ಸಾಸಿರದಳಕಮಲವೆಂದಡೆ ಸೂಸಿಕೊಂಡಿರುವ ಮನ.
ಪವನವೆಂದಡೆ ಎಲ್ಲೆಡೆಯಲ್ಲಿ ಸೂಸಿ ಆಡುವಂತಹದು.
ಬಿಂದುವೆಂದಡೆ ಆಗುಮಾಡುವಂತಹದು.
ಈ ಮನ ಪವನ ಬಿಂದು ಮೂರನು ಒಡಗೂಡಿ ನೋಡಲು,
ಪರಂಜ್ಯೋತಿಪ್ರಕಾಶದಂತಹ ಬೆಳಗೆ ಎನ್ನ ಕಂಗಳ ಮುಂದೆ ನಿಂದಿತ್ತು.
ಆ ಮಹಾಬೆಳಗನೆ ಕಂಗಳಲ್ಲಿ ಹೆರೆಹಿಂಗದೆ ನೋಡಿದಡೆ,
ಎನ್ನಂಗದ ಒಳಹೊರಗೆ ಪರಿಪೂರ್ಣವಾಗಿದ್ದಿತ್ತು ಕಾಣಾ
ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ, ನಿಮ್ಮ ಪಾದಕರುಣದಿಂದ.