ಅಥವಾ

ಒಟ್ಟು 81 ಕಡೆಗಳಲ್ಲಿ , 34 ವಚನಕಾರರು , 76 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆದಿಶಕ್ತಿವಿಡಿದಾಡುವರೆಲ್ಲರು ಜಂಗಮವಲ್ಲ, ಅನಾದಿಶಕ್ತಿವಿಡಿದಾಡುವರೆಲ್ಲರು ಜ್ಞಾನಿಗಳಲ್ಲ, ಆದಿ ಅನಾದಿಯೆಂಬೀ ಎರಡ ಭೇದಿಸಿ ದಾಂಟಿ, ಇಚ್ಛಾಶಕ್ತಿಯ ಇಚ್ಛೆಯ ಮರೆದು, ಕ್ರಿಯಾಶಕ್ತಿಯ ಭಾವವ ಬಿಟ್ಟು, ಜ್ಞಾನಶಕ್ತಿಯ ಠಾವವನೊಲ್ಲದೆ, ತಾನು ತಾನಾದವಂಗೆ ಏನೂ ಇದಿರಿಲ್ಲಾ, ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಶಮೆ ದಮೆ ತಿತಿಕ್ಷೆ ಉಪರತಿ ಶ್ರದ್ಧೆ ಸಮಾಧಿ ಸಾಧನಸಂಪನ್ನನಾಗಿ ಸದ್ಗುರುವನರಸುತ್ತ ಬಪ್ಪ ಶಿಷ್ಯನ ಸ್ಥೂಲತನುವಿನ ಕಂಗಳ ಕೊನೆಯಲ್ಲಿ ಇಷ್ಟಲಿಂಗವ ಧರಿಸಿ; ಸೂಕ್ಷ್ಮತನುವಿನ ಮನದ ಕೊನೆಯಲ್ಲಿ ಪ್ರಾಣಲಿಂಗವ ಧರಿಸಿ; ಕಾರಣ ತನುವಿನ ಭಾವದ ಕೊನೆಯಲ್ಲಿ ತೃಪ್ತಿಲಿಂಗವ ಧರಿಸಿ, `ಸರ್ವೇಂದ್ರಿಯಾಣಾಂ ನಯನಂ ಪ್ರಧಾನಂ, ಎಂಬ ಕಂಗಳ ಇಷ್ಟಲಿಂಗಕ್ಕೆ ಸಮರ್ಪಿಸಿ, `ಇಂದ್ರಿಯಾಣಾಂ ಮನೋನಾಥಃ? ಎಂಬ ಮನವನು ಪ್ರಾಣಲಿಂಗಕ್ಕೆ ಸಮರ್ಪಿಸಿ; ಪ್ರಾಣ ಭಾವವ ತೃಪ್ತಿಲಿಂಗಕ್ಕೆ ಸಮರ್ಪಿಸಿ `ಮನೋದೃಷ್ಟ್ಯಾ ಮರುನ್ನಾಶಾದ್ರಾಜಯೋಗಫಲಂ ಭವೇತ್, ಎಂಬ ರಾಜಯೋಗ ಸಮರಸವಾದಲ್ಲಿ_ ಅಂಗ ಲಿಂಗ, ಲಿಂಗವಂಗವಾಗಿ ಶಿಖಿ ಕರ್ಪೂರಯೋಗದಂತೆ ಪೂರ್ಣಾಪೂರ್ಣ ದ್ವೈತಾದ್ವೈತ ಉಭಯ ವಿನಿರ್ಮುಕ್ತವಾಗಿ `ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ, ಎಂಬ ನಿಜದಲ್ಲಿ ನಿವಾಸಿಯಾದರು, ಕೂಡಲಚೆನ್ನಸಂಗಾ ನಿಮ್ಮ ಶರಣರು.
--------------
ಚನ್ನಬಸವಣ್ಣ
ಗುರುಮುಖದಿಂದ ಪರಮಲಿಂಗವು ತನ್ನ ಕರವ ಸೇರಿದ ಬಳಿಕ ಆ ಲಿಂಗದಲ್ಲಿ ಸ್ನೇಹ ಮೋಹವ ಬಲಿದು, ಲಿಂಗಪ್ರೇಮಿಯಾಗಿ, ಲಿಂಗಭಾವದಲ್ಲಿ ತನ್ನ ಭಾವವ ಬಲಿದ ಬಳಿಕ ಅನ್ಯವಿಷಯವ್ಯಾಪ್ತಿಯ ವ್ಯವಹಾರದ ಭ್ರಾಂತಿಯಿಲ್ಲದಿರಬೇಕು ನೋಡಾ. ಇದೇ ಏಕಚತ್ತಮನೋಭಾವಿಯ ಗುಣ; ಇದೇ ಲಿಂಗಗ್ರಾಹಕನ ನಿರುತ. ಲಿಂಗವ ಮುಟ್ಟಿ ಮತ್ತೇನನೂ ಮುಟ್ಟದ ನಿಃಕಳಂಕನ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಎನ್ನ ಕಾಯವ ಬಸವಣ್ಣನಳವಡಿಸಿಕೊಂಡ. ಎನ್ನ ಮನವ ಚನ್ನಬಸವಣ್ಣನಳವಡಿಸಿಕೊಂಡ. ಎನ್ನ ಭಾವವ ಮಡಿವಾಳಯ್ಯನಳವಡಿಸಿಕೊಂಡ._ ಇಂತೀ ಮೂವರು ಒಂದೊಂದನಳವಡಿಸಿಕೊಂಡ ಕಾರಣ ಗುಹೇಶ್ವರಾ, ನಿಮ್ಮ ಶರಣರೆಂಬ ತ್ರಿಮೂರ್ತಿಗಳಿಗೆ ನಮೋ ನಮೋ ಎನುತಿರ್ದೆನು.
--------------
ಅಲ್ಲಮಪ್ರಭುದೇವರು
ಮಾತಿನ ಗೂಢವ ನುಡಿದಡೆ, ನೀತಿವಂತರು ಅರಿಯರು. ಜ್ಞಾತೃಜ್ಞೇಯ ಭಾವವ ನುಡಿದಡೆ, ಪ್ರಖ್ಯಾತ ಆಗಮಯುಕ್ತಿ ಅವರರಿಯರು. ಇಂತಿವ ಹೇಳಿದಡೆ ಜಗದ ತೊಡಕು, ಉಳಿದಡೆ ಚಿತ್ತಕ್ಕೆ ವಿರೋಧ. ಇದರಚ್ಚುಗ ಬೇಡ, ಗುಡಿಯ ಗುಮ್ಮಟನಾಥನ ಅಗಮ್ಯೇಶ್ವರಲಿಂಗವೆ.
--------------
ಮನುಮುನಿ ಗುಮ್ಮಟದೇವ
ಕಾಷ್ಠವ ಸುವರ್ಣವ ಮಾಡಿದೆನೆಂಬ ಘಾತುಕತನವೆ ನಿಮ್ಮ ಭಕ್ತಿ ? ಸಕಲ ದೇಶ ಕೋಶ ವಾಸ ಭಂಡಾರ ಸವಾಲಕ್ಷ ಮುಂತಾದ ಸಂಬಂಧ, ಸ್ತ್ರೀಯರ ಬಿಟ್ಟು ಬಂದೆನೆಂಬ ಕೈಕೂಲಿಯೆ ನಿಮ್ಮ ಭಕ್ತಿ ? ಬಸವಣ್ಣ ಚೆನ್ನಬಸವಣ್ಣ ಪ್ರಭುದೇವರು ಮುಂತಾದ ಏಳುನೂರೆಪ್ಪತ್ತು ಅಮರಗಣಂಗಳ ಭಾವವಿದ್ದಂತೆ ನಿಮ್ಮ ಅಗಡವೇಕಯ್ಯಾ ? ನಿಮ್ಮ ಅರಿವಿಂಗೆ ಇದಿರಿನಲ್ಲಿ ಕೂಡಿಹೆನೆಂಬ ಭಿನ್ನಭಾವವುಂಟೆ ಅಯ್ಯಾ ? ಕರ್ಪೂರದ ಅರಣ್ಯವ ಕಿಚ್ಚುಹತ್ತಿ ಬೆಂದಲ್ಲಿ ಭಸ್ಮ ಇದ್ದಿಲೆಂದು ಲಕ್ಷಿಸಲುಂಟೆ ? ನಿಮ್ಮ ಭಾವವ ನಿಮ್ಮಲ್ಲಿಗೆ ತಿಳಿದುಕೊಳ್ಳಿ. ನಿಮ್ಮ ಕೂಟಕ್ಕೆ ಎನ್ನ ನಾಚಿಕೆಯ ಬಿಡಿಸಿದ ತೆರನ ತಿಳಿದುಕೊಳ್ಳಿ. ಶಕ್ತಿಯ ಮಾತೆಂದು ಧಿಕ್ಕರಿಸಬೇಡಿ. ಹೊರಗೆ ಕೂಡಿಹೆನೆಂಬುದು ನಿಮ್ಮ ಅರಿವಿಂಗೆ ಹಾನಿ. ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ, ನಿಮ್ಮ ಶರಣರ ನೆಲೆಯ ನೀವೇ ನೋಡಿಕೊಳ್ಳಿ.
--------------
ಮೋಳಿಗೆ ಮಹಾದೇವಿ
ನಿಷ್ಠೆ ಘಟಿಸಿ ಕ್ರಿಯವಗ್ರಹಿಸಿ ಭಾವಭರಿತವಾಗಿ ಜ್ಞಾನವೆ ಅಂಗವಾಗಿ ಕ್ರಿಯೆ ಪ್ರಾಣವಾಗಿ, ಮತ್ತೆ ಜ್ಞಾನವೆ ಪ್ರಾಣವಾಗಿ ಕ್ರಿಯೆ ಅಂಗವಾಗಿ ಅಂಗಮನಕ್ರಿಭಾವ ಈ ಚತುರ್ವಿಧವೊಂದಾಗಿ, ಮತ್ತೆ ನಿಷ್ಠೆಘಟಿಸಿ ಕ್ರಿಜ್ಞಾನ ಎರಡ ವಿೂರಿನಿಂದ ಭಕ್ತವಿರಕ್ತನ ತೂರ್ಯದ ಕ್ರಿಯೆ ವೇಧಿಸಿ ನಿಂದವನ ನಿಲವು ಎಂತುಟೆಂದರೆ: ಕ್ರಿಯೆಂದರೆ ಇಷ್ಟಲಿಂಗ, ಅಂಗವೆಂದರೆ ಪ್ರಾಣಲಿಂಗ. ಆ ಪ್ರಾಣಲಿಂಗವ ಇಷ್ಟಲಿಂಗದಲ್ಲಡಗಿಸಿಕೊಂಡು ನಿಂದುದು ಎರಡಾಗಿ ಭಕ್ತನೆಂದು ಮಾಹೇಶ್ವರನೆಂದು ನಿಷ್ಠೆಯಲ್ಲಿ ನೆರೆನಿಂದಿರಲು ಮತ್ತಾ ನಿಷ್ಠೆಪಸರಿಸಿ ಆ ಭಕ್ತಮಾಹೇಶ್ವರರು ತಮ್ಮ ಮುನ್ನಿನ ನಿಷ್ಠೆಯ ಬಳಿಗೆ ಬಂದು ಎನ್ನಕ್ರಿ ನಿಮ್ಮಲ್ಲಿಯೇ ಅಡಗಿತ್ತು ಆ ಮುಕ್ತತ್ವದ ಕ್ರಿಯೊಳಗೊಂಡು ದೃಷ್ಟವ ಕಂಡು ಬರ....ಕೇಳಲಾಗಿ, ಎನ್ನ ಇಷ್ಟವಾಸರಿಸಿತ್ತೆಂದು ಹೇಳಲು ಸುಮ್ಮನೆ ಅವನ ಕೂಡೆ ಪ್ರಸಂಗಿಸಲಾಗದು. ಅದೇನು ಕಾರಣವೆಂದರೆ: ಮೊಟ್ಟ ಮೊದಲಲ್ಲಿ ಮೂರು ಭಿನ್ನವ ಕೇಳುವದು ಆ ಮೂರು ಭಿನ್ನಯೆಂತಾದವಯ್ಯಯೆಂದರೆ, ಅದರೊಳಗೈದು ಭಿನ್ನ ಉಂಟು. ಇಂತೀ ಎಂಟರೊಳಗೆ ನಾಲ್ಕು ಲಿಂಗದ ನೆಲೆ ಸಿಕ್ಕಿದರೆ ಅವೆಲ್ಲರಲ್ಲಿ ಬಂಧಿಸೂದು. ಅದಲ್ಲದೆ ನಿಂದರೆ ಮುಂದಣ ನಾಲ್ಕು ಅವನ ಭಾವವ ತೊರೆದು ನೋಡೂದು. ನೋಡಿ ನಿಶ್ಚಯವಾದ ಮತ್ತೆ ಕೂಡೆಯಿಟ್ಟುಕೊಂಡಿರ್ಪ ಸಮಯದಲ್ಲಿ, ಮೂಲಾಗ್ನಿಯ ಜ್ವಾಲೆಯಿಂದ ಮೇಲುವಾಯ್ದು ಒತ್ತಿಲಿರ್ದ ತನ್ನ ತೆತ್ತಿಗರ ನಿಲ್ಲದಂತೆ ನೀಕರಿಸುತ್ತಿರಲು, ಸಲಹಲಾರದ ತಾಯಿ ಶಿಶುವ ಬೈದು ಕೊಲುವಂತೆ ತಮ್ಮ ತ್ಯಾಗದ ಮೈಮರೆದಿರ್ದಾತನ ಎಚ್ಚರ ಮಾಡಿ, ನೀ ಮುನ್ನಲಿಂತಹವನೆಂದೆ ನುಡಿದು ಹೋಗುವ ನಿಷ್ಠೆ ಭಂಡರ ಗುಹೇಶ್ವರ ಸಾಕ್ಷಿಯಾಗಿ ಅಲ್ಲಯ್ಯನೊಲ್ಲ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಸ್ವಯಮಜ್ಜನ, ಸ್ವಯಪೂಜೆ, ಸ್ವಯಾರೋಗಣೆ_ ನಾ ನೀನೆಂಬ ಸಂಶಯ ನಿಂದ ನಿಲವೆಂತಿದ್ದಿತೆಂದರೆ: [ಪ್ರ]ಪಂಚ ಪರತಂತ್ರವ ಮೀರಿ, ಭಾವವ ಬಿಟ್ಟು, ಘನರವಿಲೋಚನನಾಗಿ, ಅರ್ಪಿತವೆ (ಭುಂಜಿತ), ಅನರ್ಪಿತವೆ ಅಭುಂಜಿತ, ಸ್ಥೂಲ ಸೂಕ್ಷ್ಮ ಘನನಿತ್ಯವೆಂದರಿಯರು, ಜಡವೇಷಲಾಂಛನಧಾರಿಗಳು. ಕಾಯ ಜೀವ ಪ್ರಸಾದವಂ ಬಿಟ್ಟು ಸರ್ವಭಾವ ರುಚಿ ಪ್ರಸಾದಿ, ಕೂಡಲಚೆನ್ನಸಂಗಯ್ಯಾ ಆತ ಸರ್ವಾಂಗಪ್ರಸಾದಿ.
--------------
ಚನ್ನಬಸವಣ್ಣ
ಪುಷ್ಪಗಂಧದಂತೆ ಪ್ರಾಣಲಿಂಗಭಾವ. ನೀರು ಗಂಧದಂತೆ ಇಷ್ಟಲಿಂಗಭಾವ. ಇಂತೀ ನಾಲ್ಕರ ಯೋಗ ಕೂಡಿದಲ್ಲಿ ಶರಣಸ್ಥಲಭಾವ. ಇಂತೀ ಐದರ ಭಾವವ ಅವಗವಿಸಿ ನಿಂದುದು, ಐಕ್ಯಸ್ಥಲಂಗೆ ಅವದ್ಥಿಗೊಡಲಿಲ್ಲ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಇಂತೀ ಅಷ್ಟಾವರಣವ ಸದ್ಗುರುಮುಖದಿಂ ಚಿದಂಗಚಿದ್ಘನಲಿಂಗದ ಮಧ್ಯದಲ್ಲಿ ಸಂಬಂಧವಿಟ್ಟು, ಏಕಲಿಂಗನಿಷ್ಠಾಪರತ್ವದಿಂದ ಸ್ಥೂಲಕಂಥೆಯ ಧರಿಸಿ ಸತ್ಕಾಯಕ-ಸತ್ಕ್ರಿಯಾ-ಸಮ್ಯಜ್ಞಾನ-ಸದ್ಭಕ್ತಿ- ಸದಾಚಾರಸನ್ನಿಹಿತರೆ ನೂತನಗಣಂಗಳೆನಿಸುವರು ನೋಡ. ಅದರಿಂ ಮೇಲೆ ಚಿದಂಗ-ಚಿತ್ಪ್ರಾಣಾಂಗದ ಮಧ್ಯದಲ್ಲಿ ಚಿದ್ಘನಲಿಂಗ-ಚಿತ್ಪ್ರಾಣಲಿಂಗವ ಸದ್ಗುರುಮುಖದಿಂ ಸಂಬಂಧವಿಟ್ಟು ಆ ಲಿಂಗದ ಮಧ್ಯದಲ್ಲಿ ಸಾಕಾರ-ನಿರಾಕಾರವಾದ ಷೋಡಶಾವರಣವ ಸಂಪೂರ್ಣವಮಾಡಿಕೊಂಡು, ಸೂಕ್ಷ್ಮತನುವೆಂಬ ಕಂಥೆಯ ಧರಿಸಿ ಕಂಗಳಾಲಯದ ಜ್ಯೋತಿರ್ಲಿಂಗದ ಮಧ್ಯದಲ್ಲಿ ಮನವ ಮುಳುಗಿಸುವರೆ ಆದಿಗಣಂಗಳೆನಿಸುವರು ನೋಡ. ಅದರಿಂ ಮೇಲೆ, ಚಿದ್ಘನ ತ್ರಿವಿಧಾಂಗ-ಚಿದ್ಘನ ತ್ರಿವಿಧಲಿಂಗವ ಸದ್ಗುರುಮುಖದಿಂ ಸಂಬಂದ್ಥಿಸಿಕೊಂಡು ಆ ಲಿಂಗಾಂಗದ ಮಧ್ಯದಲ್ಲಿ ಕ್ರಿಯಾಷ್ಟಾವರಣ-ಜ್ಞಾನಾಷ್ಟಾವರಣ-ಮಹಾಜ್ಞಾನಾಷ್ಟಾವರಣವ ಸಂಬಂಧವಿಟ್ಟು, ಕಾರಣತನುವೆಂಬ ಕಂಥೆಯ ಧರಿಸಿ, ಹೃತ್ಕಮಲಮಧ್ಯದಲ್ಲಿ ಬೆಳಗುವ ಪರಂಜ್ಯೋತಿರ್ಲಿಂಗಮಧ್ಯದಲ್ಲಿ ಭಾವವ ಮುಳುಗಿಸಿ ಬಚ್ಚಬರಿಯಾನಂದದಲ್ಲಿ ಪರಿಪೂರ್ಣಾನಂದದಿಂದಾಚರಿಸುವರೆ ಅನಾದಿಗಣಂಗಳೆನಿಸುವರು ನೋಡ. ಅದರಿಂ ಮೇಲೆ, ಚಿದ್ಘನ ಅಷ್ಟಾಂಗದ ಮಧ್ಯದಲ್ಲಿ ಚಿದ್ಘನ ಅಷ್ಟಲಿಂಗಂಗಳ ಸದ್ಗುರುಮುಖದಿಂ ಧರಿಸಿ, ಆ ಲಿಂಗಾಂಗದ ಮಧ್ಯದಲ್ಲಿ ಅರುವತ್ತುನಾಲ್ಕು ತೆರದಾವರಣವ ಸಂಬಂದ್ಥಿಸಿಕೊಂಡು ತಮ್ಮ ಸರ್ವಾಂಗದಲ್ಲಿ ಅಷ್ಟವಿಧಕಮಲಂಗಳ ಕಂಡು, ಆ ಕಮಲಮಧ್ಯದಲ್ಲಿ ನೆಲಸಿರ್ಪ ಚತುರ್ವಿಧ ಬಿಂದುಲಿಂಗ, ಷಡ್ವಿಧ ಧಾತುಲಿಂಗ, ದಶವಿಧ ಕ್ಷೇತ್ರಲಿಂಗ, ದ್ವಾದಶ ವಿಕೃತಿಲಿಂಗ, ಷೋಡಶ ಕಳಾಲಿಂಗ, ದ್ವಿವಿಧ ವಿದ್ಯಾಲಿಂಗ, ಸಹಸ್ರ ಶಿವಕಳಾಲಿಂಗ, ತ್ರಿವಿಧ ವಿವೇಕಲಿಂಗ ಇಂತೀ ಅಷ್ಟವಿಧಕಮಲಂಗಳ ಮಧ್ಯದಲ್ಲಿ ನೆಲಸಿರ್ಪ ಅಷ್ಟವಿಧಲಿಂಗಗಳ ಅಷ್ಟವಿಧ ಹಸ್ತಗಳಿಂದ, ಅಷ್ಟವಿಧಾರ್ಚನೆ, ಷೋಡಶೋಪಚಾರಂಗಳ ಮಾಡಿ, ಎರಡಳಿದು ಏಕರೂಪವಾಗಿ ನಿರಾವಯ ಕಂಥೆಯ ಧರಿಸಿ, ಪರತತ್ವ ಜ್ಯೋತಿರ್ಮಯಲಿಂಗದೊಳಗೆ ಉರಿಯುಂಡ ಕರ್ಪುರದಂತೆ ಸಮರಸವಾದರು ನೋಡ. ಅವರಾರೆಂದಡೆ : ರುದ್ರಲೋಕದ ರುದ್ರಗಣಂಗಳು, ಶಿವಲೋಕದ ಶಿವಗಣಂಗಳು, ದೇವಲೋಕದ ದೇವಗಣಂಗಳು, ನಾಗಲೋಕದ ನಾಗಗಣಂಗಳು, ಶಾಂಭವಲೋಕದ ಶಾಂಭವಗಣಂಗಳು ಮುಂತಾದವರು ಬಯಲೊಳಗೆ ಮಹಾಬಯಲು ಬೆರದಂತಾದರು ನೋಡ. ಇಂತೀ ಸರ್ವಾಚಾರಸಂಪತ್ತಿನಾಚರಣೆಯನಾಚರಿಸುವರೆ ನಿರಾವಯಗಣಂಗಳೆನಿಸುವರು ನೋಡ, ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಕಾಲಿದ್ದಂತೆ ತಲೆ ನಡೆದುದುಂಟೆ ಅಯ್ಯಾ ? ಕಣ್ಣಿದ್ದಂತೆ ಕರ್ಣ ನೋಡಿದುದುಂಟೆ ಅಯ್ಯಾ ? ಬಾಯಿದ್ದಂತೆ ನಾಸಿಕ ಉಂಡುದುಂಟೆ ಅಯ್ಯಾ ? ತಾಯಿಲ್ಲದೆ ಮಕ್ಕಳು ಬಂದ ತೆರನ ಹೇಳಯ್ಯಾ ? ನಿಮ್ಮ ಸೇವೆಯ ತೊತ್ತಿನ ಭಾವವ ಕೇಳಲೇತಕ್ಕೆ ? ಪಟದೊಳಗಣ ಬಾಲಸರಕ್ಕೆ ಪ್ರತಿಸೂತ್ರ ನೇಣುಂಟೆ ? ನಿಮ್ಮಲ್ಲಿಯೆ ಎನ್ನ ಭಾವಲೇಪ, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನಲ್ಲಿಯೆ.
--------------
ಮೋಳಿಗೆ ಮಹಾದೇವಿ
ಕ್ರೀ ನಿಃಕ್ರೀಯೆಂಬ ಉಭಯವಾವುದು? ತನ್ನನರಿತಲ್ಲಿ ಕ್ರೀ, ತನ್ನ ಮರೆದಲ್ಲಿ ನಿಃಕ್ರೀ. ನಾನೆಂಬುದುಳ್ಳನ್ನಕ್ಕ ಸರ್ವಕ್ರೀ ಸಂಭ್ರಮಿಸಬೇಕು, ನಾನೆಂಬುದೆನೂ ತೋರದಲ್ಲಿ ಕ್ರೀಯೆಂಬುದೇನೂ ಇಲ್ಲ. ಇಂತೀ ಭಾವವ ತಿಳಿದು ನಿಮ್ಮ ನೀವೆ ನೋಡಿಕೊಳ್ಳಿ, ಜಿಡ್ಡ ಜಿಗುಡೆಂಬ ಸಂದೇಹವ ತಾನುಂಡು ತೇಗಿದಂತೆ. ಇದಕ್ಕೆ ಸಂದೇಹವಿಲ್ಲ. ಏಲೇಶ್ವರಲಿಂಗವೇ ಸಾಕ್ಷಿ.
--------------
ಏಲೇಶ್ವರ ಕೇತಯ್ಯ
ಸಕಲ ವ್ಯಾಪಾರದಲ್ಲಿ ವ್ಯವಹರಣೆಯ ಮಾಡಿ ಬಂದು ನಿಂದ ಧರೆಯ ಮೇಲೆ ಅಯಿದು ರೂಪಾಗಿ ರೂಪಿಂಗೈದು ಕುರುಹಿನ ಭೇದದಲ್ಲಿ ಆರೋಪಿಸಿ ರೂಪು ರೂಪಿನಿಂದ ಅಳಿದು ದೃಷ್ಟವ ದೃಷ್ಟದಿಂದ ಕಾಬಂತೆ ಅರಿವ ಅರಿವಿಂದ ಭಾವವ ಭಾವದಿಂದ ತನ್ನ ತಾ ಕುರುಹಿಟ್ಟುಕೊಂಡು ತತ್ವ ನಿಶ್ಚಯವಾಗಿ ನಿಜವ ನಿನ್ನ ನೀನರಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಊರೆಂಬುದರಿಯ ಉಲುವೆಂಬುದರಿಯ ಬರಿಯ ಮಾತಿನ ಬಣ್ಣವನರಿಯದ ಸಿರಿಸಂಪದದೊಳಾನಂದ ತಲೆಗೇರಿ ಜಾತಿ ಗೋತ್ರ ಕುಲಾಶ್ರಮ ವರ್ಣ ನಾಮಂಗಳೆನುಯೇನೆಂಬ ಭಾವವ ಮರೆದಿರ್ದನು ಗುರುನಿರಂಜನ ಚನ್ನಬಸವಲಿಂಗ ತಾನಾದ ಶರಣ.
--------------
ದೇಶಿಕೇಂದ್ರ ಸಂಗನಬಸವಯ್ಯ
ಅಂಗಕ್ಕೆ ಲಿಂಗ, ಮನಕ್ಕೆ ಅರಿವಾಗಬೇಕೆಂದು ಸಂದೇಹಗೊಂಬುದು ಅರಿವೋ, ಆತ್ಮನೋ ? ಅಂಗಕ್ಕೆ ಅರಿವೆಂಬುದೊಂದು ಜೀವ, ಜೀವಕ್ಕೆ ಕೊಡುವುದೊಂದು ಬೆಳಗು. ತನ್ನಲ್ಲಿ ತೋರುವ ಘಟಬಿಂಬದ bs್ಞಯೆ ಹಲವು ತೆರನಾದಂತೆ, ಸ್ಥೂಲಕ್ಕೆ ಸ್ಥೂಲ, ಸೂಕ್ಷ್ಮಕ್ಕೆ ಸೂಕ್ಷ್ಮವಾಗಿ ಹೆಚ್ಚು ಕುಂದಿಲ್ಲದೆ ತೋರುವ ತೋರಿಕೆ, ಘಟದ ಗುಣವೋ, ಬಿಂಬದ ಗುಣವೋ ? ಎಂಬುದ ತಾನರಿತಲ್ಲಿ, ಉಭಯದ ಸೂತಕಕ್ಕೆ ಹೊರಗು. ಹೊರಗೆಂಬ ಭಾವವ ಅರಿದಲ್ಲಿ, ಕಾಮಧೂಮ ಧೂಳೇಶ್ವರನೆಲ್ಲಿಯೂ ತಾನೆ.
--------------
ಮಾದಾರ ಧೂಳಯ್ಯ
ಇನ್ನಷ್ಟು ... -->