ಅಥವಾ

ಒಟ್ಟು 89 ಕಡೆಗಳಲ್ಲಿ , 2 ವಚನಕಾರರು , 89 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ನಾಲಗೆಗೆ ಬಪ್ಪರುಚಿ ನಿಮಗರ್ಪಿತ. ಎನ್ನ ನಾಸಿಕಕ್ಕೆ ಬಪ್ಪ ಪರಿಮಳ ನಿಮಗರ್ಪಿತ. ಎನ್ನ ಕಾಯಕ್ಕೆ ಬಪ್ಪ ಸುಖ ನಿಮಗರ್ಪಿತ. ಚೆನ್ನಮಲ್ಲಿಕಾರ್ಜುನಯ್ಯಾ, ನಿಮಗರ್ಪಿಸದ ಮುನ್ನ ಮುಟ್ಟಲಮ್ಮೆನಯ್ಯಾ.
--------------
ಅಕ್ಕಮಹಾದೇವಿ
ಕಾಮವುಳ್ಳವರಿಗೆ ಕಾಯಸಂಗ ಮಚ್ಚು ನೋಡಾ. ಕಾಮವಿಲ್ಲದವರಿಗೆ ಲಿಂಗಸಂಗ ಮಚ್ಚು ನೋಡಾ. ಕಾಮವಿಕಾರಿ ಕಾಯದತ್ತ ಮುಂತಾದಡೆ, ನಾ ನಿಮ್ಮತ್ತ ಮುಂತಾದೆ. ಚೆನ್ನಮಲ್ಲಿಕಾರ್ಜುನಯ್ಯಾ, ಕಾಮವಿಕಾರಿಯ ಸಂಗವ ಹೊದ್ದಿದಡೆ ನಿಮ್ಮಾಣೆ.
--------------
ಅಕ್ಕಮಹಾದೇವಿ
ಆರೂ ಇಲ್ಲದವಳೆಂದು ಆಳಿಗೊಳಲುಬೇಡ ಕಂಡೆಯಾ ಏನ ಮಾಡಿದಡೂ ಆನಂಜುವಳಲ್ಲ. ತರಗೆಲೆಯ ಮೆಲಿದು ಆನಿಹೆನು, ಸರಿಯ ಮೇಲೊರಗಿ ಆನಿಹೆನು. ಚೆನ್ನಮಲ್ಲಿಕಾರ್ಜುನಯ್ಯಾ, ಕರ ಕೇಡನೊಡ್ಡಿದಡೆ ಒಡಲನು ಪ್ರಾಣವನು ನಿಮಗರ್ಪಿಸಿ ಶುದ್ಧಳಹೆನು.
--------------
ಅಕ್ಕಮಹಾದೇವಿ
ವೃಷಭನ ಹಿಂದೆ ಪಶುವಾನು ಬಂದೆನು ; ನಂಬಿ ನಚ್ಚಿ ಪಶುವಾನುಬಂದೆನು. ಸಾಕಿ ಸಲಹಿಹನೆಂದು ಸಲೆ ನಚ್ಚಿ ಬಂದೆನು. ಒಲಿದಹ ಒಲಿದಹನೆಂದು ಬಳಿಯಲ್ಲಿ ಬಂದೆನು. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ನಂಬಿ ಬಂದ ಹೆಂಗೂಸ ಹಿಂದೊಬ್ಬರೆಳದೊಯ್ದರೆ ಎಂತು ಸೈರಿಸಿದೆ ಹೇಳಾ, ಎನ್ನ ದೇವರದೇವಾ ?
--------------
ಅಕ್ಕಮಹಾದೇವಿ
ತನು ನಿಮ್ಮ ರೂಪಾದ ಬಳಿಕ ಆರಿಗೆ ಮಾಡುವೆ ? ಮನ ನಿಮ್ಮ ರೂಪಾದ ಬಳಿಕ ಆರ ನೆನೆವೆ ? ಪ್ರಾಣ ನಿಮ್ಮ ರೂಪಾದ ಬಳಿಕ ಆರನಾರಾಧಿಸುವೆ ? ಅರಿವು ನಿಮ್ಮಲ್ಲಿ ಸ್ವಯವಾದ ಬಳಿಕ ಆರನರಿವೆ ? ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮಿಂದ ನೀವೆಯಾದಿರಾಗಿ ನಿಮ್ಮನೆ ಅರಿವುತ್ತಿರ್ದೆನು.
--------------
ಅಕ್ಕಮಹಾದೇವಿ
ಹಸಿವಾದಡೆ ಊರೊಳಗೆ ಬ್ಥಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು ದೇಗುಲಗಳುಂಟು. ಚೆನ್ನಮಲ್ಲಿಕಾರ್ಜುನಯ್ಯಾ, ಆತ್ಮಸಂಗಾತಕ್ಕೆ ನೀನೆನಗುಂಟು.
--------------
ಅಕ್ಕಮಹಾದೇವಿ
ಉದಯದಲೆದ್ದು ನಿಮ್ಮ ನೆನೆವೆನಯ್ಯಾ. ಕಸದೆಗೆದು ಚಳೆಯ ಕೊಟ್ಟು ನಿಮ್ಮ ಬರವ ಹಾರುತಿರ್ದೆನಯ್ಯಾ. ಹಸೆ ಹಂದರವನಿಕ್ಕಿ ನಿಮ್ಮಡಿಗಳಿಗೆಡೆಮಾಡಿಕೊಂಡಿರ್ದೆನಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ, ನೀನಾವಾಗ ಬಂದೆಯಾ ಎನ್ನ ದೇವಾ ?
--------------
ಅಕ್ಕಮಹಾದೇವಿ
ಮಾಟಕೂಟದಲ್ಲಿ ಬಸವಣ್ಣನಿಲ್ಲ. ನೋಟಕೂಟದಲ್ಲಿ ಪ್ರಭುದೇವರಿಲ್ಲ. ಭಾವಕೂಟದಲ್ಲಿ ಅಜಗಣ್ಣನಿಲ್ಲ. ಸ್ನೇಹಕೂಟದಲ್ಲಿ ಬಾಚಿರಾಜನಿಲ್ಲ. ಇವರೆಲ್ಲರ ಕೂಟದಲ್ಲಿ ಚೆನ್ನಬಸವಣ್ಣನಿಲ್ಲ. ಎನಗಿನ್ನೇನಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ ?
--------------
ಅಕ್ಕಮಹಾದೇವಿ
ಆದಿ ಅನಾದಿ ನಿತ್ಯಾನಿತ್ಯವ ತಿಳಿಯಲರಿಯದೆ ವಾಯಕ್ಕೆ ಪರಬ್ರಹ್ಮವ ನುಡಿವ ವಾಯುಪ್ರಾಣಿಗಳವರೆತ್ತ ಬಲ್ಲರೋ, ಆ ಪರಬ್ರಹ್ಮದ ನಿಜದ ನಿಲವ ? ಅದೆಂತೆಂದಡೆ ; ಆದಿಯೆ ದೇಹ, ಅನಾದಿಯೆ ನಿರ್ದೇಹ, ಆದಿಯೆ ಸಕಲ, ಅನಾದಿಯೆ ನಿಷ್ಕಲ, ಆದಿಯೆ ಜಡ, ಅನಾದಿಯೆ ಅಜಡ. ಆದಿಯೆ ಕಾಯ, ಅನಾದಿಯೆ ಪ್ರಾಣ. ಈ ಎರಡರ ಯೋಗವ ಭೇದಿಸಿ ತನ್ನಿಂದ ತಾನೆ ತಿಳಿದು ನೋಡಲು, ಆದಿ ಸಂಬಂಧವಪ್ಪ ಭೂತಂಗಳು ನಾನಲ್ಲ. ದಶವಿಧೇಂದ್ರಿಯಂಗಳು ನಾನಲ್ಲ, ದಶವಾಯುಗಳು ನಾನಲ್ಲ. ಅಷ್ಟಮದಂಗಳು, ಸಪ್ತವ್ಯಸನಂಗಳು, ಅರಿಷಡ್ವರ್ಗಂಗಳು, ಷಡೂರ್ಮಿಗಳು, ಷಡ್ಬ್ರಮೆಗಳು, ಷಡ್ಭಾವವಿಕಾರಂಗಳು, ಷಟ್ಕರ್ಮಂಗಳು, ಷಡ್ಧಾತುಗಳು, ತನುತ್ರಯಂಗಳು, ಜೀವತ್ರಯಂಗಳು, ಮಲತ್ರಯಂಗಳು, ಮನತ್ರಯಂಗಳು, ಗುಣತ್ರಯಂಗಳು, ಭಾವತ್ರಯಂಗಳು, ತಾಪತ್ರಯಂಗಳು, ಅಂತಃಕರಣಂಗಳು ಇಂತಿವಾದಿಯಾಗಿ ತೋರುವ ತೋರಿಕೆಯೇನೂ ನಾನಲ್ಲ, ನನ್ನವಲ್ಲ. ಇಂತಿವೆಲ್ಲವೂ ನನ್ನಾಧೀನವಾಗಿಪ್ಪವು ನಾನಿವರಾಧೀನದವನಲ್ಲ. ನಾನು ತೂರ್ಯ ತೂರ್ಯಾತೀತವಪ್ಪ ಸತ್ತು ಚಿತ್ತಾನಂದ ನಿತ್ಯಪರಿಪೂರ್ಣವಸ್ತುವೆ ತನ್ನಿರವೆಂದು ತಿಳಿಯೆ, ಆ ತಿಳಿದ ಮಾತ್ರದಲ್ಲಿಯೇ ಅನಿತ್ಯದ ಬೆಸುಗೆ ಬಿಟ್ಟು ನಿರಾಳದಲ್ಲಿ ನಿಜವನೈದಲರಿಯದೆ ಮತ್ತೆಯುಂ ಭೌತಿಕ ತತ್ವಸಂಬಂಧಿಯಾಗಿ ಇರುತ್ತಿರಲು, ಇಂತೀ ತತ್ವದಾದಿ ತಾನೆಂತೆನಲು ಆ ಪರಬ್ರಹ್ಮವಪ್ಪ ನಿತ್ಯನಿರಾಳ ನಿಃಶೂನ್ಯಲಿಂಗವೆ ತನ್ನ ಲೀಲಾವಿಲಾಸದಿಂದ ತಾನೆ ಸುನಾದ ಬಿಂದು ಪ್ರಕಾಶ ತೇಜೋಮೂರ್ತಿಯಾಗಿ ನಿಂದು ಮಹಾಲಿಂಗವೆಂದೆನಿಸಿತ್ತು. ಆ ಮಹಾಲಿಂಗವೆ ಪಂಚಸಾದಾಖ್ಯವೆಂದೆನಿಸಿತ್ತು. ಆ ಪಂಚಸಾದಾಖ್ಯವೆ ಪಂಚಲಿಂಗ ಪ್ರಕಾಶವೆಂದೆನಿಸಿತ್ತು. ಆ ಪಂಚಲಿಂಗ ಪ್ರಕಾಶವೆ ಪಂಚಮುಖವೆಂದೆನಿಸಿತ್ತು. ಆ ಪಂಚಮುಖದಿಂದವೆ ಪಂಚಾಕ್ಷರಿಯುತ್ಪತ್ತಿ. ಆ ಪಂಚಾಕ್ಷರಿಯಿಂದವೆ ಪಂಚಕಲೆಗಳುತ್ಪತ್ತಿ. ಆ ಪಂಚಕಲೆಗಳಿಂದವೆ ಜ್ಞಾನ ಮನ ಬುದ್ಧಿ ಚಿತ್ತ ಅಹಂಕಾರಗಳುತ್ಪತ್ತಿ. ಆ ಜ್ಞಾನ ಮನ ಬುದ್ಧಿ ಚಿತ್ತ ಅಹಂಕಾರಗಳಿಂದವೆ ಪಂಚತನ್ಮಾತ್ರಂಗಳುತ್ಪತ್ತಿ. ಆ ಪಂಚತನ್ಮಾತ್ರಂಗಳಿಂದವೆ ಪಂಚಭೂತಂಗಳುತ್ಪತ್ತಿ. ಆ ಪಂಚಭೂತಂಗಳೇ ಪಂಚೀಕರಣವನೆಯ್ದಿ ಆತ್ಮಂಗೆ ಅಂಗವಾಯಿತ್ತು. ಆ ಅಂಗಕ್ಕೆ ಜ್ಞಾನೇಂದ್ರಿಯಂಗಳು ಕರ್ಮೇಂದ್ರಿಯಂಗಳು ಪ್ರತ್ಯಂಗವೆಂದೆನಿಸಿತ್ತು. ಇಂತು ದೇಹ ಸಂಬಂಧಮಂ ಶಿವ ತನ್ನ ಚಿದಂಶಿಕನಪ್ಪ ಆತ್ಮಂಗೆ ಸಂಬಂಧಿಸಿದನಾಗಿ, ಆ ಸಂಬಂಧಿಸಿದ ಕಾಯದ ಪೂರ್ವಾಶ್ರಯವು ಎಲ್ಲಿಯಾಯಿತ್ತು ಅಲ್ಲಿಯೇ ಅಡಗಿಸಿ ಆ ಕಾಯದ ಪೂರ್ವಾಶ್ರಯವನಳಿದು ಮಹಾ ಘನಲಿಂಗವ ವೇಧಿಸಿ ಕೊಟ್ಟು, ಶಿವ ತಾನೆ ಗುರುವಾಗಿ ಬಂದು ಮಹಾಘನಲಿಂಗವ ವೇಧಿಸಿ ಕೊಟ್ಟ ಪರಿ ಎಂತೆಂದಡೆ ಆತ್ಮಗೂಡಿ ಪಂಚಭೂತಂಗಳನೆ ಷಡ್ವಿಧ ಅಂಗವೆಂದೆನಿಸಿ, ಆ ಅಂಗಕ್ಕೆ ಆ ಕಲೆಗಳನೆ ಷಡ್ವಿಧ ಶಕ್ತಿಗಳೆಂದೆನಿಸಿ, ಆ ಶಕ್ತಿಗಳಿಗೆ ಷಡ್ವಿಧ ಭಕ್ತಿಯನಳವಡಿಸಿ, ಆ ಭಕ್ತಿಗಳಿಗೆ ಭಾವ ಜ್ಞಾನ ಮನ ಬುದ್ಧಿ ಚಿತ್ತ ಅಹಂಕಾರಂಗಳನೆ ಷಡ್ವಿಧ ಹಸ್ತಂಗಳೆಂದೆನಿಸಿ, ಆ ಹಸ್ತಂಗಳಿಗೆ ಮಹಾಲಿಂಗವಾದಿಯಾದ ಪಂಚಲಿಂಗಗಳನೆ ಷಡ್ವಿಧ ಲಿಂಗಂಗಳೆಂದೆನಿಸಿ, ಆ ಮುಖಂಗಳಿಗೆ ತನ್ಮಾತ್ರಂಗಳನೆ ದ್ರವ್ಯಪದಾರ್ಥಂಗಳೆಂದೆನಿಸಿ, ಆ ದ್ರವ್ಯಪದಾರ್ಥಂಗಳು ಆಯಾಯ ಮುಖದ ಲಿಂಗಂಗಳಲ್ಲಿ ನಿರಂತರ ಸಾವಧಾನದಿಂದ ಅರ್ಪಿತವಾಗಿ ಬೀಗಲೊಡನೆ. ಅಂಗಸ್ಥಲಂಗಳಡಗಿ ತ್ರಿವಿಧ ಲಿಂಗಾಂಗಸ್ಥಲಂಗಳುಳಿದು ಕಾಯ ಗುರು, ಪ್ರಾಣ ಲಿಂಗ, ಜ್ಞಾನ ಜಂಗಮ ಗುರುವಿನಲ್ಲಿ ಶುದ್ಧಪ್ರಸಾದ, ಲಿಂಗದಲ್ಲಿ ಸಿದ್ಧಪ್ರಸಾದ, ಜಂಗಮದಲ್ಲಿ ಪ್ರಸಿದ್ಧಪ್ರಸಾದ. ಇಂತೀ ತ್ರಿವಿಧ ಪ್ರಸಾದವು ಏಕಾರ್ಥವಾಗಿ, ಮಹಾಘನ ಪರಿಪೂರ್ಣಪ್ರಸಾದವಳವಟ್ಟ ಶರಣ ಜ್ಞಾನಿಯಲ್ಲ, ಅಜ್ಞಾನಿ ಮುನ್ನವೇ ಅಲ್ಲ. ಶೂನ್ಯನಲ್ಲ, ನಿಃಶೂನ್ಯ ಮುನ್ನವೇ ಅಲ್ಲ. ದ್ವೈತಿಯಲ್ಲ, ಅದ್ವೈತಿ ಮುನ್ನವೇ ಅಲ್ಲ. ಇಂತೀ ಉಭಯಾತ್ಮಕ ತಾನೆಯಾಗಿ ? ಇದು ಕಾರಣ, ಇದರ ಆಗುಹೋಗು ಸಕೀಲಸಂಬಂಧವ ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರೇ ಬಲ್ಲರು.
--------------
ಅಕ್ಕಮಹಾದೇವಿ
ನೋಡೆನೆಂಬವರ ನೋಡಿಸುವೆ, ನುಡಿಯೆನೆಂಬವರ ನುಡಿಯಿಸುವೆ, ಒಲ್ಲೆನೆಂಬವರನೊಲಿಸುವೆ, ಒಲಿದೆನೆಂಬವರ ತೊಲಗಿಸುವೆ ನೋಡಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ, ನೀನಲ್ಲದನ್ಯರ ಮುಖದ ನೋಡೆನೆಂದಡೆ ನೋಡುವಂತೆ ಮಾಡಿದೆಯಲ್ಲಾ ಲಿಂಗವೆ?
--------------
ಅಕ್ಕಮಹಾದೇವಿ
ಮುತ್ತು ನೀರಲಾಯಿತ್ತು, ವಾರಿಕಲ್ಲು ನೀರಲಾಯಿತ್ತು, ಉಪ್ಪು ನೀರಲಾಯಿತ್ತು. ಉಪ್ಪು ಕರಗಿತ್ತು, ವಾರಿಕಲ್ಲು ಕರಗಿತ್ತು, ಮುತ್ತು ಕರಗಿದುದನಾರೂ ಕಂಡವರಿಲ್ಲ. ಈ ಸಂಸಾರಿಮಾನವರು ಲಿಂಗವಮುಟ್ಟಿ ಭವಭಾರಿಗಳಾದರು. ನಾ ನಿಮ್ಮ ಮುಟ್ಟಿ ಕರಿಗೊಂಡೆನಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ.
--------------
ಅಕ್ಕಮಹಾದೇವಿ
ಹಗಲು ನಾಲ್ಕುಜಾವ ನಿಮ್ಮ ಕಳವಳದಲ್ಲಿಪ್ಪೆನು. ಇರುಳು ನಾಲ್ಕುಜಾವ ಲಿಂಗದ ವಿಕಳಾವಸ್ಥೆಯಲ್ಲಿಪ್ಪೆನು. ಹಗಲಿರುಳು ನಿಮ್ಮ ಹಂಬಲದಲ್ಲಿ ಮೈಮರೆದೊರಗಿಪ್ಪೆನು. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಒಲುಮೆ ನಟ್ಟು ಹಸಿವು ತೃಷೆ ನಿದ್ರೆಯ ತೊರೆದೆನಯ್ಯಾ
--------------
ಅಕ್ಕಮಹಾದೇವಿ
ನೀರಕ್ಷೀರದಂತೆ ನೀನಿಪ್ಪೆಯಾಗಿ, ಆವುದು ಮುಂದು, ಆವುದು ಹಿಂದು ಎಂದರಿಯೆ. ಆವುದು ಕರ್ತೃ, ಆವುದು ಭೃತ್ಯನೆಂದರಿಯೆ. ಆವುದು ಘನ, ಆವುದು ಕಿರಿದೆಂದರಿಯೆ. ಚೆನ್ನಮಲ್ಲಿಕಾರ್ಜುನಯ್ಯಾ, ನೀನೊಲಿದು ಕೊಂಡಾಡಿದಡೆ ಇರುಹೆ ರುದ್ರನಾಗದೆ ಹೇಳಯ್ಯಾ ?
--------------
ಅಕ್ಕಮಹಾದೇವಿ
ಸುಖದ ಸುಖಿಗಳ ಸಂಭಾಷಣೆಯಿಂದ ದುಃಖಕ್ಕೆ ವಿಶ್ರಾಮವಾಯಿತ್ತು. ಭಾವಕ್ಕೆ ತಾರ್ಕಣೆಯಾದಲ್ಲಿ, ನೆನಹಕ್ಕೆ ವಿಶ್ರಾಮವಾಯಿತ್ತು. ಬೆಚ್ಚು ಬೆರಸಲೊಡನೆ ಮಚ್ಚು ಒಳಕೊಂಡಿತ್ತಯ್ಯಾ, ಚೆನ್ನಮಲ್ಲಿಕಾರ್ಜುನಯ್ಯಾ ನಿಮ್ಮ ಶರಣರ ಸಂಗದಿಂದ.
--------------
ಅಕ್ಕಮಹಾದೇವಿ
ಅಯ್ಯಾ, ನೀನು ಕೇಳಿದಡೆ ಕೇಳು, ಕೇಳದಡೆ ಮಾಣು ಆನು ನಿನ್ನ ಹಾಡಿದಲ್ಲದೆ ಸೈರಿಸಲಾರೆನಯ್ಯಾ. ಅಯ್ಯಾ, ನೀನು ನೋಡಿದಡೆ ನೋಡು, ನೋಡದಡೆ ಮಾಣು ಆನು ನಿನ್ನ ನೋಡಿ ಹಿಗ್ಗಿ ಹಾರೈಸಿದಲ್ಲದೆ ಸೈರಿಸಲಾರೆನಯ್ಯಾ. ಅಯ್ಯಾ, ನೀನು ಮೆಚ್ಚಿದೆಡೆ ಮೆಚ್ಚು, ಮೆಚ್ಚದಡೆ ಮಾಣು ಆನು ನಿನ್ನನಪ್ಪಿದಲ್ಲದೆ ಸೈರಿಸಲಾರೆನ‍ಯ್ಯಾ. ಅಯ್ಯಾ, ನೀನು ಒಲಿದಡೆ ಒಲಿ, ಒಲಿಯದಡೆ ಮಾಣು ಆನು ನಿನ್ನ ಪೂಜಿಸಿದಲ್ಲದೆ ಸೈರಿಸಲಾರೆನಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ, ಆನು ನಿಮ್ಮನರ್ಚಿಸಿ ಪೂಜಿಸಿ ಹರುಷದೊಳೋಲಾಡುವೆನಯ್ಯಾ.
--------------
ಅಕ್ಕಮಹಾದೇವಿ
ಇನ್ನಷ್ಟು ... -->