪಮಿಸಲರಿಯದೆ ಉಪಮಾತೀತವೆನುತ್ತಿದ್ದಿತ್ತು. ಅರಿವು, ಅರಿವಿನ ಮರೆಯಲ್ಲಿರ್ದುದನರಿಯಲರಿಯದೆ, ಪರಾಪರವೆಂದು ನುಡಿಯುತ್ತಿದ್ದಿತ್ತು. ಧ್ಯಾನ ಧ್ಯಾನಿಸಲರಿಯದೆ, ಧ್ಯಾನರೂಪಾತೀತನೆಂದು, ತದ್ಧ್ಯಾನಗೊಂಡಿತ್ತು. ಜ್ಞಾತೃ ಜ್ಞಾನ ಜ್ಞೇಯಕ್ಕೆ ಇನ್ನಾವ ಜ್ಞಾನವೊ? ವೇದವಿಜ್ಞಾನವೆಂದುದಾಗಿ, `ತತ್ತ್ವಮಸಿ' ವಾಕ್ಯಂಗಳೆಲ್ಲವೂ ಹುಸಿಯಾಗಿ ಹೋದವು. ಸಚ್ಚಿದಾನಂದವೆಂದುದಾಗಿ ದ್ವೈತಾದ್ವೈತಿಗಳೆಲ್ಲ ಸಂಹಾರವಾಗಿ ಹೋದರು. ಬಂದೂ ಬಾರದ, ನಿಂದ ನಿರಾಳ ಗುಹೇಶ್ವರ.
--------------
ಅಲ್ಲಮಪ್ರಭುದೇವರು
ಅಧರ ತಾಗಿದ ರುಚಿಯ, ಉದರ ತಾಗಿದ ಸುಖವ, ಲಿಂಗಾರ್ಪಿತವ ಮಾಡಿದಡೆ ಕಿಲ್ಬಿಷ ನೋಡಿರೆ. ಓಗರ ಪ್ರಸಾದವಲ್ಲ; ಪ್ರಸಾದ ಅರ್ಪಿತವಲ್ಲ. ಇದನರಿದ ಶರಣಂಗೆ ಆಚಾರವಿಲ್ಲ, ಆಚಾರವಿಲ್ಲದ ಶರಣಂಗೆ ಲಿಂಗವಿಲ್ಲ. ಲಿಂಗವಿಲ್ಲದ ಶರಣನ ನಿಲವು; ಶಿವಸಂಪತ್ತಿನಲಾದ ಉದಯ, ವಿಪರೀತ ಸುಳುಹು ! ಪ್ರಕಟಸಂಸಾರದ ಬಳಕೆಯ ಹೊಡಕಟ್ಟಿ ಹಾಯ್ದು ನಿಬ್ಬೆರಗು ಎಸೆವುದು ಅರಿವಿನ (ಎರವಿನ?) ಘಟದಲ್ಲಿ ! ಅರ್ಪಿಸಿದ ಪ್ರಸಾದವನು ಭೇದದಿಂದ ರುಚಿಸುವನಲ್ಲ ಕೇಳಿರಯ್ಯಾ. ದಿಟವ ಬಿಟ್ಟು ಸಟೆಯಲ್ಲಿ ನಡೆಯ ನೋಡಾ. ಇಲ್ಲದ ಲಿಂಗವನುಂಟುಮಾಡಿ ಪೂಜಿಸುವ, ಬರಿಯ ಬಣ್ಣಕರೆಲ್ಲ ನೀವು ಕೇಳಿರೆ. ನೀವು ಪೂಜಕರಪ್ಪಿರಲ್ಲದೆ, ಗುಹೇಶ್ವರಲಿಂಗವಿಲ್ಲೆಂಬ ಶಬುದ ಸತ್ತು ಹುಟ್ಟುವರಿಗೆಲ್ಲಿಯದೊ ?
--------------
ಅಲ್ಲಮಪ್ರಭುದೇವರು
ಅರಿವಿನ ಗುಣ ಬಸವಣ್ಣನೊಳಗಡಕವಯ್ಯಾ, ಮರಹಿನ ಜ್ಞಾನ ಚೆನ್ನಬಸವಣ್ಣನೊಳಗಡಕವಯ್ಯಾ. ಅರಿವು ಮರವೆ ತಾನೆ ಶಿವರೂಪುಪ್ರಭೆ ಪ್ರಭುಲಿಂಗಮೂರ್ತಿಯಾಯಿತ್ತು ಕಪಿಲಸಿದ್ಧಮ್ಲನಾಥಯ್ಯಾ.
--------------
ಸಿದ್ಧರಾಮೇಶ್ವರ
ಕಾಲಿಗೆ ಕೋಳ, ಕೈಗೆ ಸಂಕಲೆ, ಕೊರಳಿಗೆ ಪಾಶ ಪಾಷಂಡಿಗಳಾಗುತ್ತ, ಮತ್ತಾ ಅರಿವಿನ ಹೊಲಬೆಲ್ಲ ಅಡಗಿತ್ತು. ಅಂಗದ ಕ್ರೀ, ಲಿಂಗದ ಕೂಟ, ನಿರಂಗದ ಸುಖವೆಂಬುದು ಆ ಮೂರರ ಬಂಧದಲ್ಲಿ ಅಡಗಿತ್ತು. ಬೇರೊಂದು ಸಂಗವೆಲ್ಲಿದ್ದಿತ್ತು ಹೇಳಾ ? ನಿರಂಗವೆಂಬ ನಾಮವಿಲ್ಲದನೆ ಕಾಮಕ್ಕೇಕೆ ಕೂಟವಾದೆ ? ದುರ್ಮುಖಕ್ಕೇಕೆ ಆತ್ಮನಾದೆ ? ಕಾಮಧೂಮ ಧೂಳೇಶ್ವರನೆಂಬುದಕ್ಕೆ ಕುರುಹಿಲ್ಲದ ನೆರೆ ನಾಮವಾದೆಯಲ್ಲಾ.
--------------
ಮಾದಾರ ಧೂಳಯ್ಯ
ಮಾಟಕೂಟ ಸಮಯಾಚಾರ ಸದ್ಭಕ್ತಿಯ ನೆಲೆಯ ನಮ್ಮ ಬಸವಯ್ಯನಲ್ಲದೆ ಮತ್ತಾರೂ ಅರಿಯರು. ಅರಿವಿನ ಕುರುಹನಾತ್ಮದಲ್ಲಿ ನಿಲಿಸಿ, ಶಿವಕೂಟಸಮಾಧಿಯ ಕಂಡು ಆನು ಬದುಕಿದೆನಯ್ಯಾ ಸಂಗಯ್ಯಾ.
--------------
ನೀಲಮ್ಮ
ಇನ್ನಷ್ಟು ... -->