ಅಥವಾ

ಒಟ್ಟು 734 ಕಡೆಗಳಲ್ಲಿ , 84 ವಚನಕಾರರು , 627 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯವಿಲ್ಲದ ಶರಣಂಗೆ ಕರ್ಮವಿಲ್ಲ ; ಕರ್ಮಶೂನ್ಯವಾದಲ್ಲಿ ಭಾವನಾಸ್ತಿ ಕಾಣಾ. ಭಾವನಾಸ್ತಿಯಾಗಿ ನಿರ್ಭಾವ ನಿಂದು ನಿಜವಾದಲ್ಲಿ ನೋಡಲಿಲ್ಲ ನುಡಿಯಲಿಲ್ಲ ಕೂಡಲಿಲ್ಲ ಅಗಲಲಿಲ್ಲ. ಗುರುನಿರಂಜನ ಚನ್ನಬಸವಲಿಂಗ ತಾನು ತಾನಾಗಿರ್ದ ಸುಖವ ತಂದು ಹೇಳುವರಾರೂ ಇಲ್ಲ ಈ ಮೂರುಲೋಕದೊಳಗೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ಚಿನ್ನ ವಿಶೇಷ ಮಣ್ಣು ಅಧಮವೆಂದಡೆ, ಅದು ನಿಂದು ಕರಗುವುದಕ್ಕೆ ಮಣ್ಣಿನ ಕೋವೆಯೆ ಮನೆಯಾಯಿತ್ತು. ಇಷ್ಟವನರಿವ ವಸ್ತುವ ನೆಮ್ಮುವುದಕ್ಕೆ ಇದೇ ದೃಷ್ಟ, ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
--------------
ಮೆರೆಮಿಂಡಯ್ಯ
ನಿಂದಡೆ; ಹೊನ್ನು ಹೆಣ್ಣು ಮಣ್ಣು ಹಿಡಿದು ನೆಟ್ಟನೆ ಭಕ್ತನಾಗಿ ನಿಲ್ಲಬೇಕು. ಸುಳಿದಡೆ; ಹೊನ್ನು ಹೆಣ್ಣು ಮಣ್ಣು ಬಿಟ್ಟು ನೆಟ್ಟನೆ ಜಂಗಮವಾಗಿ ಸುಳಿಯಬೇಕು. ನಿಂದು ಭಕ್ತನಲ್ಲದ, ಸುಳಿದು ಜಂಗಮವಲ್ಲದ ಉಭಯಭ್ರಷ್ಟರನೇನೆಂಬೆ ಗುಹೇಶ್ವರಯ್ಯಾ ?
--------------
ಅಲ್ಲಮಪ್ರಭುದೇವರು
ಊರ ಮಾಡುವನ ಭಕ್ತಿ ದೂರದ ಹೊಲನಂತೆ ದೂರದಿಂ ಬಂದು ಅದು ನಿಂದು ಮುಂದೆ ಸಾಗರವಾಗಲರಿಯದು, ರಾಮನಾಥ.
--------------
ಜೇಡರ ದಾಸಿಮಯ್ಯ
ಬಂದ ಬಟ್ಟೆಯ ನಿಂದು ನೋಡಲೊಲ್ಲೆ ಕಂದಾ, ಅದೇನು ಸೋಜಿಗವೊ ? ಬಿಂದು ಛಂದವಲ್ಲ ಬಂದ ಪರಿಯನು ಗುಹೇಶ್ವರ ಬಲ್ಲ ಕಂದಾ.
--------------
ಅಲ್ಲಮಪ್ರಭುದೇವರು
ಬಟ್ಟ ಬಯಲಲ್ಲಿ ಒಂದು ಶರಧಿ ಹುಟ್ಟಿತ್ತು. ಆ ಶರಧಿಯ ನಡುವೆ ಒಂದು ಕಮಲ ಹುಟ್ಟಿತ್ತು. ಆ ಕಮಲದ ನೆಲೆಯ ಕಾಣಲರಿಯದೆ ತೊಳಲಿ ಬಳಲಿ, ಜಗದೊಳಗೆ ನಚ್ಚುಮಚ್ಚಿಗೊಳಗಾಗಿ, ಚುಚ್ಚಳ ಪೂಜೆಗೆ ಸಿಲ್ಕಿ, ಕುಲಕೆ ಛಲಕೆ ಕೊಂದಾಡಿ, ಭವಕ್ಕೆ ಗುರಿಯಾಗುವ ಮನುಜರ ಕಂಡು ನಾಚಿತ್ತೆನ್ನ ಮನವು. ಆ ಮನದ ಬೆಂಬಳಿಗೊಂಡು ಹೋದವರೆಲ್ಲ ಮರುಳಾಗಿ ಹೋದರು. ಇದ ನೋಡಿ ನಾನು ಬಟ್ಟಬಯಲಲ್ಲಿ ನಿಂದು ನೋಡಿದಡೆ, ಶರಧಿ ಬತ್ತಿತ್ತು ಕಮಲ ಕಾಣಬಂದಿತ್ತು. ಆ ಕಮಲ ವಿಕಾಸವಾಯಿತ್ತು ಪರಿಮಳವೆಂಬ ವಾಸನೆ ತೀಡಿತ್ತು. ಆ ವಾಸನೆವಿಡಿದು ಜಗದಾಸೆಯ ಹಿಂಗಿ ಮಾತು ಮಥನವ ಕೆಡಿಸಿ, ಮಹಾಜ್ಯೋತಿಯ ಬೆಳಗಿನಲಿ ಓಲಾಡುವ ಶರಣರ ಆಸೆ ರೋಷ ಪಾಶಕ್ಕೊಳಗಾದ ಈ ಜಗದ ಹೇಸಿಗಳೆತ್ತಬಲ್ಲರು, ಈ ಮಹಾಶರಣರ ನೆಲೆಯ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ ?
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಎನಗೆ ಇಲ್ಲಿ ಏನು ಬಸವ ಬಸವಾ ? ಎನಗೆ ಅದರ ಕುರುಹೇನು ಬಸವಾ ? ಎನಗೆ ಬಸವ ನಡೆದ ಭಕ್ತಿಸ್ಥಲದಲ್ಲಿ ನಿಂದು, ಭಕ್ತಿಸ್ಥಲ ಬಸವನಲ್ಲಿ ಕುರುಹಳಿದು, ನಾನು ಬಸವನ ಶ್ರೀಪಾದದಲ್ಲಿ ಉರಿಯುಂಡ ಕರ್ಪೂರದಂತಡಗಿದ ಬಳಿಕ ಸಂಗಯ್ಯಾ ?
--------------
ನೀಲಮ್ಮ
ಪದ್ಮಾಸನದಲ್ಲಿ ಕುಳ್ಳಿರ್ದು ಲಿಂಗಾರ್ಚನೆಯ ಮಾಡುವರ ತೋರಾ ಎನಗೆ. ಸ್ವರೂಪಿನಲ್ಲಿ ನಿಂದು, ಜಂಗಮಕ್ಕೆ ಜಂಗಮದಾಸೋಹವ ಮಾಡುವರ ತೋರಾ ಎನಗೆ. ಮನ ನಿಜರೂಪಿನಲ್ಲಿ ಗುರುಸಿಂಹಾಸನವನೇರಿ ಪರಿಣಾಮವಳವಟ್ಟು, ಪ್ರಸಾದವ ಗ್ರಹಿಸುವರ ತೋರಾ ಎನಗೆ. ಇಂತಪ್ಪವರ ಸಂಗದಲ್ಲಿರಿಸು ಕಲಿದೇವಯ್ಯಾ, ನಾ ನಿನ್ನ ಬಲ್ಲೆ. ನನಗೆಯೂ ನಿನಗೆಯೂ ಇಂತಪ್ಪವರಪೂರ್ವ.
--------------
ಮಡಿವಾಳ ಮಾಚಿದೇವ
ಜಗದಗಲದ ಗದ್ಗುಗೆಗಳಿಗೆ ಅಪ್ರಮಾಣದ ಲಿಂಗಪ್ರತಿಷ್ಠೆಯ ಮಾಡಿದರು ನೋಡಾ. ಅದಕ್ಕೆ ತೊಂಬತ್ತಾರಂಗುಲ ಪ್ರಮಾಣಿನ ದೇಗುಲ ನೋಡಾ. ನಾಲ್ಕೈದು ಬಾಗಿಲು ನೋಡಾ. ಬೇರೊಂದು ಬಾಗಿಲು ಮುಚ್ಚಿ ಮುಸುಕಿಹುದು. ದಶಮದ್ವಾರವ ನೆರೆಹೆವೆಂದು ಬಾಗಿಲ ಮುಚ್ಚಹೋದಡೆ ತೆಗೆವವು. ತೆಗೆಯಹೋದಡೆ ಮುಚ್ಚುವವು ನೋಡಾ. ಈ ವರ್ಮಸಕೀಲವನರಿಯದೆ ಅತಿರಥರು ಮಹಾರಥರು ತೊಳಲಿ ಬಳಲುತೈದಾರೆ. ವೀರದ್ಥೀರಸುಭಟರುಗಳೆಲ್ಲಾ ಹೇಡಿಬಳೆಯಂ ತೊಟ್ಟು ಹೆಣ್ಣಾಗಿ ಹೋದರು. ಅರುಹಿರಿಯರೆಲ್ಲಾ ಮರುಳಾಗಿ ಮತಿಗೆಟ್ಟು ಹೋದರು. ಇದನಾರಯ್ಯಾ ಬಲ್ಲವರು ? ನೀವಿಕ್ಕಿದ ಕದವ ತೆಗೆಯಬಲ್ಲವರಾರೊ ಅಯ್ಯಾ ! ತೆಗೆಯದ ಕದವನಿಕ್ಕಬಲ್ಲವರಾರೊ ಅಯ್ಯಾ ! ಪದಪಂಕದಲ್ಲಿನ ದ್ವಾರಮಂ ಕಾಯ್ದಿಪ್ಪ ದಿಟ್ಟಿಯ ಕಡೆಗಣ್ಣಿನ ಬೆಳಗಿನೊಳಗಾಡುವ ಅವ್ಯಯ ಹರಿಬ್ರಹ್ಮಾದಿಗಳು ಮೊದಲಾದ ಸಚರಾಚರದವರನೆಲ್ಲ ನುಂಗಿತ್ತು ನೋಡಾ. ಇದನಾರಿಗೂ ಅರಿಯಬಾರದು ನೋಡಾ. ನೀವಿದ್ದಲ್ಲಿ ಇಲ್ಲದಿಪ್ಪ ಶರಣರಿಗಲ್ಲದೆ ಇದರ ಭೇದವ ಬಲ್ಲವ ಅಲ್ಲಮನು. ಕಾಮನ ಕಣ್ಣಿಗೆ ಮುಳ್ಳಬೆಟ್ಟದೊಡನೆ ಮುಟ್ಟದ ಕದವು ತೆಗೆದವು. ತೆಗೆದಿದ್ದ ಬಾಗಿಲು ತಮತಮಗೆ ಮುಚ್ಚಿದವು ನೋಡಾ. ಹೂಗಲ್ಲಿಗೆ ಕಿಚ್ಚನಿಕ್ಕಿ ಆ ಬಾಗಿಲ ಕಾಯ್ದಿಪ್ಪವಳ ಮೂಗ ಮೊಲೆಯ ಕೊಯ್ದು, ಸಾಗರದ ಕಟ್ಟೆಯ ಒಡೆದು, ದಶಮ ದ್ವಾರದಲ್ಲಿ ನಿಂದು, ನಿಮ್ಮ ಹೊತ್ತಿರ್ಪವಳ ನೆತ್ತಿಗಣ್ಣಿಂದ ತೆಗೆದು ನೋಡಿ, ಏಕಾದಶದ್ವಾರದ ಸೂತ್ರ ಸೂಕ್ಷ್ಮವಿನ್ನು ಮಹಾಬೆಳಗಿನೊಳಗೆ ಸಾಸಿವೆಯ ಛಿದ್ರವ ಮಾಡಿ ಕುಂಬಳದ ಕಾಯ ಕೀಲಕೊಟ್ಟಂತೆಯಿಪ್ಪ ನಿಜಗುರು ಭೋಗೇಶ್ವರ ನಿಮ್ಮ ಇರವು, ಪ್ರಭುವಿನ ಕರುಣವುಳ್ಳ ಲಿಂಗಾಂಗಿಗಳಿಗಲ್ಲದೆ ವಾಗದ್ವೈತದಿಂದ ಒಡಲ ಹೊರೆವ ಬಹುಭಾಷಿಗಳಿಗೆಂತು ಸಾಧ್ಯವಪ್ಪುದೊ ?
--------------
ಭೋಗಣ್ಣ
ಕುರುಹಿನ ಕುರುಹಿನಲ್ಲಿ, ಅರಿವಿನ ಅರಿವಿನಲ್ಲಿ ಜ್ಞಾನದ ಜ್ಞಾನದಲ್ಲಿ ಇಂತೀ ಸಲೆಸಂದ ಭೇದಂಗಳಲ್ಲಿ ನಿಂದು ನೋಡು. ಏಣಾಂಕಧರ ಸೋಮೇಶ್ವರಲಿಂಗದಲ್ಲಿ ಅರಿವಿನ ಅರಿವು, ಬೆಳಗಾಯಿತ್ತು.
--------------
ಬಿಬ್ಬಿ ಬಾಚಯ್ಯ
ಬಯಲೆಂದಡೆ ಕೀಳು ಮೇಲಿನೊಳಗಾಯಿತ್ತು. ನಿರವಯವೆಂದಡೆ ಸಾವಯದಿಂದ ಕುರುಹುದೋರಿತ್ತು. ಸವಿದ ಸವಿಯನುಪಮಿಸಬಾರದೆಂದಡೆ ಜಿಹ್ವೆಯಿಂದ ಕುರುಹುಗೊಂಡಿತ್ತು. ಆ ಜಿಹ್ವೆ ಸಾಕಾರ, ಸವಿದ ಸವಿ ನಿರಾಕಾರವೆಂದಡೆ, ನಾನಾ ಭೇದಂಗಳಿಂದ ರುಚಿಮಯವಾಯಿತ್ತು. ಆ ಜಿಹ್ವೆಯ ಕೊನೆಯ ಮೊನೆಯಲ್ಲಿ ನಿಂದು, ಅಹುದಲ್ಲವೆಂಬುದ ತಾನೆ ಕುರುಹಿಟ್ಟುಕೊಂಡಂತೆ ಜಿಹ್ವೆ ಬಲ್ಲುದೆಂದಡೆ ತನ್ನಡಿಗೆ ಬಾರದುದನರಿಯಿತ್ತೆ ? ಸಾರ ಸ್ವಾದ ಲೇಸೆಂದಡೆ ಜಿಹ್ವೆ ಹೊರತೆಯಾಗಿ ಕುರುಹುಗೊಂಡಿತ್ತೆ ? ಇದು ಕ್ರೀ ಜ್ಞಾನ ಸಂಪುಟಸ್ಥಲ. ಈ ಉಭಯಸ್ಥಲ ಲೇಪವಾದ ಮತ್ತೆ ನಿರುತ ನಿರ್ಯಾಣವೆಂಬುದು ನನ್ನಲ್ಲಿಯೊ ? ನಿನ್ನಲ್ಲಿಯೊ ? ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ ಸದಾತ್ಮದಲ್ಲಿ ನಿನ್ನ ಕುರುಹೇಕೆ ಅಡಗದು ?
--------------
ಮೋಳಿಗೆ ಮಹಾದೇವಿ
ಕಾಯ ನನ್ನದೆಂದು ನಚ್ಚಬೇಡಿರೋ, ಜೀವ ನನ್ನದೆಂದು ನಚ್ಚಬೇಡಿರೋ. ಕಾಯ ಜೀವವೆಂಬ ಪ್ರಕೃತಿಯನಳಿದು, ಶಿವಯೋಗದಲ್ಲಿ ನಿಂದು, ನಿಶ್ಚಿಂತ ನಿರಾಕುಳ ನಿರ್ಭರಿತನಾಗಿರ್ದ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಸಜ್ಜನವೆಂಬ ಮಾರ್ಗದಲ್ಲಿ ಒಬ್ಬ ಬಾಲೆಯು ನಿಂದು ನಿಜವ ತೋರುತಿರ್ಪಳು ನೋಡಾ. ಆ ನಿಜವ ಈ ಜನಂಗಳೇನು ಬಲ್ಲರಯ್ಯ ? ಅಜ ಹರಿ ಸುರ ನಾರದ ಮೊದಲಾದವರಿಗೆ ಅಗೋಚರವೆನಿಸಿತ್ತು ನೋಡಾ. ಸ್ವಜ್ಞಾನಿಯಾದ ಶರಣನು ಆ ನಿಜವ ನೋಡಬಲ್ಲನಯ್ಯಾ. ಆ ಬಾಲೆಯ ಅಂಗವ ಕೂಡಬಲ್ಲನಯ್ಯ. ಆ ಸಜ್ಜನವೆಂಬ ಮಾರ್ಗವ ಹತ್ತಬಲ್ಲನಯ್ಯ. ಇಂತಪ್ಪ ಶರಣಂಗೆ ನಮೋ ನಮೋ ಎನುತಿರ್ದೆ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಯೋಗಿ ಜೋಗಿ ಶ್ರಾವಕ ಸನ್ಯಾಸಿ ಪಾಶುಪತಿ ಕಾಳಾಮುಖಿ ಆರು ಭೇದ ಮೂರರಲ್ಲಿ ಅಡಗಿ ಎರಡು ಅಳಿವಿಂಗೆ ಒಳಗಾಯಿತ್ತು. ಒಂದು ನಿಂದು ಸಮಯ ರೂಪಾಯಿತ್ತು. ಸಮಯಕ್ಕೆ ಹೊರಗಾದುದು, ಸದಾಶಿವಮೂರ್ತಿಲಿಂಗಕ್ಕೆ ಶಕ್ತಿನಾಮವಿಲ್ಲ.
--------------
ಅರಿವಿನ ಮಾರಿತಂದೆ
ಗುರುಭಕ್ತನಾದಲ್ಲಿ ಘಟಧರ್ಮವಳಿದು ಲಿಂಗಭಕ್ತನಾದಲ್ಲಿ ಮನಸಂಚಲ ನಿಂದು ಜಂಗಮಭಕ್ತಿಯಲ್ಲಿ ಧನದಾಸೆಯಳಿದು ತ್ರಿವಿಧಾಂಗ ಸಲೆ ಸಂದು ತ್ರಿಕರಣ ಶುದ್ಧನಾಗಿದ್ದವಂಗೆ ಮತ್ರ್ಯ ಕೈಲಾಸವೆಂಬ ಕಾಳುಮಾತಿಲ್ಲ ಆತ ನಿಶ್ಚಿಂತ ನಿಜಮುಕ್ತನಯ್ಯಾ, ರಾಮನಾಥ.
--------------
ಜೇಡರ ದಾಸಿಮಯ್ಯ
ಇನ್ನಷ್ಟು ... -->