ಅಥವಾ

ಒಟ್ಟು 340 ಕಡೆಗಳಲ್ಲಿ , 41 ವಚನಕಾರರು , 197 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಸವಣ್ಣನ ಮಗನಹುದೆಂಬುದು ಕಾಣಬಂದಿತ್ತು ನೋಡಾ; ಚನ್ನಬಸವಣ್ಣನ ಮಗನಮಗನೆಂಬುದು ಕಾಣಬಂದಿತ್ತು ನೋಡಾ; ಪ್ರಭುವಿನ ಮಗನಮಗನಮಗನೆಂಬುದು ಕಾಣ ಬಂದಿತ್ತು ನೋಡಾ; ಅವಸ್ಥಾತ್ರಯದಲ್ಲಿ ಗುರುನಿರಂಜನ ಚನ್ನಬಸವಲಿಂಗ ತಾನೆಂಬುದು ಕಂಡು ಮರೆಯಿತ್ತು ನೋಡಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಕಲ್ಯಾಣಕೈಲಾಸವೆಂಬ ನುಡಿ ಹಸನಾಯಿತ್ತು. ಒಳಗೂ ಕಲ್ಯಾಣ ಹೊರಗೂ ಕಲ್ಯಾಣ. ಇದರಂತುವನಾರು ಬಲ್ಲರಯ್ಯಾ ? ನಿಮ್ಮ ಸತ್ಯ ಶರಣರ ಸುಳುಹು ತೋರುತ್ತಿದೆಯಯ್ಯಾ. ನಿಮ್ಮ ಶರಣ ಬಸವಣ್ಣನ ಕಾಂಬೆನೆಂಬ ತವಕವೆನಗಾಯಿತ್ತು ಕೇಳಾ ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಹಿಂದೆ ನೀ ಬಂದೆ ನಾನಾ ಭವಂಗಳಲ್ಲಿ, ನಾನಾ ವ್ಯಾಪಾರಕ್ಕೆ ನೀನೊಡೆಯನಾಗಿ. ಮತ್ರ್ಯದ ಸುಖದುಃಖ ನಿನಗೆ ನಿಶ್ಚಿಂತವಾಗಿಪ್ಪುದು. ಹಿಂದೆ ನಿನ್ನಂತೆ ನಾ ಬಂದು ನೊಂದುದಿಲ್ಲ. ಬಂದೆ ನಾ ಬಸವಣ್ಣನ ಕಥನದಿಂದ, ನಾ ತಂದ ಪದಾರ್ಥವೆಲ್ಲವ ನಿಮಗಿತ್ತೆ. ನಾನಿನ್ನಂಜುವೆ ಗುರುಲಿಂಗಜಂಗಮದಲ್ಲಿ ಪ್ರತ್ಯುತ್ತರಕ್ಕೆ. ಎನಗೆ ಮತ್ರ್ಯದ ಮಣಿಹ, ಕೃತ್ಯವಿನ್ನೆಷ್ಟು ದಿನ ಹೇಳಾ. ಅಂದು ನೀವು ಕೊಟ್ಟ ಒಪ್ಪದ ಚೀಟನೊಪ್ಪಿಸಿದೆ. ಮತ್ತೆ ಇನ್ನು ಸಂದೇಹವೆ, ಹೇಳಾ ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಬಸವಣ್ಣನ ಪ್ರಸಾದದಿಂದ ಭಕ್ತಿಜ್ಞಾನ ವೈರಾಗ್ಯ ಸಂಪನ್ನನಾದೆನಯ್ಯ. ಚೆನ್ನಬಸವಣ್ಣನ ಪ್ರಸಾದದಿಂದ ಷಟ್‍ಸ್ಥಲಜ್ಞಾನಸಂಪನ್ನನಾದೆನಯ್ಯ. ಪ್ರಭುದೇವರ ಪ್ರಸಾದದಿಂದ ಪರಶಿವತತ್ವಸ್ವರೂಪವೇ ಎನ್ನ ಸ್ವರೂಪವೆಂದರಿದು ಸಮಸ್ತ ಸಂಸಾರಪ್ರಪಂಚ ಕೊಡಹಿದೆನು ನೋಡಾ. ನೀಲಲೋಚನೆಯಮ್ಮನ ಪ್ರಸಾದದಿಂದ ನಿಜಲಿಂಗೈಕ್ಯನಾದೆನಯ್ಯ. ಮಹಾದೇವಿಯಕ್ಕಗಳ ಪ್ರಸಾದದಿಂದ ಸುತ್ತಿದ ಮಾಯಾಪಾಶವ ಹರಿದು ನಿರ್ಮಾಯನಾಗಿ ನಿರ್ವಾಣಪದದಲ್ಲಿ ನಿಂದೆನಯ್ಯ. ಸಿದ್ಧರಾಮಯ್ಯನ ಪ್ರಸಾದದಿಂದ ಶುದ್ಧ ಶಿವತತ್ವವ ಹಡೆದೆನಯ್ಯ. ಮೋಳಿಗೆಯ ಮಾರಿತಂದೆಗಳ ಪ್ರಸಾದದಿಂದ ಕಾಯದ ಕಳವಳನಳಿದು ಕರ್ಮನಿರ್ಮಲನಾಗಿ ವೀರಮಾಹೇಶ್ವರನಾದೆನು ನೋಡಾ. ಇವರು ಮುಖ್ಯವಾದ ಏಳುನೂರೆಪ್ಪತ್ತುಮರಗಣಂಗಳ ಪರಮಪ್ರಸಾದದಿಂದ ಎನ್ನ ಕರಣಂಗಳೆಲ್ಲವು ಲಿಂಗಕರಣಂಗಳಾಗಿ ಕರಣೇಂದ್ರಿಯಂಗಳ ಕಳೆದುಳಿದು ಇಂದ್ರಿಯಂಗಳಿಗೆ ನಿಲುಕದ ಸ್ಥಾನದಲ್ಲಿರ್ದು ಪರಮಾನಂದ ಪ್ರಭಾಮಯನಾಗಿರ್ದೆನು ನೋಡಾ. ನಿಮ್ಮ ಶರಣರ ಪ್ರಸಾದದಿಂದ ನಾನು ಪ್ರಸಾದಿಯಾಗಿರ್ದೆನು ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ದಾಸಯ್ಯನೆನಗೆ ಸಾಲೋಕ್ಯನಯ್ಯಾ, ಚೆನ್ನಯ್ಯನೆನಗೆ ಸಾಮೀಪ್ಯನಯ್ಯಾ. ಕಕ್ಕಯ್ಯನೆನಗೆ ಸಾರೂಪ್ಯನಯ್ಯಾ. ಮಾಚಯ್ಯನೆನಗೆ ಸಾಯುಜ್ಯನಯ್ಯಾ. ದಾಸಯ್ಯನೊಕ್ಕುದ ಕೊಂಡೆನು. ಚನ್ನಯ್ಯನ ಮಿಕ್ಕುದ ಕೊಂಡೆನು. ಕಕ್ಕಯ್ಯನುಂಡು ಮಿಕ್ಕುದ ಕಾದು ಕೊಂಡೆನು. ಮಾಚಯ್ಯನ ಜ್ಞಾನಪ್ರಸಾದವ ಕೊಂಡೆನು. ಪುರಾತರೊಳಗಾಗಿ ಬಸವಣ್ಣನ ಡಿಂಗರಿಗ ಚನ್ನಬಸವಣ್ಣನ ಹಳೆಯನೆಂದು ತಮ್ಮೊಕ್ಕುದನಿಕ್ಕಿ ಸಲಹಿದರು ಕಾಣಾ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಭಕ್ತಿಯ ಕುಳವನು ಬಸವಣ್ಣನೇ ಬಲ್ಲನು. ಪ್ರಸಾದದ ನೆಲೆಯನು ಬಸವಣ್ಣನೇ ಬಲ್ಲನು. ಬಸವಣ್ಣ ನಡೆದುದೇ ಮಾರ್ಗ, ಅಖಿಳಗಣಂಗಳಿಗೆ, ಬಸವಣ್ಣ ನುಡಿದುದೇ ವೇದ, ಮಹಾಪುರುಷರಿಗೆ, ಬಸವಣ್ಣನನಾದಿ, ಲಿಂಗವಾದಿ ಎಂದರಿದೆನಾಗಿ, ಬಸವಣ್ಣನ ನೆನೆವುತಿರ್ದೆನಯ್ಯಾ. ಬಸವಣ್ಣನ ಪಾದವಿಡಿದೆನಾಗಿ, ಲಿಂಗವೇದಿಯಾದೆನು. ಬಸವಣ್ಣನ ಬಾಗಿಲ ಕಾಯ್ದೆನಾಗಿ, ಪ್ರಸಾದ ಸಾಧ್ಯವಾಯಿತ್ತು. ಬಸವಣ್ಣನ ಕರುಣದಿಂದ ಪ್ರಭುದೇವರ ನಿಲವ ಕಂಡೆನು. ಬಸವಣ್ಣನ ಬೋಧೆಯಿಂದ ಜಂಗಮವೇ ಲಿಂಗವೆಂದರಿದೆನು. ಆ ಜಂಗಮ ಮುಖದಿಂದಲ್ಲದೆ ಲಿಂಗತೃಪ್ತಿಯಾಗದು. ಪ್ರಸಾದಸಿದ್ಧಿಯಾದಲ್ಲದೆ ಭವಂ ನಾಸ್ತಿಯಾಗದು. ಇದು ಕಾರಣ, ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ, ನಿಮ್ಮ ಶರಣ ಬಸವಣ್ಣನ ನಂಬಿ, ನಾನು ಕೆಟ್ಟು, ಬಟ್ಟಬಯಲಾಗಿ ಹೋದೆನೆಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಹಗಲೆನ್ನೆ ಇರುಳೆನ್ನೆ ಉದಯವೆನ್ನೆ ಅಸ್ತಮಾನವೆನ್ನೆ ; ಹಿಂದೆನ್ನ ಮುಂದೆನ್ನ, ನೀನಲ್ಲದೆ ಪೆರತೊಂದಹುದೆನ್ನೆ. ಮನ ಘನವಾದುದಿಲ್ಲವಯ್ಯಾ. ಕತ್ತಲೆಯಲ್ಲಿ ಕನ್ನಡಿಯ ನೋಡಿ ಕಳವಳಗೊಂಡೆನಯ್ಯಾ. ನಿಮ್ಮ ಶರಣ ಬಸವಣ್ಣನ ತೇಜದೊಳಗಲ್ಲದೆ ಆನಿನ್ನೆಂದು ಕಾಂಬೆನು ಹೇಳಾ, ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಬಸವಣ್ಣನ ನೆನೆದೆನ್ನ ತನು ಬಯಲಾಯಿತ್ತು. ಬಸವಣ್ಣನ ನೆನೆದೆನ್ನ ಮನ ಬಯಲಾಯಿತ್ತು. ಬಸವಣ್ಣನ ನೆನೆದೆನ್ನ ಭಾವ ಬಯಲಾಯಿತ್ತು. ಕಲಿದೇವಯ್ಯ ನಿಮ್ಮ ಶರಣ, ಮಹಾಮಹಿಮ ಸಂಗನಬಸವಣ್ಣನ ನೆನೆನೆನೆದು, ಎನ್ನ ಸರ್ವಾಂಗ ಲಿಂಗವಾಯಿತ್ತೆಂದರಿದೆನಯ್ಯಾ.
--------------
ಮಡಿವಾಳ ಮಾಚಿದೇವ
ಬಸವಣ್ಣನ ಶೃಂಗದಲ್ಲಿ ತುಂಬುರ ನಾರದರು, ಬಸವಣ್ಣನ ಲಲಾಟದಲ್ಲಿ ವೀರಗಣಂಗಳು, ಬಸವಣ್ಣನ ನಯನದಲ್ಲಿ ಸೂರ್ಯಚಂದ್ರರು, ಬಸವಣ್ಣನ ಕರ್ಣದಲ್ಲಿ ಗಂಗೆವಾಳುಕಸಮರುದ್ರರು, ಬಸವಣ್ಣನ ನಾಸಿಕದಲ್ಲಿ ವಾಯು, ಬಸವಣ್ಣನ ದಂತದಲ್ಲಿ ಭೃಂಗೀಶ್ವರದೇವರು, ಬಸವಣ್ಣನ ಕೊರಳಲ್ಲಿ ಈರೇಳು ಭುವನಂಗಳು, ಬಸವಣ್ಣನ ಅಂಡದಲ್ಲಿ ಅಷ್ಟಷಷ್ಟಿ ತೀರ್ಥಂಗಳು, ಬಸವಣ್ಣನ ಬಲದೊಡೆಯಲ್ಲಿ ಅಜ, ಹರಿ, ಸರಸ್ವತಿ, ಪಂಚನದಿ, ಮಹಾಗಂಗೆ, ಬಸವಣ್ಣನ ಮಣಿಪಾದದಲ್ಲಿ ದೇವಲೋಕದ ದೇವಗಣಂಗಳು, ಬಸವಣ್ಣನ ಕಿರುಗೊಳಗಿನಲ್ಲಿ ಸಮಸ್ತಸಮುದ್ರಂಗಳು. ಈ ಸಪ್ತಸಮುದ್ರಂಗಳೊಳಗಿಹ ಸಕಲಪ್ರಾಣಿಗಳಿಗೆ ಸಂಕೀರ್ಣತೆಯಾದೀತೆಂದು, ಬಾಲದಂಡದಲೆತ್ತಿ ತಡಿಗೆ ಸೇರಿಸಿದನು ನಮ್ಮ ಬಸವಣ್ಣನು-ಇದು ಕಾರಣ, ನಾಗಲೋಕದ ನಾಗಗಣಂಗಳು ಕೊಂಬುದು ಬಸವಣ್ಣನ ಪ್ರಸಾದ. ಮತ್ರ್ಯಲೋಕದ ಮಹಾಗಣಂಗಳು ಕೊಂಬುದು ಬಸವಣ್ಣನ ಪ್ರಸಾದ. ದೇವಲೋಕದ ದೇವಗಣಂಗಳ ಕೊಂಬುದು ಬಸವಣ್ಣನ ಪ್ರಸಾದ. ರುದ್ರಲೋಕದ ರುದ್ರಗಣಂಗಳು ಕೊಂಬುದು ಬಸವಣ್ಣನ ಪ್ರಸಾದ.- ಇಂತು ನಮ್ಮ ಬಸವಣ್ಣನ ಪ್ರಸಾದವನುಂಡುಟ್ಟು ಕೊಂಡು ಕೊಟ್ಟು ಅನ್ಯದೈವಂಗಳ ಹೊಗಳುವ ಕುನ್ನಿಗಳನೇನೆಂಬೆ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಬಸವಣ್ಣನ ಮನೆಯ ಸ್ವಾನಂದ ನೋಡಿದಡೆ, ಎನ್ನ ಮನ ಬೇಸರವಾಗದೆ ಶಿವದಾಸನೆಂದು ಜೀವನ್ಮುಕ್ತನೆಂದು ಹೊಗಳುವೆನಯ್ಯಾ, ಎಲೆ ಕಪಿಲಸಿದ್ಧಮಲ್ಲಿಕಾರ್ಜುನ ಪ್ರಭುವೆ
--------------
ಸಿದ್ಧರಾಮೇಶ್ವರ
`ಬಸವ' ಎಂಬ ಮೂರಕ್ಷರ ಹೃದಯಕಮಲದಲ್ಲಿ ನೆಲೆಗೊಂಡಡೆ, ಅಭೇದ್ಯ ಭೇದ್ಯವಾಯಿತ್ತು, ಅಸಾಧ್ಯ ಸಾಧ್ಯವಾಯಿತ್ತು. ಇಂತು ಬಸವಣ್ಣನಿಂದ ಲೋಕ¯õ್ಞಕಿಕದ ಕುಭಾಷೆಯ ಕಳೆದು, ಲೋಕಾಚರಣೆಯನತಿಗಳೆದು ಭಕ್ತಿಭರವಪ್ಪುದು, ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣನ ಕಾರುಣ್ಯದಿಂದ
--------------
ಚನ್ನಬಸವಣ್ಣ
ಬಸವಣ್ಣನ ಸಮತೆ ಎನಗಾಗದಯ್ಯಾ. ಅಯ್ಯಾ, ಲಿಂಗಸ್ಥಲ-ಜಂಗಮಸ್ಥಲ-ಪ್ರಸಾದಸ್ಥಲ ನಿನಗಾಗದಯ್ಯಾ. ತ್ರಿವಿಧ ಸಕೀಲಸಂಬಂಧವನರಿದಡೆ ಎನ್ನ ಕಪಿಲಸಿದ್ಧಮಲ್ಲಿನಾಥಯ್ಯಾ, ಇತ್ತ ಬಾ ಎಂದೆತ್ತಿಕೊಳ್ಳನೆ ಅಯ್ಯ!
--------------
ಸಿದ್ಧರಾಮೇಶ್ವರ
ನಿಮ್ಮ ಜಂಗಮಮೂರ್ತಿಯಲ್ಲಿಯೆ ನಿಂದಿತ್ತು. ಅರ್ಥ ಪ್ರಾಣ ಅಬ್ಥಿಮಾನ ನಿಮ್ಮ ಜಂಗಮಮೂರ್ತಿಯಲ್ಲಿಯೆ ನಿಂದಿತ್ತು. ಅಂಗಲಿಂಗಸಂಗ ನಿಮ್ಮ ಜಂಗಮಮೂರ್ತಿಯಲ್ಲಿಯೆ ನಿಂದವು. ಎನ್ನ ನಡೆಗೆಟ್ಟಿತ್ತು, ನಿಮ್ಮ ಜಂಗಮಮೂರ್ತಿಯಿಂದ. ಎನ್ನ ನುಡಿಗೆಟ್ಟಿತ್ತು, ನಿಮ್ಮ ಜಂಗಮಮೂರ್ತಿಯಿಂದ. ಎನ್ನ ನೋಟಗೆಟ್ಟಿತ್ತು, ನಿಮ್ಮ ಜಂಗಮಮೂರ್ತಿಯಿಂದ. ಎನ್ನ ಮಾಟ ಸಮಾಪ್ತವಾಯಿತ್ತು, ನಿಮ್ಮ ಜಂಗಮಮೂರ್ತಿಯಿಂದ. ನಿಮ್ಮ ಪ್ರಸಾದದಿಂದ ಎನ್ನ ತನು ಶುದ್ಧವಾಯಿತ್ತು. ಬಸವಣ್ಣನ ತೋರಿದ ಕಾರಣ, ನಿಮ್ಮ ಜಂಗಮಮೂರ್ತಿಯ ಕಂಡು, ಬದುಕಿದೆನು ಕಾಣಾ, ಕಲಿದೇವರದೇವಯ್ಯಾ.
--------------
ಮಡಿವಾಳ ಮಾಚಿದೇವ
ನಿರಾಲಂಬದಲ್ಲಿ ನಿಜಲಿಂಗ ನಾ(ತಾ)ನೆಂಬ ಮಹದಹಂಕಾರವೆ ಸಂಸಾರಿಯಾಗಿ ಬಂದು ಬಳಲುವ ಭ್ರಾಂತು ಇನ್ನಾರಿಗೆಯೂ ತಿಳಿಯದಯ್ಯಾ. ಇನ್ನಾರು ಪರಿಹರಿಸುವರಯ್ಯಾ ಬಸವಣ್ಣನಲ್ಲದೆ? ಇದು ಕಾರಣ, ಬಸವಣ್ಣನ ಶ್ರೀಪಾದವ ತೋರಿ ಬದುಕಿಸಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಬಸವಣ್ಣನ ಪಾದವ ಕಂಡೆನಾಗಿ ಎನ್ನಂಗ ನಾಸ್ತಿಯಾಯಿತ್ತು. ಚೆನ್ನಬಸವಣ್ಣನ ಪಾದವ ಕಂಡೆನಾಗಿ ಎನ್ನ ಪ್ರಾಣಬಯಲಾಯಿತ್ತು. ಪ್ರಭುವೆ, ನಿಮ್ಮ ಶ್ರೀಚರಣಕ್ಕೆ ಶರಣೆಂದೆನಾಗಿ ಎನ್ನ ಅರಿವು ಸ್ವಯವಾಯಿತ್ತು. ಚೆನ್ನಮಲ್ಲಿಕಾರ್ಜುನದೇವಯ್ಯಾ ನಿಮ್ಮ ಶರಣರ ಕರುಣವ ಪಡೆದೆನಾಗಿ ನಿನಗೆ ಮತ್ತಾವುದಿಲ್ಲವಯ್ಯ ಪ್ರಭುವೆ.
--------------
ಅಕ್ಕಮಹಾದೇವಿ
ಇನ್ನಷ್ಟು ... -->