ಅಥವಾ

ಒಟ್ಟು 6 ಕಡೆಗಳಲ್ಲಿ , 4 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತ್ತಮಾ, ಸಹಸ್ರಕಮಲದ ವಿಭಾಗೆಯಂ ಋಗ್ವೇದದಲ್ಲಿ ತೋರ್ದಪೆನೆಂತೆನೆ- `ಆಪ್ಮಾನಂ ತೀರ್ಥಂ ಕ ಇಹ ಪ್ರಾಚಥ್ಯೇನಪಥಾ ಪ್ರಪಿಬಂತಿಸುತಸ್ಯ ವದ್ಯಾವಾಪೃಥುವೀ ತಾವದಿತ್ತತ್ ಸಹಸ್ರಥಾ ಪಂಚದಶಾನ್ಯುಕ್ಥೌ ಯಾ- ಸಹಸ್ರಥಾ ಮಹಿಮಾನಃ ಸಹಸ್ರಃ ಯಾವದ್ಬ ್ರಹ್ಮಾದ್ಥಿಷ್ಠಿತಂ ತಾವತೀ ವಾಕ್' ಟೀಕೆ|| ಸಹಸ್ರಥಾ- ಸಾವಿರ ಪ್ರಕಾರವಾದ ಮಹಿಮಾನಃ- ಮಹಿಮರೂಪರಾದ ಚಿದಾನಂದಾತ್ಮರುಗಳು ಬ್ರಹ್ಮಾದ್ಥಿಷ್ಠಿತಂ- `ಬ್ರಹ್ಮಾತ್ಮನಾಂ ಬ್ರಹ್ಮಮಹದ್ಯೋನಿರಹಂ ಬೀಜಪ್ರದಃ ಪಿತಾ' ಎಂದುಂಟಾಗಿ, ಬ್ರಹ್ಮವೆಂದು ಪ್ರಕೃತಿ- ಆ ಪ್ರಕೃತಿಯಿಂದೆ ಅದ್ಥಿಷ್ಠಿತಂ- ಅದ್ಥಿಷ್ಠಿಸಲ್ಪಟ್ಟುದಾಗಿ ಸಹಸ್ರಃ- ಸಾವಿರಗಣನೆಯನುಳ್ಳುದಾಗಿ ಇತ್- ಲಯಾದ್ಥಿಷ್ಠಾನ ರೂಪವಾದ ತತ್- ಆ ಬ್ರಹ್ಮವು, ಯಾವತ್- ಎಷ್ಟು ಪ್ರಮಾಣವುಳ್ಳುದು ತಾವತ್- ಅಷ್ಟು ಪ್ರಮಾಣವಾಗಿ ಆಪ್ಮಾನಂ- ಪಾದೋದಕರೂಪವಾದ, ತೀರ್ಥಂ- ತೀರ್ಥವನು ಯೇನ ಪಥಾ- ಆವಮಾರ್ಗದಿಂದೆ, ಸು- ಚೆನ್ನಾಗಿ ಪ್ರ ಪಿಬಂತಿ- ಪಾನವ ಮಾಡುವರು ತಸ್ಯ- ಆ ಮಾರ್ಗದ, ಉಕ್ಥಾ- ನಿಲುಕಡೆಯಾದ ವಾಕ್- ಶಬ್ದಬ್ರಹ್ಮವು ಸಹಸ್ರಥಾ- ಸಾವಿರ ಪ್ರಕಾರವುಳ್ಳದಾಗಿ ದ್ಯಾವಾ ಪೃಥಿವೀ- ದ್ಯಾವಾಪೃಥುಗಳ ವ್ಯಾಪಿಸಿಕೊಂಡುದಾಗಿ ಪಂಚ ದಶಾನಿ- ಐವತ್ತು ವರ್ಣಂಗಳಾಕಾರವುಳ್ಳುದಾಗಿ ತಾವತಿ- ಅಷ್ಟಾಗಿಹುದೆಂದು, ಕಃ- ಚತುರ್ಮುಖದ ಬ್ರಹ್ಮನು ಇಹ- ಈರ್ಣಾಧ್ರ್ವದಲ್ಲಿ ಪ್ರಾವೋಚತ್- ನುಡಿದನೆಂದು- ನಿರವಿಸಿದೆಯಯ್ಯಾ ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಧ್ಯಾನ ಧಾರಣ ಸಮಾಧಿಯೆಂತೆಂದಡೆ ಸದ್ಗುರುವೆ ಕರುಣಿಪುದು. ಕೇಳಯ್ಯ ಮಗನೆ : ಧ್ಯಾನ ಯೋಗವೆಂತೆಂದಡೆ : ಷಡಾಧಾರಚಕ್ರದೊಳಗೆ ಆಧಾರ ಮೊದಲಾಗಿ ಆಜ್ಞೆ ಕಡೆತನಕ ಇಷ್ಟಲಿಂಗವ ಧ್ಯಾನಿಸಿ ಅರ್ಚಿಸಿ ಪೂಜಿಸಿ ಅಲ್ಲಿ ತ್ರಿಕೂಟ ಸಂಗಮದಲ್ಲಿ ಗಂಗಾ ಯಮುನಾ ಸರಸ್ವತಿ ನದಿಗಳು ಕೂಡಿದ ಠಾವಿನಲ್ಲಿ ಪ್ರಮಥಗಣಂಗಳು ಮೊದಲಾಗಿ ಅಲ್ಲಿ ಮಜ್ಜನವ ನೀಡುತ್ತಿಹರು. ಅಲ್ಲಿ ಸೂರ್ಯಪೀಠದ ಮೇಲೆ ಗುರುವು ಮೂರ್ತವ ಮಾಡಿರಲು ಅವರ ಪಾದಾರ್ಚನೆಯಂ ಮಾಡಿ, ಪಾದೋದಕದ ನದಿಗಳಲ್ಲಿ ಸ್ನಾನವ ಮಾಡಿ ಅವರ ಸಂಗಡ ಏಳನೆಯ ಮಂಟಪಕ್ಕೆ ಹೋಗಿ ಅಲ್ಲಿ ಪಶ್ಚಿಮಚಕ್ರದಿಂದ ನಿರಂಜನಜಂಗಮವು ಶಿಖಾಚಕ್ರದಲ್ಲಿರ್ದ ಬಸವಾದಿ ಪ್ರಮಥರು ಮೊದಲಾದವರು ಬಿಜಯಮಾಡಿ, ಅಲ್ಲಿ ಅಸಂಖ್ಯಾತ ಪ್ರಮಥರು, ನೂತನ ಗಣಂಗಳು ಸಹವಾಗಿ ಲಿಂಗಾರ್ಚನೆಯ ಮಾಡುತ್ತಿಹರು. ಆ ಲಿಂಗಾರ್ಚನೆ ಎಂತೆಂದಡೆ : ಮೊದಲು ಚಿದ್ಭಸ್ಮವನೆ ಧರಿಸಿ, ಆನಂದೋದಕದಿಂದ ಲಿಂಗಕ್ಕೆ ಕ್ರಿಯಾಮಜ್ಜನವ ನೀಡಿ, ಅಷ್ಟತನುವಿನ ಅಷ್ಟಸುಗಂಧವ ಧರಿಸಿ, ಕರಣಂಗಳ ಸಂಚಲವಿಲ್ಲದ ಗುಣತ್ರಯದಕ್ಷತೆಯ ಧರಿಸಿ, ಸಾವಿರದೈವತ್ತು ಪ್ರಣವದ ಪರಿಮಳ ತುಂಬಿರ್ದ ಪುಷ್ಪವ ಧರಿಸಿ, ದಶವಾಯುಗಳ ಗುಣಧರ್ಮಂಗಳ ಜ್ಞಾನಾಗ್ನಿಯೊಳು ನೀಡಿ, ದಶಾಂಗದ ಸದ್ವಾಸನೆಯ ಧೂಪವ ಧರಿಸಿ, ಹೃದಯವೆಂಬ ಪ್ರಣತಿಯಲ್ಲಿ ದೃಢಚಿತ್ತವೆಂಬ ಬತ್ತಿಯನಿರಿಸಿ, ಅರುಹೆಂಬ ತೈಲವನೆರದು, ಮಹಾಜ್ಞಾನವೆಂಬ ಜ್ಯೋತಿಯ ಮುಟ್ಟಿಸಿ ಅದರಿಂದೊದಗಿದ ಏಕಾರತಿ ತ್ರಿಯಾರತಿ ಪಂಚಾರತಿ ಕಡ್ಡಿ ಬತ್ತಿ ಮೊದಲಾದ ಮಹಾಪ್ರಕಾಶದ ದೀಪವ ಧರಿಸಿ, ಕ್ರಿಯಾ ಜ್ಞಾನ ಇಚ್ಫಾ ಆದಿ ಪರ ಚಿತ್‍ಶಕ್ತಿ ಮೊದಲಾದವರು ಆರತಿಯ ಪಿಡಿದಿಹರು. ಆ ಮೇಲೆ ಪಾದತೀರ್ಥವ ಸಲಿಸಿ, ಮತ್ತೆ ಐವತ್ತು ದಳದಲ್ಲಿರ್ದ ಐವತ್ತು ರುದ್ರಕನ್ನಿಕೆಯರು ಅಡುಗೆಯ ಮಾಡಿ, ಅವರಿಗೆ ಇಚ್ಫಾಪದಾರ್ಥವ ನೀಡುತ್ತಿಹರು. ಅವರ ಒಕ್ಕುಮಿಕ್ಕ ಪ್ರಸಾದವನುಂಡು ಫಲದಾಕಾಂಕ್ಷೆಗಳಿಲ್ಲದೆ ಉಲುಹಡಗಿದ ನಿಜ ಪ್ರಭಾಲತೆ ಪರ್ಣದ ವೀಳ್ಯವನಿತ್ತು ಅವರ ತಾಂಬೂಲ ಪ್ರಸಾದವ ಕೊಂಡು ಪರಿಣಾಮಿಸಿ ಮನ ಭಾವಂಗಳಿಂದ ಪ್ರತ್ಯಕ್ಷವಾಗಿ ಕಂಡು, ಧ್ಯಾನಿಸುವುದೇ ಧ್ಯಾನ ಯೋಗ. ಇನ್ನು ಧಾರಣಯೋಗದ ವಿವರ : ಕರದೊಳಗೆ ಇಷ್ಟಲಿಂಗವ ಮೂರ್ತವ ಮಾಡಿಸಿ ಮನದೊಳಗೆ ಪ್ರಾಣಲಿಂಗವ ಮೂರ್ತವ ಮಾಡಿಸಿ ಭಾವದೊಳಗೆ ತೃಪ್ತಿಲಿಂಗವ ಮೂರ್ತವ ಮಾಡಿಸಿ ಕರ ಮನ ಭಾವದೊಳಗೆ ಪ್ರತ್ಯಕ್ಷವಾಗಿ ಕಂಡು ಧರಿಸಿಕೊಂಡಿಪ್ಪುದೀಗ ಧಾರಣಯೋಗ. ಇನ್ನು ಸಮಾಧಿಯೋಗದ ವಿವರ : ಆ ಇಷ್ಟ ಪ್ರಾಣ ಭಾವಲಿಂಗವ ಏಕವ ಮಾಡಿ, ಅಲ್ಲಿ ಐಕ್ಯವಾಗಿಪ್ಪುದೀಗ ಸಮಾಧಿಯೋಗ ಎಂದರುಹಿದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಅಂಥ ಬ್ರಹ್ಮಾಂಡವ ಐವತ್ತು ಕೋಟಿಯ ಮೇಲೆ ಮೂರುಸಾವಿರದಾ ಇಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ವಜ್ರದೇಹವೆಂಬ ಭುವನ. ಆ ಭುವನದೊಳು ವಜ್ರಕಾಯನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಸಾವಿರಕೋಟಿಯ ಮೇಲೆ ನಾಲ್ಕುನೂರು ಕೋಟಿ ರುದ್ರ ಬ್ರಹ್ಮ ನಾರಾಯಣರಿಹರು. ಸಾವಿರಕೋಟಿಯ ಮೇಲೆ ನಾಲ್ಕುನೂರುಕೋಟಿ ವೇದಪುರುಷರು ಇಂದ್ರಚಂದ್ರಾದಿತ್ಯರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಶಿವತತ್ತ್ವದ ಅಪ್ಪುವಿನ ಮೇಲೆ ನಿರಾಳ ಸ್ವಾಧಿಷಾ*ನಚಕ್ರ, ಅಲ್ಲಿಯ ಪದ್ಮ ನಾನೂರು ಐವತ್ತು ದಳದ ಪದ್ಮ ; ಆ ಪದ್ಮವು ಉಪಮೆ ಇಲ್ಲದ ವರ್ಣ. ಅಲ್ಲಿಯ ಅಕ್ಷರ ನಾನೂರ ಐವತ್ತಕ್ಷರ ; ಆ ಅಕ್ಷರ ನಿರಾಕಾರವಾಗಿಹುದು. ಅಲ್ಲಿಯ ಶಕ್ತಿ ನಿರಾಳ ಈಶ್ವರಶಕ್ತಿ. ನಿತ್ಯಾನಂದಬ್ರಹ್ಮವೆ ಅಧಿದೇವತೆ. ಅಲ್ಲಿಯ ನಾದ ಪ್ರಣವನಾದ. ಅಲ್ಲಿಯ ಬೀಜಾಕ್ಷರ ಉಕಾರ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಸ್ವಸ್ತಿ ಸಮಸ್ತಪ್ರಶಸ್ತಿ ಸಹಿತಂ ಶ್ರೀಮತ್ ಕಲ್ಯಾಣಪುರದ ಮಹಾತ್ಮ್ಯ ಎಂತೆಂದಡೆ: ವಿಸ್ತರಿಸಿ ಪೇಳುವೆನು; ಎಲ್ಲಾ ಶಿವಗಣಂಗಳು ಕೇಳಿ ಕೃತಾರ್ಥರಾಗಿರಯ್ಯಾ. ಹದಿನಾಲ್ಕು ಭುವನಕ್ಕೆ ಕಳಸವೆಂದೆನಿಸುವ ರುದ್ರಲೋಕವೆ ಮತ್ರ್ಯಕ್ಕಿಳಿತಂದು, ಕಲ್ಯಾಣವೆಂಬ ಪುರವಾಗಿ ಹುಟ್ಟಿತ್ತು ನೋಡಿರಯ್ಯಾ ! ಅಲ್ಲಿ ಸತ್ಯರು ಸಾತ್ತ್ವಿಕರು ನಿತ್ಯರು ನಿಜೈಕ್ಯರು ಮಹಾಜ್ಞಾನಿಗಳು ಪರಮಶಿವಯೋಗಿಗಳು ಶಿವಾನುಭಾವಸಂಪನ್ನರು ಶಿವಲಿಂಗಪ್ರಾಣಿಗಳು ಶಿವಪ್ರಸಾದಪಾದೋದಕಸಂಬಂಧಿಗಳು ಶಿವಾಚಾರವೇದ್ಯರು ಶಿವಾಗಮಸಾಧ್ಯರು ಶಿವಸಮಯಪಕ್ಷರುಗಳಲ್ಲದೆ, ಮತ್ತಾರು ಅಲ್ಲಿಲ್ಲ ನೋಡಿರಯ್ಯಾ. ಪಾಪಿಗಳು ಕೋಪಿಗಳು ಅಸತ್ಯರು ಅನಾಚಾರಗಳು ಹೊಗಬಾರದು ಕಲ್ಯಾಣವ. ಮೀರಿ ಹೊಕ್ಕೆಹೆವೆಂಬವರಿಗೆ ಬಾಳ ಬಾಯಧಾರೆ ನೋಡಿರಯ್ಯಾ. ಆ ಕಲ್ಯಾಣ ಅಗಮ್ಯ ಅಗೋಚರ ನೋಡಿರಯ್ಯಾ. ಆ ಮಹಾಕಲ್ಯಾಣದ ವಿಸ್ತೀರ್ಣ ತಾನೆಂತೆಂದಡೆ: ಹನ್ನೆರಡು ಯೋಜನ ಪರಿಪ್ರಮಾಣದ ವಿಸ್ತ್ರೀರ್ಣಪಟ್ಟಣಕ್ಕೆ ಮುನ್ನೂರರವತ್ತು ಬಾಗಿಲವಾಡ. ಆ ಬಾಗಿಲಿಂಗೆ ನೂರ ಐವತ್ತೈದು ವಜ್ರದ ಹಾರೆಯ ಕದಂಗಳು. ಇನ್ನೂರ ಇಪ್ಪತ್ತೈದು ಕಲುಗೆಲಸದ ದ್ವಾರವಟ್ಟಕ್ಕೆ ನಾನೂರ ಐವತ್ತು ಸುವರ್ಣದ ಕೆಲಸದ ಕದಂಗಳು, ಅಲ್ಲಿ ನೂರ ಹದಿನೈದು ಚೋರಗಂಡಿ; ಅವಕ್ಕೆ ನೂರ ಹದಿನೈದು ಮೊಳೆಯ ಕದಂಗಳು. ಇಪ್ಪತ್ತು ಬಾಗಿಲು ಆಳ್ವರಿಯೊಳಗಿಪ್ಪವಾಗಿ ಅವಕ್ಕೆ ಕದಂಗಳಿಲ್ಲ. ಆ ಪಟ್ಟಣಕ್ಕೆ ಬರಿಸಿಬಂದ ಕೋಂಟೆ ನಾಲ್ವತ್ತೆಂಟು ಯೋಜನ ಪರಿಪ್ರಮಾಣು. ಬಾಹತ್ತರ [ನಿಯೋಗಿಗಳ] ಮನೆ ಲಕ್ಷ; ಮಂಡಳಿಕರ ಮನೆ ಲಕ್ಷ; ಸಾಮಂತರ ಮನೆ ಲಕ್ಷ; ರಾಯ ರಾವುತರ ಮನೆಯೊಳಡಗಿದ ಮನೆಗಳಿಗೆ ಲೆಕ್ಕವಿಲ್ಲ. ದ್ವಾದಶ ಯೋಜನ ವಿಸ್ತ್ರೀರ್ಣದ ಸೂರ್ಯವೀಥಿ ನೂರಿಪ್ಪತ್ತು; ದ್ವಾದಶ ಯೋಜನದ ಸೋಮವೀಥಿ ನೂರಿಪ್ಪತ್ತೈದು. ಅದರಿಂ ಮಿಗಿಲಾದ ಒಳಕೇರಿ ಹೊರಕೇರಿಗೆ ಗಣನೆಯಿಲ್ಲ. ಆ ಪಟ್ಟಣದೊಳಗೆ ಲಕ್ಷದ ಮೇಲೆ ತೊಂಬತ್ತಾರು ಸಾವಿರ ಶಿವಾಲಯ. ಆ ಶಿವಾಲಯಂಗಳಿಗೆ ಮುಖ್ಯವಾದ ತ್ರಿಪುರಾಂತಕದೇವರ ಶಿವಾಲಯ. ಮುನ್ನೂರರವತ್ತು ಪದ್ಮಪತ್ರ ತೀವಿದ ಸರೋವರಗಳು. ಎರಡು ಲಕ್ಷವು ಎಂಬತ್ತೈದು ಸಾವಿರದ ಏಳು ನೂರೆಪ್ಪತ್ತು ದಾಸೋಹದ ಮಠಂಗಳು. ಆ ದಾಸೋಹದ ಮಠಂಗಳಿಗೆ ಮುಖ್ಯವಾದ ಬಸವರಾಜದೇವರ ಮಠದ ವಿಸ್ತ್ರೀರ್ಣವೆಂತೆಂದಡೆ: ಯೋಜನವರಿಯ ಬಿನ್ನಾಣದ ಕಲುಗೆಲಸದ ¥õ್ಞಳಿ; ಅತಿ ಸೂಕ್ಷ್ಮದ ಕುಸುರಿಗೆಲಸದ ದ್ವಾರವಟ್ಟವೈದು. ಅವಕ್ಕೆ ಪಂಚಾಕ್ಷರಿಯ ಶಾಸನ. ಮಿಸುನಿಯ ಕಂಭದ ತೋರಣಗಳಲಿ ರುದ್ರಾಕ್ಷಿಯ ಸೂಸಕ ಆ ಬಾಗಿಲುವಾಡದಲ್ಲಿ ಒಪ್ಪುತಿರ್ಪವಯ್ಯಾ, ನಂದಿಯ ಕಂಭದ ಧ್ವಜ ಉಪ್ಪರಗುಡಿ ಪತಾಕೆ ವ್ಯಾಸಧ್ವಜ ಒಪ್ಪುತಿರ್ಪವಯ್ಯಾ, ಆ ಮಧ್ಯದಲ್ಲಿ ಬಸವರಾಜದೇವರ ಸಿಂಹಾಸನದ ವಿಸ್ತ್ರೀರ್ಣದ ಪ್ರಮಾಣು: ಸಹಸ್ರಕಂಭದ ಸುವರ್ಣದುಪ್ಪರಿಗೆ; ಆ ಮನೆಗೆತ್ತಿದ ಹೊನ್ನಕಳಸ ಸಾವಿರ. ಗುರುಲಿಂಗ ಜಂಗಮಕ್ಕೆ ಪಾದಾರ್ಚನೆಯ ಮಾಡುವ ಹೊಕ್ಕರಣೆ ನಾಲ್ಕು ಪುರುಷಪ್ರಮಾಣದ ಘಾತ. ಅಲ್ಲಿ ತುಂಬಿದ ಪಾದೋದಕದ ತುಂಬನುಚ್ಚಲು ಬೆಳೆವ ರಾಜಶಾಲಿಯ ಗದ್ದೆ ಹನ್ನೆರಡು ಕಂಡುಗ, ಆ ಯೋಜನವರಿಯ ಬಿನ್ನಾಣದ ಅರಮನೆಯ ವಿಸ್ತ್ರೀರ್ಣದೊಳಗೆ ಲಿಂಗಾರ್ಚನೆಯ ಮಾಡುವ ಮಠದ ಕಟ್ಟಳೆ ಲಕ್ಷದ ಮೇಲೆ ತೊಂಬತ್ತಾರು ಸಾವಿರ. ಇನ್ನು ಬಸವರಾಜದೇವರು ಮುಖ್ಯವಾದ ಅಸಂಖ್ಯಾತರ ಮಠಂಗಳು ಆ ಕಲ್ಯಾಣದೊಳಗೆ ಎಷ್ಟು ಎಂದಡೆ: ಹನ್ನೆರಡು ಸಾವಿರ ಕಟ್ಟಳೆಯ ನೇಮದ ಭಕ್ತರ ಮಠಂಗಳು, ಇಪ್ಪತ್ತೆಂಟು ಸಾವಿರ ಮಹಾಮನೆಗಳು; ಹತ್ತು ಸಾವಿರ ನಿತ್ಯನೇಮಿಗಳ ಮಠಂಗಳು; ಹದಿನೈದು ಸಾವಿರ ಚಿಲುಮೆಯಗ್ಗವಣಿಯ ವ್ರತಸ್ಥರ ಮಠಂಗಳು; ಐದು ಸಾವಿರ ವೀರವ್ರತನೇಮಿಗಳ ಕಟ್ಟಳೆಯ ಮಠಂಗಳು; ಹನ್ನೆರಡು ಸಾವಿರ ಅಚ್ಚಪ್ರಸಾದಿಗಳ ಮಠಂಗಳು, ಒಂದು ಸಾವಿರ ಅರವತ್ತು ನಾಲ್ಕು ಶೀಲಸಂಪನ್ನರ ಮಠಂಗಳು; ನಿತ್ಯ ಸಾವಿರ ಜಂಗಮಕ್ಕೆ ಆರೋಗಣೆಯ ಮಾಡಿಸುವ ದಾಸೋಹಿಗಳ ಮಠಂಗಳು ಮೂವತ್ತೆರಡು ಸಾವಿರ; ನಿತ್ಯ ಐನೂರು ಜಂಗಮಕ್ಕೆ ಒಲಿದು ದಾಸೋಹವ ಮಾಡುವ ಸತ್ಯಸದಾಚಾರಿಗಳ ಮಠಂಗಳು ಐವತ್ತೆಂಟು ಸಾವಿರ; ನಿತ್ಯ ಸಾವಿರದೈನೂರು ಜಂಗಮಕ್ಕೆ ಒಲಿದು ದಾಸೋಹವ ಮಾಡುವ ದಾಸೋಹಿಗಳ ಮಠಂಗಳು ಹನ್ನೊಂದು ಸಾವಿರ; ನಿತ್ಯ ಅವಾರಿಯಿಂದ ಮಾಡುವ ಮಾಟಕೂಟದ ಸದ್ಭಕ್ತರ ಮಠಂಗಳು ಒಂದು ಲಕ್ಷ; ಜಂಗಮಸಹಿತ ಸಮಯಾಚಾರದಿಂದ ಲಿಂಗಾರ್ಚನೆಯ ಮಾಡುವ ಜಂಗಮಭಕ್ತರ ಮಠಂಗಳು ಎರಡು ಸಾವಿರದೇಳ್ನೂರೆಪ್ಪತ್ತು; ಅಂತು ಎರಡು ಲಕ್ಷವು ಎಂಬತ್ತೈದು ಸಾವಿರದ ಏಳುನೂರೆಪ್ಪತ್ತು. ಇಂತಪ್ಪ ಅಸಂಖ್ಯಾತರಿಗೆ ಮುಖ್ಯವಾಗಿ ರುದ್ರಲೋಕದಿಂದಿಳಿತಂದ ಪ್ರಮಥಗಣಂಗಳ ಮಠಂಗಳು ಏಳು ನೂರೆಪ್ಪತ್ತು. ಇಂತೀ ಮಹಾಪ್ರಮಥರಿಗೆ ಪುರಾತರಿಗೆ ಅಸಂಖ್ಯಾತ ಮಹಾಗಣಂಗಳಿಗೆ ಪ್ರಥಮ ನಾಯಕನಾಗಿ, ಏಕಮುಖ, ದಶಮುಖ, ಶತಮುಖ, ಸಹಸ್ರಮುಖ, ಲಕ್ಷಮುಖ, ಕೋಟಿಮುಖ, ಅನಂತಕೋಟಿಮುಖನಾಗಿ ಭಕ್ತರಿಗೆ ಒಡನಾಡಿಯಾಗಿಪ್ಪನು ಸಂಗನಬಸವಣ್ಣ. ಜಗದಾರಾಧ್ಯ ಬಸವಣ್ಣ, ಪ್ರಮಥಗುರು ಬಸವಣ್ಣ, ಶರಣಸನ್ನಹಿತ ಬಸವಣ್ಣ, ಸತ್ಯಸಾತ್ವಿಕ ಬಸವಣ್ಣ, ನಿತ್ಯನಿಜೈಕ್ಯ ಬಸವಣ್ಣ, ಷಡುಸ್ಥಲಸಂಪನ್ನ ಬಸವಣ್ಣ, ಸರ್ವಾಚಾರಸಂಪನ್ನ ಬಸವಣ್ಣ, ಸರ್ವಾಂಗಲಿಂಗಿ ಬಸವಣ್ಣ, ಸುಜ್ಞಾನಭರಿತ ಬಸವಣ್ಣ, ನಿತ್ಯಪ್ರಸಾದ ಬಸವಣ್ಣ, ಸಚ್ಚಿದಾನಂದಮೂರ್ತಿ ಬಸವಣ್ಣ, ಸದ್ಯೋನ್ಮುಕ್ಮಿರೂಪ ಬಸವಣ್ಣ, ಅಖಂಡಪರಿಪೂರ್ಣ ಬಸವಣ್ಣ, ಅಭೇದ್ಯಭೇದಕ ಬಸವಣ್ಣ, ಅನಾಮಯಮೂರ್ತಿ ಬಸವಣ್ಣ, ಮಹಾಮನೆಯ ಮಾಡಿದಾತ ಬಸವಣ್ಣ, ರುದ್ರಲೋಕವ ಮತ್ರ್ಯಲೋಕಕ್ಕೆ ತಂದಾತ ಬಸವಣ್ಣ, ಶಿವಚಾರದ ಘನವ ಮೆರೆದಾತ ಬಸವಣ್ಣ. ಇಂತಹ ಬಸವಣ್ಣನ ಭಕ್ತಿಯನು ಒರೆದೊರೆದು ನೋಡುವ, ಪ್ರಜ್ವಲಿತವ ಮಾಡುವ ಅಶ್ವಪತಿ, ಗಜಪತಿ, ನರಪತಿರಾಯ, ರಾಜಾಧಿರಾಜ ಬಿಜ್ಜಳರಾಯನೂ ಆ ಬಸವಣ್ಣನೂ ಆ ಕಲ್ಯಾಣಪಟ್ಟಣದೊಳಗೆ ಸುಖಸಂಕಥಾವಿನೋದದಿಂದ ರಾಜ್ಯಂಗೆಯುತ್ತಿರಲು, ಆ ಕಲ್ಯಾಣದ ನಾಮವಿಡಿದು ವಿವಾಹಕ್ಕೆ ಕಲ್ಯಾಣವೆಂಬ ನಾಮವಾಯಿತ್ತು. ಲೋಕದೊಳಗೆ ಕಲ್ಯಾಣವೆ ಕೈಲಾಸವೆನಿಸಿತ್ತು. ಇಂತಪ್ಪ ಕಲ್ಯಾಣದ ದರುಶನವ ಮಾಡಿದಡೆ ಭವಂ ನಾಸ್ತಿ, ಇಂತಪ್ಪ ಕಲ್ಯಾಣವ ನೆನೆದಡೆ ಪಾಪಕ್ಷಯ, ಇಂತಪ್ಪ ಕಲ್ಯಾಣದ ಮಹಾತ್ಮೆಯಂ ಕೇಳಿದಡೆ ಕರ್ಮಕ್ಷಯವಹುದು, ಮೋಕ್ಷ ಸಾಧ್ಯವಹುದು, ಇದು ಕಾರಣ, ಕೂಡಲಚೆನ್ನಸಂಗಮದೇವಾ, ನಿಮ್ಮ ಭಕ್ತ ಬಸವಣ್ಣನಿದgಠ್ಞವೆ ಮಹಾಕಲ್ಯಾಣವೆಂದರಿದು ದಿವ್ಯಶಾಸನವ ಬರೆದು ಪರಿಸಿದ ಕಾರಣ, ಎನ್ನ ಭವಂ ನಾಸ್ತಿಯಾಯಿತ್ತಯ್ಯಾ.
--------------
ಚನ್ನಬಸವಣ್ಣ
-->