ಅಥವಾ

ಒಟ್ಟು 119 ಕಡೆಗಳಲ್ಲಿ , 38 ವಚನಕಾರರು , 100 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೋವಿನ ಹೊಟ್ಟೆಯಲ್ಲಿ ಘೃತವಿದ್ದಡೇನೊ ಆ ಗೋವು ದಿನದಿನಕ್ಕೆ ಪುಷ್ಟವಾಗಬಲ್ಲುದೆ ? ಅದು ಕಾರಣ_ ಆ ಗೋವ ಪೋಷಿಸಿ ಕರೆದು ಕಾಸಿ, ಘೃತವ ಮಾಡಿ ಆ ಗೋವಿಂಗೆ ಕುಡಿಯಲೆರೆದಡೆ ಆ ಗೋವು ದಿನದಿನಕ್ಕೆ ಪುಷ್ಟವಹುದು. ಹಾಂಗೆ, ತನ್ನಲ್ಲಿ ವಸ್ತುವಿದ್ದಡೇನೊ ? ವಸ್ತುವ ಗುರುಮುಖದಿಂದ ಕರಸ್ಥಲಕ್ಕೆ ಪಡೆದು, ಸತ್ಕ್ರಿಯೆಯಿಂದ ಪ್ರಾಣಕ್ಕೆ ವೇಧಿಸಿದಲ್ಲದೆ ಪ್ರಾಣಲಿಂಗವಾಗದು. ಕೂಡಲಚೆನ್ನಸಂಗಯ್ಯನಲ್ಲಿ, ಇಷ್ಟಲಿಂಗವ ಸತ್ಕ್ರಿಯೆಯಿಂದ ಪ್ರಾಣಕ್ಕೆ ವೇದ್ಥಿಸಿ, ತಾನೆಂಬ ಅನಿಷ್ಟವ ತೊಲಗಿಸಿದಲ್ಲದೆ ಪ್ರಾಣಲಿಂಗಸಂಬಂಧವಾಗಬಾರದು
--------------
ಚನ್ನಬಸವಣ್ಣ
ಶ್ರೀಗುರುವಾದಾತನು ಸಕಲಾಗಮಂಗಳ ಹೃದಯವನರಿತು ತನ್ನ ತಾನರಿದು ಸರ್ವಾಚಾರ ತನ್ನಲ್ಲಿ ನೆಲೆಗೊಂಡು ಉಪದೇಶವ ಮಾಡುವ ಕ್ರಮವೆಂತೆಂದಡೆ: ಬ್ರಾಹ್ಮಣನ ಮೂರು ವರುಷ ನೋಡಬೇಕು, ಕ್ಷತ್ರಿಯನ ಆರು ವರುಷ ನೋಡಬೇಕು, ವೈಶ್ಯನ ಒಂಬತ್ತು ವರುಷ ನೋಡಬೇಕು, ಶೂದ್ರನ ಹನ್ನೆರಡು ವರುಷ ನೋಡಬೇಕು, ನೋಡಿದಲ್ಲದೆ ದೀಕ್ಷೆ ಕೊಡಬಾರದು _ ವೀರಾಗಮೇ. ``ಬ್ರಾಹ್ಮಣಂ ತ್ರೀಣಿ ವರ್ಷಾಣಿ ಷಡಬ್ದಂ ಕ್ಷತ್ರಿಯಂ ತಥಾ ವೈಶ್ಯಂ ನವಾಬ್ದಮಾಖ್ಯಾತಂ ಶೂದ್ರಂ ದ್ವಾದಶವರ್ಷಕಂ ಈ ಕ್ರಮವನರಿಯದೆ, ಉಪಾಧಿವಿಡಿದು ಉಪದೇಶವ ಮಾಡುವಾತ ಗುರುವಲ್ಲ, ಉಪಾಧಿವಿಡಿದು ಉಪದೇಶವ ಮಾಡಿಸಿಕೊಂಬಾತ ಶಿಷ್ಯನಲ್ಲ. ಇವರಿಬ್ಬರ ನಿಲವು ಒಂದೆ ಠಕ್ಕನ ಮನೆಗೆ ಠಕ್ಕ ಬಿದ್ದಿನ ಬಂದಂತೆ ಈ ಗುರುಶಿಷ್ಯರಿಬ್ಬರನು ರೌರವನರಕದಲ್ಲಿಕ್ಕುವ ಕೂಡಲಚೆನ್ನಸಂಗಯ್ಯ.
--------------
ಚನ್ನಬಸವಣ್ಣ
ದುಃಖ ಹೊಯಿತ್ತು ತನ್ನಲ್ಲಿ ತಾನಿಲ್ಲದೇ. ಸುಖ ನಿಂದುದು ತನ್ನಲ್ಲಿ ತಾನು ನಿಜವಾಗಿ, ಭ್ರಾಂತುದೋರದೆ, ಸಕಳೇಶ್ವರದೇವಾ ತಾನಾಗಿ ನಿಂದವಂಗೆ.
--------------
ಸಕಳೇಶ ಮಾದರಸ
ಆಯತದಲ್ಲಿ ಅಂಗಭೋಗಿಯಾಗಿರಬೇಕು. ಸ್ವಾಯತದಲ್ಲಿ ಸನ್ನಹಿತನಾಗಿರಬೇಕು. ಸನ್ನಹಿತದಲ್ಲಿ ಸದಾಚಾರಿಯಾಗಿರಬೇಕು. ಇಂತೀ ತ್ರಿವಿಧದಲ್ಲಿ ಏಕವಾಗಿರಬಲ್ಲಡೆ, ಅದು ವರ್ಮ, ಅದು ಸಂಬಂಧ, ಅದು ನಿಯತಾಚಾರವೆಂದೆಂಬೆನು. ಅದಲ್ಲದೆ ಲಿಂಗವ ಮರೆದು, ಅಂಗ[ವ]ಭೋಗಿಸಿ, ಅಂಗಸಂಗದಲ್ಲಿರ್ದು, ಅಂಗವೆ ಪ್ರಾಣವಾಗಿಹರಿಗೆಲ್ಲರಿಗೆಯೂ ಲಿಂಗದ ಶುದ್ಧಿ ನಿಮಗೇಕೆ ಕೇಳಿರಣ್ಣಾ. ಲಿಂಗವಂತನು ಅಂಗಸೂತಕಿಯಲ್ಲ. ಅಲಗಿನ ಕೊನೆಯ ಮೊನೆಯ ಮೇಲಣ ಸಿಂಹಾಸನದ ಮೇಲೆ ಲಿಂಗದ ಪ್ರಾಣವ ತನ್ನಲ್ಲಿ ಕೂಡಿಕೊಂಡು, ತನ್ನ ಪ್ರಾಣವ ಲಿಂಗದಲ್ಲಿ ಕೂಡಿಕೊಂಡು, ಏಕಪ್ರಾಣವ ಮಾಡಿಕೊಂಡಿಪ್ಪ ಶರಣನ ಜ್ಯೋತಿರ್ಮಯನೆಂಬೆನು, ಜಗದ ಕರ್ತನೆಂಬೆನು, ಜಗದಾರಾಧ್ಯನೆಂದೆಂಬೆನು ಕಾಣಾ, ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ. ನಿಮ್ಮ ಸಂಗಿಯ ನಿಲವಿನ ಪರಿಯ ನೀವೇ ಬಲ್ಲಿರಲ್ಲದೆ, ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಅಂಗಭಾವದಿಂದ ಲಿಂಗಮುಖವನು ಅಂಗಮುಖವನು ಅರಿದು ಜಂಗಮ ಮುಖವನು ಅರಿದಡೆ ಸಂಸಾರವೆಂಬ ಬಂಧನವಿಲ್ಲವಯ್ಯ. ಜಂಗಮವೆಂದರೆ ಸಾಕ್ಷಾತ್ ಪರವಸ್ತು ತಾನೆ ನೋಡಾ. ಅದೇನು ಕಾರಣವೆಂದಡೆ: ಅಂಗವಾರಕ್ಕೆ ಲಿಂಗವಾರಕ್ಕೆ ಮೇಲಾಗಿ ಆ ಅಂಗವನು ಲಿಂಗವನು ತನ್ನಲ್ಲಿ ಏಕೀಕರಿಸಿಕೊಂಡು ತಾನು ಪರಮ ಚೈತನ್ಯನಾದ ಕಾರಣ. ಆ ಪರವಸ್ತುವಿನ ಪ್ರಸನ್ನ ಪ್ರಸಾದಮುಖವನರಿದು ಇಹ ಪರವ ನಿಶ್ಚೆ ೈಸೂದಿಲ್ಲ ನೋಡಾ. ಅದೇನು ಕಾರಣವೆಂದಡೆ: ಇಹ ಪರಕ್ಕೆ ಹೊರಗಾಗಿ ಪರಮ ಪದದಲ್ಲಿ ಪರಿಣಾಮಿಯಾದನಾಗಿ ಈ ತ್ರಿವಿಧವು ಒಂದೆಯೆಂದರಿದಾತನೆ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭು ತಾನೆ ಕಾಣಿರೋ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಹಾವ ಹೊತ್ತುಕೊಂಡು ಹೋಗುತ್ತ ಹಾವಾಡಿಗ ನಡೆಯಲ್ಲಿ ಹಾವ ಕಂಡು ಮರಳುವ ಗಾವಿಲತನವ ನೋಡಾ! ತನ್ನಿಂದನ್ಯವೆಂದಡೆ ಬ್ಥಿನ್ನ ವ್ಯತಿಕರವಾಯಿತ್ತು. ತನ್ನ ಪರಮಾರ್ಥ ತನ್ನಲ್ಲಿ ಸಿಮ್ಮಲಿಗೆಯ ಚೆನ್ನರಾಮನೆಂಬ ಲಿಂಗ ಮಾಯಾಮರ್ಕಟ, ಜಡವೆ!
--------------
ಚಂದಿಮರಸ
ವೇದವಿದನಿತು ಬ್ರಹ್ಮರಾಕ್ಷಸನಾದಲ್ಲಿ, ಸಮತೆಯಿದ್ದನಿತು ಸಾಗುರಿಯಲ್ಲ. ವೀರುಕುವರ ಸಾವಿನಲಿದ್ದನಿತು ಶಿವಪದವಾಗಲರಿವುದ, ತನ್ನಲ್ಲಿ ಶಿವಸುಖವಿಲ್ಲದನುಭಾವ ? ಸಕಳೇಶ್ವರದೇವನರಿದ ಶಿವ್ಯೆಕ್ಯ, ಅರಿಯದ ಮರುಳುಗಳಲ್ಲಿ ಏನಿದ್ದಡೇನು?
--------------
ಸಕಳೇಶ ಮಾದರಸ
ಮಾಗಿಯ ಹುಲ್ಲಿನ ಸೋಂಕಿನಂತೆ ತನು ಪುಳಕಿತಳಾದಳವ್ವೆ. ನುಡಿ ತೊದಳು ಆತನ ಒಲವೆ ಆಧಾರವಾಗಿದ್ದಳವ್ವೆ. ಬಿಳಿಯ ತುಂಬಿ ಕುಂಕುಮ ರಸದಲ್ಲಿ ಬಂಡುಂಡಂತೆ. ಮಹಾಲಿಂಗ ಗಜೇಶ್ವರನಲ್ಲಿ ತನ್ನಲ್ಲಿ ತಾನೆ ರತಿಯಾಗಿರ್ದಳವ್ವೆ
--------------
ಗಜೇಶ ಮಸಣಯ್ಯ
ಏನೆಂದೂ ಎನಲಿಲ್ಲ; ನುಡಿದು ಹೇಳಲಿಕ್ಕಿಲ್ಲ. ನಿಜದಲ್ಲಿ ನಿಂದ ಬೆರಗ ಕುರುಹ ಹರಿವುದೆ ಮರುಳೆ? ಹರಿದು ಹತ್ತುವುದೆ ಮರುಳೆ ಬಯಲು? ಅದು ತನ್ನಲ್ಲಿ ತಾನಾದ ಬಯಲು; ತಾನಾದ ಘನವು. ಇನ್ನೇನನರಸಲಿಲ್ಲ. ಅದು ಮುನ್ನವೆ ತಾನಿಲ್ಲ. ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ.
--------------
ಘಟ್ಟಿವಾಳಯ್ಯ
ಅತಳಲೋಕ ಸುತಳಲೋಕ ತಾನಿರ್ದಲ್ಲಿ, ವಿತಳಲೋಕ ತಳಾತಳಲೋಕ ತಾನಿರ್ದಲ್ಲಿ, ರಸಾತಳಲೋಕ ಸ್ವಸ್ಥಲಲೋಕ ತಾನಿರ್ದಲ್ಲಿ, ಪಾತಾಳಲೋಕ ತಾನಿರ್ದಲ್ಲಿ, ಭೂಲೋಕ ಭುವರ್ಲೋಕ ತಾನಿರ್ದಲ್ಲಿ, ಮಹರ್ಲೋಕ ಸ್ವರ್ಲೋಕ ತಾನಿರ್ದಲ್ಲಿ, ಜನರ್ಲೋಕ ತಪರ್ಲೋಕ ತಾನಿರ್ದಲ್ಲಿ, ಸತ್ಯರ್ಲೋಕ ತಾನಿರ್ದಲ್ಲಿ, ಇಹಲೋಕ ಪರಲೋಕ ಕಾಳಾಂಧರಲೋಕ ತಾನಿರ್ದಲ್ಲಿ. ಇಂತೀ ಲೋಕಾದಿಲೋಕಂಗಳೆಲ್ಲಾ ತನ್ನಲ್ಲಿ ಉತ್ಪತ್ಯ ಸ್ಥಿತಿ ಲಯವಾದಕಾರಣ ತಾನೇ ಪರಂಜ್ಯೋತಿಲಿಂಗ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಚರಾಚರಾತ್ಮಕ ಪ್ರಪಂಚವೆಲ್ಲ ಶಿವನ ಚಿದ್ಗರ್ಭದಿಂದುಯಿಸಿಪ್ಪವೆಂದು, ಶಿವಾಭಿನ್ನತ್ವದಿಂ ಸಕಲಪ್ರಾಣಿಗಳಲ್ಲಿ ತನ್ನಾತ್ಮಚೇತನವ ತನ್ನಲ್ಲಿ ಸಕಲ ಪ್ರಾಣಿಗಳ ಆತ್ಮ ಚೇತನವ ಕಂಡು, ದಯಾಪರತ್ವವನುಳ್ಳ ಸರ್ವಜ್ಞತಾ ಶಕ್ತಿಯನು ಭಕ್ತಿಸ್ಥಲದಲ್ಲಿ ಪಡೆವುದು ನೋಡಾ. ತನಗೆ ಬಂದ ಅಪವಾದ ನಿಂದೆ ಎಡರಾಪತ್ತುಗಳಲ್ಲಿ ಎದೆಗುಂದದೆ ಬಪ್ಪ ಸುಖ ದುಃಖ ಖೇದ ಹರ್ಷಾದಿಗಳು ಶಿವಾಜ್ಞೆಯಹುದೆಂದು ಪರಿಣತನಪ್ಪ ತೃಪ್ತಿಯ ಶಕ್ತಿಯನು ಮಾಹೇಶ್ವರಸ್ಥಲದಲ್ಲಿ ಪಡೆವುದು ನೋಡಾ. ದೇಹಾದಿ ಆದಿ ಪ್ರಪಂಚಕ್ಕೆ ಮೂಲಿಗನಾದ ಅನಾದಿ ಪರಶಿವನು ಪ್ರಸನ್ನತ್ವವನುಂಟುಮಾಡುವ ಅನಾದಿ ಬೋಧ ಶಕ್ತಿಯನು ಪ್ರಸಾದಿಸ್ಥಲದಲ್ಲಿ ಪಡೆವುದು ನೋಡಾ. ಅಂತಪ್ಪ ದೇಹಾದಿ ಪ್ರಪಂಚದ ಚಲನವಲನವು ತನ್ನಾಶ್ರಯದಲ್ಲಿ ನಡೆದು ತಾನು ಆವುದನ್ನೂ ಆಶ್ರಯಿಸದೆ ಸರ್ವಸ್ವತಂತ್ರ ತಾನೆಂಬರಿವನುಂಟುಮಾಡುವ ಸ್ವತಂತ್ರ ಶಕ್ತಿಯನು ಪ್ರಾಣಲಿಂಗಿಸ್ಥಲದಲ್ಲಿ ಪಡೆವುದು ನೋಡಾ. ತನ್ನಾಶ್ರಯವ ಪಡೆದ ದೃಶ್ಯಮಾನ ದೇಹಾದಿ ಜಗವೆಲ್ಲ ಅನಿತ್ಯವೆಂಬ ಆ ದೃಶ್ಯಮಾನದೇಹಾದಿಗಳ ಮೂಲೋತ್ಪತ್ತಿಗಳಿಗೆ ಕಾರಣನಪ್ಪ ಪತಿಪರಶಿವಲಿಂಗವೇ ನಿತ್ಯವೆಂಬರಿವನುಂಟುಮಾಡುವ ಅಲುಪ್ತ ಶಕ್ತಿಯನು ಶರಣಸ್ಥಲದಲ್ಲಿ ಪಡೆವುದು ನೋಡಾ. ಅಂಗಲಿಂಗಗಳ ಸಂಯೋಗವ ತೋರಿ, ಅಖಂಡ ಪರಶಿಲಿಂಗೈಕ್ಯವನುಂಟುಮಾಡಿ ಕೊಡುವ ಅನಂತ ಶಕ್ತಿಯನು ಐಕ್ಯಸ್ಥಲದಲ್ಲಿ ಪಡೆವುದು ನೋಡಾ. ಇದಕ್ಕೆ ಶಿವರಹಸ್ಯೇ ; 'ಯದ್ಭಕ್ತಿಸ್ಥಲಮಿತ್ಯಾಹುಸ್ತತ್ಸರ್ವಜ್ಞತ್ವಮಿತೀರ್ಯತೇ ೀ ಯನ್ಮಾಹೇಶ್ವರಂ ನಾಮ ಸಾ ತೃಪ್ತಿರ್ಮಮ ಶಾಂಕರಿ || ಯತ್ಪ್ರಸಾದಾಭಿದಂ ಸ್ಥಾನಂ ತದ್ಬೋಧೋ ನಿರಂಕುಶಃ ೀ ಯತ್ಪ್ರಣಲಿಂಗಕಂ ನಾಮ ತತ್ಸ್ವಾತಂತ್ರೈಮುದಾಹೃತಂ || ಯದಸ್ತಿ ಶರಣಂ ನಾಮ ಹ್ಯಲುಪ್ತಾ ಶಕ್ತಿರುಚ್ಯತೇ ೀ ಯದೈಕ್ಯಸ್ಥಾನಮೂರ್ಧಸ್ಥಾ ಹ್ಯನಂತಾಶಕ್ತಿರುಚ್ಯತೇ ||ú ಎಂದುದಾಗಿ, ಇಂತಪ್ಪ ಷಟ್‍ಸ್ಥಲಗಳಲ್ಲಿ ಷಡ್ವಿಧ ಶಕ್ತಿಗಳ ಸ್ಥಳಕುಳಂಗಳ ತಿಳಿದು, ಷಡ್ವಿಧ ಲಿಂಗಗಳಲ್ಲಿ ಧ್ಯಾನ ಪೂಜಾದಿಗಳಿಂದ ಅಂಗಗೊಂಡು ಭವದ ಬಟ್ಟೆಯ ಮೆಟ್ಟಿ ನಿಂದಲ್ಲದೆ ಷಟ್‍ಸ್ಥಲಬ್ರಹ್ಮಿಗಳಾಗರು. ಇಂತಲ್ಲದೆ ಅಪವಾದ ನಿಂದೆಗಳ ಪರರ ಮೇಲೆ ಕಣ್ಗಾಣದೆ ಹೊರಿಸುತ್ತ ಪರದಾರ ದಾಶಿ ವೇಶಿ ಸೂಳೆಯರ ಕೂಡಿ ಭುಂಜಿಸಿ ತೊಂಬಲತಿಂಬ ಹೇಸಿ ಮೂಳರು ಪೋತರಾಜ, ಜೋಗಿ, ಕ್ಷಪಣರಂತೆ ಜಟಾ, ತುರುಬು, ಬೋಳುಮುಂಡೆಗೊಂಡು ಕೂಳಿಗಾಗಿ ತಿರುಗುವ ಮೂಳ ಚುಕ್ಕೆಯರ ವಿರಕ್ತ ಷಟ್‍ಸ್ಥಲಬ್ರಹ್ಮಿಗಳೆನಬಹುದೇನಯ್ಯ ? ಅಂತಪ್ಪ ಅನಾದಿ ಷಟ್‍ಸ್ಥಲಬ್ರಹ್ಮದ ಷಡ್ವಿಧಶಕ್ತಿಯನರಿದು ವಿರಕ್ತ ಜಂಗಮ ಷಟ್‍ಸ್ಥಲ ಬಾಲಬ್ರಹ್ಮಿ ನಿರಾಭಾರಿಯಾದ ಚೆನ್ನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎಂಬೆನಯ್ಯಾ ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಹೆಣ್ಣಿನೊಳಗೆ ಕಣ್ಣುಗೊಂಡು ಹುಟ್ಟಿ, ಮಣ್ಣು ಹೊಯ್ದುಕೊಂಬ ಅಣ್ಣಗಳು ನೀವು ಕೇಳಿರೆ. ಈ ಬಣ್ಣದ ಪರಿಯಾಯಕ್ಕೆ ಕಣ್ಣುಗೆಟ್ಟು ಬಿದ್ದಿರಲ್ಲಾ. ಈ ಹೆಣ್ಣಿನ ಸಂಗ ನಿಮಗೇತಕಣ್ಣಾ. ತನ್ನಲ್ಲಿ ಹೆಣ್ಣುಂಟು, ತನ್ನಲ್ಲಿ ಹೊನ್ನುಂಟು, ತನ್ನಲ್ಲಿ ಮಣ್ಣುಂಟು. ಇಂತಿವ ನಿಮ್ಮಲ್ಲಿ ನೀವು ತಿಳಿದು ನೋಡಲಿಕ್ಕೆ, ತನ್ನಲ್ಲಿ ತಾನೆ ಕಾಣಬಹುದು. ತನ್ನ ತಾನರಿಲ್ಲದೆ ಇದಿರನರಿಯಬಾರದು. ಇದಿರನರಿದಲ್ಲದೆ ಪರವನರಿಯಬಾರದು. ಪರವನರಿದಲ್ಲದೆ ಸ್ವಯವನರಿಯಬಾರದು. ಸ್ವಯವನರಿದಲ್ಲದೆ ಅರಿವು ತಲೆದೋರದು ಅರಿವು ತಲೆದೋರಿದಲ್ಲದೆ ಕುರುಹು ನಷ್ಟವಾಗದು. ಕುರುಹು ನಷ್ಟವಾದಲ್ಲದೆ ಮಾಯೆ ಹಿಂಗದು. ಮಾಯ ಹಿಂಗಿದಲ್ಲದೆ ಮದವಳಿಯದು. ಮದವಳಿದಲ್ಲದೆ ಮತ್ಸರ ಹೆರೆಸಾರದು. ಮತ್ಸರ ಹೆರೆಸಾರಿದಲ್ಲದೆ ಮಹಾಘನವಳವಡದು. ಮಹಾಘನವಳವಟ್ಟಲ್ಲದೆ ಮಹಾಲಿಂಗವ ಕಾಣಬಾರದು. ಮಹಾಲಿಂಗವ ಕಂಡಲ್ಲದೆ ಮಹಾಪ್ರಕಾಶವ ಕಾಣಬಾರದು. ಮಹಾಪ್ರಕಾಶವ ಕಂಡಲ್ಲದೆ ನಿತ್ಯವ ಕಾಣಬಾರದು. ನಿತ್ಯವ ಕಂಡಲ್ಲದೆ ನಿಜವ ಕಾಣಬಾರದು. ನಿಜವ ಕಂಡಲ್ಲದೆ ನಿರ್ಣಯವನರಿಯಬಾರದು. ನಿರ್ಣಯವನರಿದಲ್ಲದೆ ಗುರುಲಿಂಗಜಂಗಮವನರಿಯಬಾರದು. ಗುರುಲಿಂಗಜಂಗಮವನರಿದಲ್ಲದೆ ಪಾದತೀರ್ಥಪ್ರಸಾದವನರಿಯಬಾರದು. ಪಾದತೀರ್ಥಪ್ರಸಾದವನರಿದಲ್ಲದೆ ಸಹಜ ಶರಣರ ಸಂಗವನರಿಯಬಾರದು. ಇಂತಪ್ಪ ಶರಣರ ಸಂಗವನರಿದಲ್ಲದೆ ಸರ್ವನಿರ್ಣಯವನರಿಯಬಾರದು. ಸರ್ವನಿರ್ಣಯವನರಿದಲ್ಲದೆ ಸಹಜಸದ್ಭಕ್ತರು ಮೆಚ್ಚರು. ಸಹಜಸದ್ಭಕ್ತರು ಕೂಡಿ ನಡೆಯಬಲ್ಲಡೆ ಇದೇ ಸುಖವು. ಸಂಗದೊಳಗೆ ಶರಣರ ಸಂಗವೆ ಸಂಗವು ಕೇಳಿರಯ್ಯಾ. ಇಂತು ಸಾಯದೆ ನೋಯದೆ ಸ್ವಯವನರಿದು, ಸದ್ಭಕ್ತರ ಸಂಗವ ಮಾಡಬಲ್ಲಾತನೆ ಲಿಂಗೈಕ್ಯನು. ಅವ ತಾನೆ ಘನಲಿಂಗವು. ಹೀಂಗಲ್ಲದೆ ಹಿಂದೆ ಮೆಟ್ಟಿಹೋಹ ಸಂದೇಹಿ ಮಾನವರೆಲ್ಲರೂ ಜಗದ ಜಂಗುಳಿಗಳ ದಂದುಗದೊಳಗಾಗಿಪ್ಪರು. ಆ ಗುಣವ ಬಿಟ್ಟು, ಶರಣರ ಸಂಗ ಸಹಜವೆಂದರಿದು, ನಿಜವಾಗಿ ಬಂದಬಳಿಕ ಪೂರ್ವಭಾಗೆಗೆ ಬಾರೆನೆಂಬ ನಿಶ್ಚಯದಿಂ ಪರಮ ಪ್ರಸಾದವನರಿದು, ಜಗದ ಹಂಗ ಹರಿದ ಶರಣನು ಎನ್ನ ತಂದೆಯಾಗಿಪ್ಪನು ಕಾಣಾ, ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ. ಈ ಬಂದ ಪರಿಯಾಯವರಿದು, ತಾಮಸವ ಹಿಂಗಿ, ಸಹಜ ನಿಜನಿತ್ಯವನರಿದು ಹೋದ ಶರಣರ ನಿಲವಿನ ಪರಿಯ, ನೀವೆ ಬಲ್ಲಿರಲ್ಲದೆ ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ
--------------
ಮರುಳಶಂಕರದೇವ
ಗುರುವಚನದಿಂದಲ್ಲದೆ ಲಿಂಗವನರಿಯಬಾರದು. ಗುರುವಚನದಿಂದಲ್ಲದೆ ಜಂಗಮವನರಿಯಬಾರದು. ಗುರುವಚನದಿಂದಲ್ಲದೆ ಪ್ರಸಾದವನರಿಯಬಾರದು. ಗುರುವಚನದಿಂದಲ್ಲದೆ ತನ್ನ ತಾನರಿಯಬಾರದು. ಹಿಂದಣ ಜನ್ಮದಲ್ಲಿ ಲಿಂಗವ ಪೂಜಿಸಿ ಇಂದು ಜ್ಞಾನೋದಯವಾದಡೆ ಗುರುವಿಲ್ಲದ ಮುನ್ನ ಆಯಿತ್ತೆನ್ನಬಹುದೆ ? ತನ್ನಲ್ಲಿ ತಾನು ಸನ್ನಹಿತನಾದೆಹೆನೆಂದಡೆ ಗುರುವಿಲ್ಲದೆ ಆಗದು ಕೇಳಾ. ಎನ್ನ ಅಜಗಣ್ಣನೆಂಬ ಗುರುವಿಲ್ಲದೆ ಆರೂಢಿಯ ಕೂಟ ಸಮನಿಸದು ಕೇಳಾ.
--------------
ಮುಕ್ತಾಯಕ್ಕ
ನಚ್ಚು ಮಚ್ಚಿನ ಸುಖ ಪರಿಣಾಮ ಸನ್ನಹಿತವಾದ ಬಳಿಕ, ಇನ್ನು ಅನುಭಾವವೆಂಬುದಿಲ್ಲ_ಅಂತಿರಲಿ ನುಡಿಯ ಗಡಣ. ಶಶಿಧರನಟ್ಟಿದ ಬೆಸನ ಮಾಡಬಂದ ಬಳಿಕ, ಹೇಳಿದ ಮಣಿಹವ ಮಾಡುತ್ತಿಹುದಲ್ಲದೆ ಅದು ತನ್ನಲ್ಲಿ ತಾನು ಬೆರಸುವಂದಿಗೆ ಬೆರಸಲಿ; ಆ ದಿನಕ್ಕೆ ಬಂದು ಹೇಳುವೆವು ನಿರ್ಣಯವ. ಗುಹೇಶ್ವರಲಿಂಗದ ಆಣತಿ ಬಪ್ಪನ್ನಬರ ಶಿವಶರಣರೆಲ್ಲರೂ ಸಂಗನಬಸವಣ್ಣ ಸಹಿತ ನಿತ್ಯರಾಗಿ ಇರಿ.
--------------
ಅಲ್ಲಮಪ್ರಭುದೇವರು
ಶಿವನೆಂದರಿದವಂಗೆ ತಾನೆಂಬುದಿಲ್ಲಾಗಿ ತನಗೊಂದನ್ಯವಿಲ್ಲ. ಘನದಿರವು ಇಂಬಾಗಿ ಚರಾಚರವು ತನ್ನಲ್ಲಿ ಅಡಗಿದಕಾರಣ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ ಶರಣ ಲಿಂಗವಾಗಿರ್ದನು.
--------------
ಸ್ವತಂತ್ರ ಸಿದ್ಧಲಿಂಗ
ಇನ್ನಷ್ಟು ... -->