ವಾಯುವ ಹಿಡಿದು, ದಂಡವ ಕೊಂಡು, ಸಾವರ ಹಿಡಿದು, ಸಂಕಲೆಯನಿಕ್ಕಿ, ಈ ವಿದ್ಥಿಯಲ್ಲಿ ಸಯಸಗೊಳ್ಳದೆ, ಭಾವವಾಡಿದಂತೆ ಭ್ರಮೆಗೊಳಗಾಗದೆ, ಮತ್ತಿವನೇನನೂ ಎನ್ನದಿರ್ಪುದೆ, ಸರ್ವಜ್ಞಾನದೊಳಗು. ಆ ನಿಜವಸ್ತು, ತಾನು ತಾನೆ, ನಿಃಕಳಂಕ ಮಲ್ಲಿಕಾರ್ಜುನಾ.
ಬ್ರಹ್ಮನ ಡಾಗು ಬೆನ್ನಮೇಲೆ, ವಿಷ್ಣುವಿನ ಡಾಗು ಕೈಯ ಮೇಲೆ. ರುದ್ರನ ಡಾಗು ತಲೆಯ ಮೇಲೆ. ಇಂತೀ ಡಾಗಿನ ಪಶುಗಳಿಗೇಕೆ ಅನಾಗತನ ಸುದ್ದಿ ? ಇದು ನಿಮಗೆ ಸಾ[ದ್ಥಿ]ಸದೆಂದೆ, ನಿಃಕಳಂಕ ಮಲ್ಲಿಕಾರ್ಜುನಾ.
ಹಿಂದೆ ನೀ ಬಂದೆ ನಾನಾ ಭವಂಗಳಲ್ಲಿ, ನಾನಾ ವ್ಯಾಪಾರಕ್ಕೆ ನೀನೊಡೆಯನಾಗಿ. ಮತ್ರ್ಯದ ಸುಖದುಃಖ ನಿನಗೆ ನಿಶ್ಚಿಂತವಾಗಿಪ್ಪುದು. ಹಿಂದೆ ನಿನ್ನಂತೆ ನಾ ಬಂದು ನೊಂದುದಿಲ್ಲ. ಬಂದೆ ನಾ ಬಸವಣ್ಣನ ಕಥನದಿಂದ, ನಾ ತಂದ ಪದಾರ್ಥವೆಲ್ಲವ ನಿಮಗಿತ್ತೆ. ನಾನಿನ್ನಂಜುವೆ ಗುರುಲಿಂಗಜಂಗಮದಲ್ಲಿ ಪ್ರತ್ಯುತ್ತರಕ್ಕೆ. ಎನಗೆ ಮತ್ರ್ಯದ ಮಣಿಹ, ಕೃತ್ಯವಿನ್ನೆಷ್ಟು ದಿನ ಹೇಳಾ. ಅಂದು ನೀವು ಕೊಟ್ಟ ಒಪ್ಪದ ಚೀಟನೊಪ್ಪಿಸಿದೆ. ಮತ್ತೆ ಇನ್ನು ಸಂದೇಹವೆ, ಹೇಳಾ ನಿಃಕಳಂಕ ಮಲ್ಲಿಕಾರ್ಜುನಾ.