ಅಥವಾ

ಒಟ್ಟು 9 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಖಂಡಿತವಿಲ್ಲಾಗಿ ಸರ್ವಾಂಗವೂ ನಾಸಿಕವಾಯಿತ್ತು. ತಾನಲ್ಲದೆ ಅನ್ಯವಾಸನೆಯಿಲ್ಲಾಗಿ, ಅಲ್ಲಿಯೆ ಮಹತ್ತಪ್ಪ ಪೃಥ್ವಿಯಡಗಿತ್ತು. ಖಂಡತವಿಲ್ಲಾಗಿ ಸರ್ವಾಂಗವೂ ಜಿಹ್ವೆಯಾಯಿತ್ತು. ತಾನಲ್ಲದೆ ಅನ್ಯ ರುಚಿಯಿಲ್ಲಾಗಿ, ಅಲ್ಲಿಯೆ ಮಹತ್ತಪ್ಪ ಅಪ್ಪುವಡಗಿತ್ತು. ಖಂಡಿತವಿಲ್ಲಾಗಿ ಸರ್ವಾಂಗವೂ ನೇತ್ರವಾಯಿತ್ತು. ತಾನಲ್ಲದೆ ಅನ್ಯ ರೂಪಿಲ್ಲಾಗಿ, ಅಲ್ಲಿಯೆ ಮಹತ್ತಪ್ಪ ಅಗ್ನಿಯಡಗಿತ್ತು. ಖಂಡಿತವಿಲ್ಲಾಗಿ ಸರ್ವಾಂಗವೂ ಮಹಾತ್ವಕ್ಕಾಯಿತ್ತು. ತಾನಲ್ಲದೆ ಅನ್ಯಸ್ಪರ್ಶವಿಲ್ಲಾಗಿ, ಅಲ್ಲಿಯೆ ಮಹತ್ತಪ್ಪ ವಾಯುವಡಗಿತ್ತು ಖಂಡಿತವಿಲ್ಲಾಗಿ ಸರ್ವಾಂಗವೂ ಶ್ರೋತ್ರವಾಯಿತ್ತು ತಾನಲ್ಲದೆ ಅನ್ಯ ಶಬ್ದವಿಲ್ಲಾಗಿ ಅಲ್ಲಿಯ ಮಹತ್ತಪ್ಪ ಆಕಾಶವಡಗಿತ್ತು. ಇಂತು ಬ್ರಹ್ಮಾಂಡವೆ ಪಂಚಭೂತಮಯವಾದಡೆ, ಶರಣನ ಸರ್ವಾಂಗದಲ್ಲಿ ಪಂಚಬ್ರಹ್ಮಮಯವಡಗಿತ್ತು. ಅದೆ ಪಂಚವರ್ಣಾತೀತವಾದ ಮಹಾಬಯಲೊಳಗೆ ನಿಂದ ಭೇದವು. ಅದರಲ್ಲಿ ಜಗತ್ತು ಅಡಗಿದ ಭೇದವ, ಮಹತ್ತು ಮಹತ್ತನೊಳಕೊಂಡ ಭೇದವ ಏನೆಂದುಪಮಿಸುವೆನಯ್ಯಾ, ಕೂಡಲಚೆನ್ನಸಂಗಯ್ಯಾ !
--------------
ಚನ್ನಬಸವಣ್ಣ
ಖಂಡಿತವಿಲ್ಲಾಗಿ ಸರ್ವಾಂಗವೆಲ್ಲವೂ ನಾಸಿಕವಾಯಿತ್ತು. ತಾನಲ್ಲದೆ ಅನ್ಯ ವಾಸನೆ ಇಲ್ಲವಾಗಿ, ಅಲ್ಲಿಯೆ ಮಹತ್ತಪ್ಪ ಪೃಥ್ವಿಯಡಗಿತು. ಖಂಡಿತವಿಲ್ಲಾಗಿ ಸರ್ವಾಂಗವೆಲ್ಲವೂ ಜಿಹ್ವೆಯಾಯಿತ್ತು. ತಾನಲ್ಲದೆ ಅನ್ಯ ರುಚಿ ಇಲ್ಲವಾಗಿ, ಅಲ್ಲಿಯೆ ಮಹತ್ತಪ್ಪ ಅಪ್ಪು ಅಡಗಿತ್ತು. ಖಂಡಿತವಿಲ್ಲಾಗಿ ಸರ್ವಾಂಗವೆಲ್ಲವೂ ನೇತ್ರವಾಯಿತ್ತು. ತಾನಲ್ಲದೆ ಅನ್ಯ ರೂಪಿಲ್ಲವಾಗಿ, ಅಲ್ಲಿಯೆ ಮಹತ್ತಪ್ಪ ಅಗ್ನಿ ಅಡಗಿತ್ತು. ಖಂಡಿತವಿಲ್ಲಾಗಿ ಸರ್ವಾಂಗವೆಲ್ಲವೂ ತ್ವಕ್ಕಾಯಿತ್ತು. ತಾನಲ್ಲದೆ ಅನ್ಯ ಸೋಂಕಿಲ್ಲವಾಗಿ, ಅಲ್ಲಿಯೆ ಮಹತ್ತಪ್ಪ ವಾಯು ಅಡಗಿತ್ತು. ಖಂಡಿತವಿಲ್ಲಾಗಿ ಸರ್ವಾಂಗವೆಲ್ಲವೂ ಶ್ರೋತ್ರವಾಯಿತ್ತು. ತಾನಲ್ಲದೆ ಅನ್ಯ ಶಬ್ದವಿಲ್ಲಾಗಿ, ಅಲ್ಲಿಯೆ ಮಹತ್ತಪ್ಪ ಆಕಾಶವಡಗಿತ್ತು. ಇಂತು ಪಂಚಭೂತಂಗಳಡಗಿದಡೆ, ಪಂಚಬ್ರಹ್ಮಮಯವಾಯಿತ್ತು. ಅದರೊಳಗೆ ಜಗತ್ತಡಗಿದ ಭೇದವದೆ. ಪಂಚವರ್ಣಾತೀತವಾಗಿ ಮಹತ್ತನೊಳಕೊಂಡ ಶರಣನ ಭೇದವನು ಏನೆಂದುಪಮಿಸುವೆನಯ್ಯಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
-->