ಅಥವಾ

ಒಟ್ಟು 322 ಕಡೆಗಳಲ್ಲಿ , 59 ವಚನಕಾರರು , 265 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಕ್ಷೆ ಭಕ್ತನ ಸೋಂಕು. ಮುಖಸಜ್ಜೆ ಮಾಹೇಶ್ವರನ ಸೋಂಕು. ಕರಸ್ಥಲ ಪ್ರಾಣಲಿಂಗಿಯ ಸೋಂಕು. ಉತ್ತಮಾಂಗ ಶರಣನ ಸೋಂಕು. ಅಮಳೋಕ್ಯ ಐಕ್ಯನ ಸೋಂಕು. ಭಕ್ತಂಗೆ ಆಚಾರಲಿಂಗ, ಮಾಹೇಶ್ವರಂಗೆ ಸದಾಚಾರಲಿಂಗ, ಪ್ರಸಾದಿಗೆ ವಿಚಾರಲಿಂಗ, ಪ್ರಾಣಲಿಂಗಿಗೆ ಸರ್ವವ್ಯವಧಾನ ಸನ್ನದ್ಧಲಿಂಗ, ಶರಣಂಗೆ ಅವಿರಳ ಸಂಪೂರ್ಣಲಿಂಗ, ಐಕ್ಯಂಗೆ ಪರಮ ಪರಿಪೂರ್ಣಲಿಂಗ ಇಂತೀ ಆರುಸ್ಥಲ ಷಟ್ಕರ್ಮ ಷಡ್ವಿಧಲಿಂಗ ಭೇದಂಗಳಲ್ಲಿ ಮುಂದಣ ವಸ್ತುವೊಂದುಂಟೆಂದು ಸಂಗವ ಮಾಡುವುದಕ್ಕೆ ಆರಂಗದ ಪಥಗೂಡಿ ಕಾಬಲ್ಲಿ ವಸ್ತುವನೊಡಗೂಡುವುದೊಂದೆ ಭೇದ. ಇಂತೀ ಸ್ಥಲವಿವರ ಕೂಟಸಂಬಂಧ. ಏಕಮೂರ್ತಿ ತ್ರಿವಿಧಸ್ಥಲವಾಗಿ, ತ್ರಿವಿಧಮೂರ್ತಿ ಷಡುಸ್ಥಲವಾಗಿ ಮಿಶ್ರಕ್ಕೆ ಮಿಶ್ರ ತತ್ವಕ್ಕೆ ತತ್ವ ಬೊಮ್ಮಕ್ಕೆ ಪರಬ್ರಹ್ಮವನರಿತಡೂ, ಹಲವು ಹೊಲಬಿನ ಪಥದಲ್ಲಿ ಬಂದಡೂ ಪಥ ಹಲವಲ್ಲದೆ ನಗರಕ್ಕೆ ಒಂದೆ ಒಲಬು. ಇಂತೀ ಸ್ಥಲವಸ್ತುನಿರ್ವಾಹ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ದಾಸೋಹದ ಸಂಗಣ್ಣ
ಸಮಶೀಲ ನೇಮ ಒಂದಾದಲ್ಲಿ ಉಡುವ ತೊಡುವ ಕೊಡುವ ಕೊಂಬ ಅಡಿಯೆಡೆ ಮುಂತಾಗಿ ಸಕ್ಕರೆಯ ಬುಡಶಾಖೆಯಂತೆ ಮಧುರಕ್ಕೆ ಹೆಚ್ಚು ಕುಂದಿಲ್ಲದೆ ಇಪ್ಪ ನೇಮ ಕಟ್ಟಾಚಾರ ನಿಶ್ಚಯವಾದವಂಗೆ, ಅಂಗ ಹಲವಲ್ಲದೆ ಕುಂದಣ ಒಂದೆ ಭೇದ. ನೇಮ ಹಲವಲ್ಲದೆ ಜ್ಞಾನವೊಂದೆ ಭೇದ. ಭೂಮಿ ಹಲವಲ್ಲದೆ ಅಪ್ಪುವೊಂದೆ ಭೇದ, ಬಂದ ಯೋನಿ ಒಂದೆ. ತಾ ಮುಂದಿಕ್ಕುವ ಯೋನಿ ಒಂದಾದ ಕಾರಣ. ಹಿಟ್ಟು ಹಲವಾದಡೆ ಅಪ್ಪದಕಲ್ಲು ಒಂದೆಯಾದಂತೆ. ಇದು ತಪ್ಪದ ಆಚಾರ, ಇದಕ್ಕೆ ಮಿಥ್ಯತಥ್ಯವಿಲ್ಲ, ತಪ್ಪದು ನಿಮ್ಮಾಣೆ. ಆಚಾರಕ್ಕರ್ಹನಾದ ರಾಮೇಶ್ವರಲಿಂಗವೆ ನೀನೆ ಬಲ್ಲೆ.
--------------
ಅಕ್ಕಮ್ಮ
ದ್ಥೀರಪ್ರಸಾದ ವೀರಪ್ರಸಾದ ಆವೇಶಪ್ರಸಾದ. ಇಂತೀ ತ್ರಿವಿಧಪ್ರಸಾದವ ಕೊಂಬಲ್ಲಿ ಅಂಗವರತು ಇದಿರಿಂಗೆ ಭಯಭಂಗವಿಲ್ಲದೆ ಬೆಗಡು ಜಿಗುಪ್ಸೆ ಚಿಕಿತ್ಸೆ ತಲೆದೋರದೆ ಮಹಾಕುಂಭಘೃತಂಗಳ ಕೊಂಡಂತೆ. ಮಹಾಮೇರುವೆಯ ಅಲ್ಪಮೊರಡಿ ದ್ಥಿಕ್ಕರಿಸಿ ಅಲ್ಲಿಗೆ ಹೋದಡೆ ಅದರ ತಪ್ಪಲಲ್ಲಿಯೆ ತಾನಡಗಿದಂತೆ. ಈ ಗುಣ ದೃಷ್ಟಪ್ರಸಾದಿಯ ಕಟ್ಟಿನ ಭೇದ. ದಹನ ಚಂಡಿಕೇಶ್ವರಲಿಂಗವು ತಾನಾದ ಅಂಗದ ತೆರ.
--------------
ಪ್ರಸಾದಿ ಲೆಂಕಬಂಕಣ್ಣ
ಕಾಲು ಮೂರು, ಬಸುರು ನಾಲ್ಕು, ಕೈ ಐದು, ತಲೆ ಎಂಟು, ಬಾಯಿ ಒಂಬತ್ತು, ಕಿವಿ ಆರು, ಕಣ್ಣು ಮೂವತ್ತೆರಡು. ಇಂತೀ ಪಿಂಡಕ್ಕೆ ಐವತ್ತೊಂದು ಕಳೆ. ಆ ಜೀವಕ್ಕೆ ಪರಮನೊಂದೆ ಕಳೆ. ಈ ಗುಣ ಜಾÕನಪಿಂಡದ ಭೇದ. ಶಂಭುವಿನಿಂದಿತ್ತ ಸ್ವಯಂಭವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ದಾಸೋಹದ ಸಂಗಣ್ಣ
ಸರ್ವಮಯ ಲಿಂಗಾಂಕಿತಸೀಮೆಯಾಗಬೇಕೆಂಬಲ್ಲಿ ಆ ಘನವ ತಿಳಿದು ತನ್ನ ತಾನೆ ವಿಚಾರಿಸಿಕೊಂಬಲ್ಲಿ ಸ್ಥೂಲತನುವಿನಲ್ಲಿ ಕಾಬ ಕಾಣಿಕೆ ದೃಷ್ಟವಾಗಿ ಲಿಂಗಾಂಕಿತ. ಸೂಕ್ಷ್ಮತನುವಿನಲ್ಲಿ ಕಾಬ ಕಾಣಿಕೆ ಎಚ್ಚತ್ತಲ್ಲಿ ಬಯಲಾಯಿತ್ತು ಲಿಂಗಾಂಕಿತ. ಕಾರಣದಲ್ಲಿ ಪ್ರಮಾಣಿಸುವುದಕ್ಕೆ ಲಿಂಗಾಂಕಿತಕ್ಕೆ ಒಡಲಾವುದು ? ಇದ ನಾನರಿಯೆ, ನೀವೆ ಬಲ್ಲಿರಿ. ಜಾಗ್ರ, ಸ್ವಪ್ನ, ಸುಷುಪ್ತಿಗಳಲ್ಲಿ ಕಾಬ ಲಿಂಗಾಂಕಿತದ ಭೇದ ನೇಮವಾವುದು ? ಜಾಗ್ರದಲ್ಲಿ ತೋರುವ ನಿಜ ಸ್ವಪ್ನಕ್ಕೊಡಲಾಗಿ, ಸ್ವಪ್ನದಲ್ಲಿ ತೋರುವ ನಿಜ ಸುಷುಪ್ತಿಗೊಡಲಾಗಿ, ಉಭಯದಲ್ಲಿ ಕೂಡಿದ ಕೂಟ ತನ್ಮಯಲಿಂಗಾಂಕಿತವಾಯಿತ್ತು. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ಲೇಪವಾಗಿ.
--------------
ಅಕ್ಕಮ್ಮ
ಯೋಗಿ ಜೋಗಿ ಶ್ರಾವಕ ಸನ್ಯಾಸಿ ಪಾಶುಪತಿ ಕಾಳಾಮುಖಿ ಆರು ಭೇದ ಮೂರರಲ್ಲಿ ಅಡಗಿ ಎರಡು ಅಳಿವಿಂಗೆ ಒಳಗಾಯಿತ್ತು. ಒಂದು ನಿಂದು ಸಮಯ ರೂಪಾಯಿತ್ತು. ಸಮಯಕ್ಕೆ ಹೊರಗಾದುದು, ಸದಾಶಿವಮೂರ್ತಿಲಿಂಗಕ್ಕೆ ಶಕ್ತಿನಾಮವಿಲ್ಲ.
--------------
ಅರಿವಿನ ಮಾರಿತಂದೆ
ಮನವಿಕಾರದಲ್ಲಿ ತೋರುವ ಸುಳುಹು ತನುವಿಕಾರದಲ್ಲಿ ಕಾಣಿಸಿಕೊಂಡ ಮತ್ತೆ ಅರಿವಿನ ಭೇದ ಎಲ್ಲಿ ಅಡಗಿತ್ತು ? ಅರಿದು ತೋರದ ಮತ್ತೆ ನೆರೆ ಮುಟ್ಟಬಲ್ಲುದೆ ತ್ರಿವಿಧದ ಗೊತ್ತ ? ಇಂತೀ ಭಗಧ್ಯಾನರನೊಪ್ಪ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವು.
--------------
ಪ್ರಸಾದಿ ಭೋಗಣ್ಣ
ವ್ಯಾಸನುಸುರ್ದ ಸ್ಕಂದಪುರಾಣದಲ್ಲಿಯ ಶ್ರೀಶೈಲಕಲ್ಪ ನೋಳ್ಪುದಯ್ಯಾ. ಅಲ್ಲಿ ಸಿದ್ಧಸಾಧಕರ ಸನ್ನಿದ್ಥಿಯಿಂದರಿಯಬಹುದಯ್ಯಾ. ಮಾಡಿದನೊಬ್ಬ ಪೂರ್ವದಲ್ಲಿ ಗೋರಕ್ಷ ಮಾಡಿದನೊಬ್ಬ ಮತ್ಸೆ ್ಯೀಂದ್ರನಾಥ, ಮಾಡಿದರೆಮ್ಮ ವಂಶದ ಶ್ರೀಗುರುಶಾಂತದೇವರು. ಇದು ಕಾರಣ, ಯೋಗದ ಭೇದ ಯೋಗಿಗಳಂತರಂಗದಿಂದರಿತಡೆ ಯೋಗಸಿದ್ಧಿ ಸತ್ಯ ಸತ್ಯ, ಶ್ರೀಗುರು ತೋಂಟದಸಿದ್ಧಲಿಂಗೇಶ್ವರ.
--------------
ಸಿದ್ಧವೀರದೇಶಿಕೇಂದ್ರ
ಸ್ಥಲಂಗಳ ಭೇದ ವಿವರ: ವೇಣು ವೀಣೆ ಮೌರಿ ವಾದ್ಯಂಗಳಲ್ಲಿ ವಾಯು ಅಂಗುಲಿಯ ಭೇದದಿಂದ ರಚನೆಗಳ ತೋರುವಂತೆ ಘಟದ ಸ್ಥೂಲ ಸೂಕ್ಷ್ಮಂಗಳಲ್ಲಿ ತ್ರಾಣ ತತ್ರಾಣವಾದಂತೆ ಅದು ಭಾವಜ್ಞಾನ ಷಟ್‍ಸ್ಥಲ ಕ್ರಿಯಾಭೇದದ ವಾಸ. ಇಂತೀ ಉಭಯದೃಷ್ಟ ನಾಶವಹನ್ನಕ್ಕ ಐಕ್ಯಲೇಪನಲ್ಲಿ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ನರಕುಲ ಹಲವಾದಲ್ಲಿ, ಯೋನಿಯ ಉತ್ಪತ್ಯ ಒಂದೇ ಭೇದ. ಮಾತಿನ ರಚನೆ ಎಷ್ಟಾದಡೇನು ? ನಿಹಿತವರಿವುದು ಒಂದು ಭೇದ. ವಸ್ತು ಜಾತಿ ಗೋತ್ರ ವಿಶೇಷವೆಂಬಲ್ಲಿ, ದಿನರಾತ್ರಿಯೆಂಬ ಉಭಯವನಳಿವುದಕ್ಕೆ ತಮ ಬೆಳಗೆರಡೆಂಬವಲ್ಲದಿಲ್ಲ. ಕುಲ ಉಭಯಶಕ್ತಿ ಪುರುಷತ್ವವಲ್ಲದಿಲ್ಲ. ಬೇರೆ ಹಲವು ತೆರನುಂಟೆಂದಡೆ, ಮೀರಿ ಕಾಬ ಶ್ರುತ ದೃಷ್ಟ ಇನ್ನಾವುದು ? ಎಲ್ಲಕ್ಕೂ ನೀರು ನೆಲ ಸೂರ್ಯ ಸೋಮ ಆರೈದು ನೋಡುವ ದೃಷ್ಟಿಯೊಂದೆ ಬೊಂಬೆ. ಬೊಂಬೆ ಹಲವ ನೋಡಿಹೆ, ಬೊಂಬೆ ಹಲವಂದ ಕಾಣ್ಬಂತೆ, ಅದರಂಗವ ತಿಳಿದು ನಿಂದಲ್ಲಿ, ಹಲವು ಕುಲದ ಹೊಲೆಯೆಂದೂ ಇಲ್ಲವೆಂದೆ. ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ, ಅರಿ ನಿಜಾ[ತ್ಮಾ] ರಾಮ ರಾಮನಾ
--------------
ವೀರ ಗೊಲ್ಲಾಳ/ಕಾಟಕೋಟ
ದೊಡ್ಡವೆರಡು ಕಂಬದ ಮಧ್ಯದಲ್ಲಿ ಚಿಕ್ಕವೆರಡು ಕಂಬ. ಇಂತೀ ನಾಲ್ಕರ ಮಧ್ಯದ ಮನೆಗೆ ಅಸ್ಥಿಯ ಗಳು, ನರದ ಕಟ್ಟು, ಮಜ್ಜೆಯ ಸಾರ, ಮಾಂಸದ ಗೋಡೆ, ಚರ್ಮದ ಹೊದಿಕೆ, ಶ್ರೋಣಿತದ ಸಾರದ, ಕುಂಭದಿಂದಿಪ್ಪುದೊಂದು ಚಿತ್ರದ ಮನೆ ನೋಡಯ್ಯಾ. ಆ ಮನೆಗೊಂಬತ್ತು ಬಾಗಿಲು, ಇಡಾ ಪಿಂಗಳವೆಂಬ ಗಾಳಿಯ ಬಾದಳ, ಮೃದು ಕಠಿಣವೆಂಬವೆರಡು ಅಗುಳಿಯ ಭೇದ ನೋಡಾ, ಇತ್ತಲೆಯ ಮೇಲಿಪ್ಪ ಸುಷುಮ್ನಾನಾಳವ ಮುಚ್ಚಿ, ದಿವಾರಾತ್ರಿಯೆಂಬ ಅರುಹು ಮರಹಿನ ಉಭಯವ ಕದಕಿತ್ತು ನೋಡಯ್ಯಾ. ಮನೆ ನಷ್ಟವಾಗಿ ಹೋದಡೆಯೂ ಮನೆಯೊಡೆಯ ಮರಳಿ ಮತ್ತೊಂದು ಮನೆಗೆ ಒಪ್ಪುದು ತಪ್ಪದು ನೋಡಯ್ಯಾ ಇಂತಪ್ಪ ಮನೆಗೆನ್ನ ಮರಳಿ ಬಾರದಂತೆ ಮಾಡಯ್ಯಾ, ಕಾಮಬ್ಥೀಮ ಜೀವಧನದೊಡೆಯ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಒಕ್ಕಲಿಗ ಮುದ್ದಣ್ಣ
ಕುಲ ಜಾತಿ ವರ್ಗದ ಶಿಶುಗಳಿಗೆ ಹಲವು ಭೇದದ ಹಾಲು. ನಲವಿಂದ ತಮ್ಮ ತಮ್ಮ ಮೊಲೆಗಳ ಉಂಡಲ್ಲದೆ ಬೆಳವಣಿಗೆಯಿಲ್ಲ. ಹಾಲು ದೇಹ ಹಲವಾದಡೆ, ಅಳಿವು ಉಳಿವು ಎರಡೇ ಭೇದ. ಏನನರಿತಡೂ ಜೀವನ ನೋವನರಿಯಬೇಕು. ನುಡಿ ನಡೆ ಎರಡಿಲ್ಲದೆ ದೃಢವಾಗಿ ಇರಬೇಕು. ಬಿರುದು ಹಿರಿಯರೆಂದಡೆ ಬಿಡಬೇಕಲ್ಲದೆ, ಕಡಿಯಬಹುದೆ ಅಯ್ಯಾ ? ಮಾತಿನಲ್ಲಿ ಬಲ್ಲವರಾದಡೆ, ನೀತಿಯಲ್ಲಿ ಮರೆದಡೆ ಕೊಡನೊಡೆದ ಏತದ ಕಣೆಯಂತೆ, ಶರೀರದ ಗೂಡಿನ ಗುಮ್ಮಟನೊಡೆಯ ಅಗಮ್ಯೇಶ್ವರಲಿಂಗ.
--------------
ಮನುಮುನಿ ಗುಮ್ಮಟದೇವ
`ನಾ' `ನೀ' ಎಂಬ ಭೇದ ಅಂದೂ ಇಲ್ಲ, ಇಂದೂ ಇಲ್ಲ ಸಾಲೋಕ್ಯನಲ್ಲ ಸಾಮೀಪ್ಯನಲ್ಲ ಶರಣ. ಸಾರೂಪ್ಯನಲ್ಲ ಸಾಯಜ್ಯನಲ್ಲ ಶರಣ. ಕಾಯನಲ್ಲ ಅಕಾಯನಲ್ಲ ಗುಹೇಶ್ವರಲಿಂಗ ತಾನೆಯಾಗಿ
--------------
ಅಲ್ಲಮಪ್ರಭುದೇವರು
ಧೂಳುಪಾವಡವಾದಲ್ಲಿ ಆವ ನೀರನು ಹಾಯಬಹುದು. ಕಂಠಪಾವಡದಲ್ಲಿ ಉರದಿಂದ ಮೀರಿ ಹಾಯಲಾಗದು. ಸರ್ವಾಂಗಪಾವಡದಲ್ಲಿ ಹೊಳೆ ತಟಾಕ ಮಿಕ್ಕಾದ ಬಹುಜಲಂಗಳ ಮೆಟ್ಟಲಾಗದು. ಅದೆಂತೆಂದಡೆ ಆ ಲಿಂಗವೆಲ್ಲವು ವ್ರತಾಚಾರ ಲಿಂಗವಾದ ಕಾರಣ. ತಮ್ಮ ಲಿಂಗದ ಮಜ್ಜನದ ಅಗ್ಗಣಿಯಲ್ಲದೆ ತಮ್ಮಂಗವ ಮುಟ್ಟಲಾಗದು. ಇಂತೀ ಇವು ತಾವು ಕೊಂಡ ವ್ರತದಂಗದ ಭೇದವಲ್ಲದೆ ನಾನೊಂದು ನುಡಿದುದಿಲ್ಲ. ಇದಕ್ಕೆ ನಿಮ್ಮ ಭಾವವೆ ಸಾಕ್ಷಿ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ವ್ರತದಂಗದ ಭೇದ.
--------------
ಅಕ್ಕಮ್ಮ
ಪಿಪೀಲಿಕ ಮಧುರವ ಕಾಂಬಂತೆ, ಮರ್ಕಟ ಲಂಘನವ ಕಾಂಬಂತೆ, ವಿಹಂಗ ಆಕಾಶವನಡರುವಂತೆ, ತ್ರಿವಿಧದ ಭೇದ. ಜ್ಞಾನವನರಿತು, ಕಾಯಬಿಂದು, ಜೀವಬಿಂದು, ಜ್ಞಾನಬಿಂದು, ತ್ರಿವಿಧಬಿಂದುವಿನಲ್ಲಿ ನಿಂದು ಕಂಡು, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗದಲ್ಲಿ, ಸ್ವಯಂಭುವನರಿಯಬೇಕು.
--------------
ಶಿವಲೆಂಕ ಮಂಚಣ್ಣ
ಇನ್ನಷ್ಟು ... -->