ಅಥವಾ

ಒಟ್ಟು 5 ಕಡೆಗಳಲ್ಲಿ , 2 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಪ್ರೇಮಿಯಾದಡೆ ಚತುರ್ವಿಧಭಕ್ತಿಯಿಂದ ತನುವ ದಂಡಿಸಲಾಗದು. ಲಿಂಗಪ್ರೇಮಿಗಳಾದಡೆ ಅಷ್ಟವಿಧಾರ್ಚನೆ ಷೋಡಶೋಪಚಾರಗಳಿಂದ ಮನವ ಬಳಲಿಸಲಾಗದು. ಜಂಗಮಪ್ರೇಮಿಗಳಾದಡೆ ಅನ್ನ ವಸ್ತ್ರ ಹದಿನೆಂಟು ಜೀನಸಿನ ಧಾನ್ಯ ಮೊದಲಾದ ಷೋಡಶಭಕ್ತಿಯಿಂದ ಆತ್ಮನ ಬಳಲಿಸಲಾಗದು. ಇಂತಪ್ಪ ಭಕ್ತರಿಗೆ ಭವ ಹಿಂಗದು ; ಮುಕ್ತಿಯು ತೋರದು. ಅದೇನು ಕಾರಣವೆಂದಡೆ : ತಮ್ಮ ನಿಜವ ಮರೆದು ಕರ್ಮಕಾಂಡಿಗಳಾದ ಕಾರಣ. ಇಂತಪ್ಪವರ ಬ್ಥಿನ್ನಕ್ರಿಯಾಚಾರವನು ಸುಜ್ಞಾನೋದಯವಾದ ಜ್ಞಾನಕಲಾತ್ಮನು ತನ್ನ ಪರಮಜ್ಞಾನದಿಂ ನಷ್ಟವ ಮಾಡಿ, ಶ್ರೀಗುರುಕಾರುಣ್ಯವ ಪಡೆದು, ಲಿಂಗಾಂಗಸಂಬಂದ್ಥಿಯಾಗಿ, ಸರ್ವಾಂಗಲಿಂಗಮಯ ತಾನೆಂದು ತಿಳಿದು, ವಿಚಾರಿಸಿಕೊಂಡು ಪರಶಿವಪರಮೂರ್ತಿಗಳಾದ ಗುರುಲಿಂಗಜಂಗಮವನ್ನು ತನ್ನ ತನುಮನದಲ್ಲಿ ಸ್ವಾಯತವಮಾಡಿದ ಶಿವಶರಣಂಗೆ ಭವ ಹಿಂಗಿ, ಮುಕ್ತಿ ಎಂಬುದು ಕರತಳಾಮಳಕವಾಗಿ ತೋರುವದು ಕಾಣೆಂದ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅಯ್ಯ, ನಿನ್ನ ಸ್ವಾತ್ಮಜ್ಞಾನದಿಂದ ಶ್ರುತಿಗುರುಸ್ವಾನುಭಾವವಿಡಿದು, ನಿನ್ನ ತನು-ಮನ-ಕರಣ-ಇಂದ್ರಿಯಂಗಳ ಪರಿಪಕ್ವವ ಮಾಡಿ, ಆ ತನು-ಮನ-ಕರಣ-ಇಂದ್ರಿಯಂಗಳ ಆಶ್ರೈಸಿದ ಅರ್ಥಪ್ರಾಣಾಬ್ಥಿಮಾನಂಗಳ ಶ್ರೀಗುರುಲಿಂಗಜಂಗಮ ಭಕ್ತಮಾಹೇಶ್ವರ ಶರಣಗಣಂಗಳಿಗರ್ಪಿತವಮಾಡಿ, ನಿರ್ವಂಚಕಬುದ್ಧಿ ಮುಂದುಗೊಂಡು, ಅಷ್ಟವಿಧಾರ್ಚನೆ ಷೋಡಶೋಪಚಾರಗಳಿಂದ ಇಷ್ಟಲಿಂಗವ ತೃಪ್ತಿಮಾಡಿ, ಮಂತ್ರ ಧ್ಯಾನ ಜಪಸ್ತೋತ್ರಂಗಳಿಂದ ಪ್ರಾಣಲಿಂಗವ ತೃಪ್ತಿಮಾಡಿ, ಮನೋರ್ಲಯ ನಿರಂಜನ ಪೂಜಾಕ್ರಿಯೆಗಳಿಂದ ಭಾವಲಿಂಗವ ತೃಪ್ತಿಮಾಡಿ, ಗುರುಲಿಂಗಜಂಗಮದ ಪಾದೋದಕ ಪ್ರಸಾದದಿಂದ ಮತ್ತಾ ಗುರುಲಿಂಗಜಂಗಮದ ಭಕ್ತ ಮಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ ಮೊದಲಾದ ಮಹಾಪ್ರಮಥಗಣಂಗಳ ತೃಪ್ತಿಮಾಡಿ, ತನಗೊಂದಾಶ್ರಯಂಗಳಿಲ್ಲದೆ, ಚಿದ್ಘನಲಿಂಗದಲ್ಲಿ ಅವಿರಾಳನಂದದಿಂದ ಕೂಟಸ್ಥನಾಗಿರುವಂದೆ ನಿಸ್ಸಂಸಾರದೀಕ್ಷೆ. ಇಂತುಂಟೆಂದು ಶ್ರೀಗುರು ನಿಷ್ಕಳಂಕ ನಿಷ್ಪ್ರಪಂಚ ನಿರಾಲಂಬ ನಿಷ್ಕಾಮ ಚೆನ್ನಬಸವರಾಜೇಂದ್ರನು ನಿರ್ಲಜ್ಜಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಇಂತಪ್ಪ ನಿರ್ಣಯವನು ಸ್ವಾನುಭಾವಜ್ಞಾನದಿಂ ತಿಳಿದು ಶಿವಜ್ಞಾನಿಗಳಾದ ಶಿವಶರಣರಿಗೆ, ಅಚ್ಚ ನಿಚ್ಚ ಸಮಯ ಏಕಪ್ರಸಾದಿಗಳೆಂದೆನ್ನಬಹುದು. ಭಕ್ತಾದಿ ಐಕ್ಯಾಂತಮಾದ ಷಟ್‍ಸ್ಥಲಬ್ರಹ್ಮ ಎಂದೆನ್ನಬಹುದು. ಅಂಗಸ್ಥಲ 44, ಲಿಂಗಸ್ಥಲ 57 ಇಂತೀ ಪಿಂಡಾದಿ ಜ್ಞಾನಶೂನ್ಯಾಂತಮಾದ ನೂರೊಂದುಸ್ಥಲ ಮೊದಲಾದ ಸರ್ವಾಚಾರಸಂಪನ್ನನೆಂದೆನ್ನಬಹುದು. ಇಂತೀ ಭೇದವನರಿಯದೆ ತಮ್ಮ ತಾವಾರೆಂಬುದು ತಿಳಿಯದಿರ್ದಂಥ ಮತಿಭ್ರಷ್ಟ ಹೊಲೆಮಾದಿಗರಿಗೆ ಅದೆಲ್ಲಿಯದೊ ಗುರುಲಿಂಗಜಂಗಮದ ತೀಥಪ್ರಸಾದಸಂಬಂಧ ? ಅದೆಲ್ಲಿಯದೋ ಅಚ್ಚ ನಿಚ್ಚ ಸಮಯ ಏಕಪ್ರಸಾದದಸಂಬಂಧ ? ಇಂತಪ್ಪ ಗುರುಲಿಂಗಜಂಗಮದ ತೀರ್ಥಪ್ರಸಾದಕ್ಕೆ ಅಂದೇ ಹೊರಗಾಗಿ ಮತ್ತೆ ಮರಳಿ ಇಂದು ನಾವು ಗುರುಲಿಂಗಜಂಗಮದ ತೀರ್ಥಪ್ರಸಾದ ಪ್ರೇಮಿಗಳೆಂದು, ಆ ತ್ರಿಮೂರ್ತಿಗಳ ತಮ್ಮಂಗದಿಂ ಭಿನ್ನವಿಟ್ಟು, ತ್ರಿಕಾಲಂಗಳಲ್ಲಿ ಸ್ನಾನವ ಮಾಡಿ, ಜಪ, ತಪ, ಮಂತ್ರ, ಸ್ತೋತ್ರಗಳಿಂದ ಪಾಡಿ, ಪತ್ರಿ, ಪುಷ್ಪ ಮೊದಲಾದುದರಿಂ ಅಷ್ಟವಿಧಾರ್ಚನೆ ಷೋಡಶೋಪಚಾರಗಳಿಂದ ಅರ್ಚಿಸಿ, ನಿತ್ಯನೇಮದಿಂ ಶೀಲ ವ್ರತಾಚಾರಂಗಳಿಂದ ಸಕಲ ಕ್ರಿಯಗಳನಾಚರಿಸಿ ಭಿನ್ನಫಲಪದವ ಪಡದು, ಕಡೆಯಲ್ಲಿ ಎಂ¨ತ್ತುನಾಲ್ಕುಲಕ್ಷ ಯೋನಿದ್ವಾರದಲ್ಲಿ ರಾಟಣದಂತೆ ತಿರುಗುವ ಭವಭಾರಿಗಳಾದ ಜೀವಾತ್ಮರಿಗೆ ಪ್ರಸಾದಿಗಳೆಂದಡೆ ಮೆಚ್ಚರಯ್ಯಾ ನಿಮ್ಮ ಶರಣರು ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಶ್ರೀಗುರು ಬಂದು ತ್ರಿವಿಧದೀಕ್ಷೆಯಿಂದ ಉಪದೇಶವ ಮಾಡುವ ಕಾಲದಲ್ಲಿ ಹಸ್ತದಲ್ಲಿ ಶಸ್ತ್ರವ ಹಿಡಿದು ಕಡಿದುಕೊಂಡು ನುಂಗಿದಾತನೇ ಶಿಷ್ಯನೆಂಬೆ. ಲಿಂಗವು ಬಂದು ಹಸ್ತದಲ್ಲಿ ಅಷ್ಟವಿಧಾರ್ಚನೆ ಷೋಡಶೋಪಚಾರಗಳಿಂದ ಪೂಜೆಗೊಂಬ ವೇಳೆಯಲ್ಲಿ ವಜ್ರಾಯುಧದಿಂದ ಬಡಿದು ಒಡೆದು ಚೂರ್ಣವ ಮಾಡಿ ಉದಕದೊಳಗೆ ಹಾಕಿ ಕುಡಿಯುವವನೇ ಶರಣನೆಂಬೆ. ಜಂಗಮ ಬಂದು ಇದುರಿನಲ್ಲಿ ಕುಳಿತು ಅನುಭಾವಬೋಧೆಯನು ಮಾಡುವ ಸಮಯದಲ್ಲಿ ಹಸ್ತದಲ್ಲಿ ಖಡ್ಗವ ಪಿಡಿದು ಎಡಕ ಬಂದವನ ಕುಟ್ಟಿ, ಬಲಕ ಬಂದವನ ಹೆಟ್ಟಿ, ಎದುರಿನಲ್ಲಿ ಬಂದವನ ಮೆಟ್ಟಿ, ಆ ಜಂಗಮವನು ಕಡಿದು ಅವನ ಕಂಡವ ಚಿನಿಪಾಲವ ಮಾಡಿ, ನೀರಿಲ್ಲದೆ ಅಟ್ಟು, ಕಿಚ್ಚಿಲ್ಲದೆ ಸುಟ್ಟು, ಹಸ್ತವಿಲ್ಲದೆ ಪಿಡಿದು, ಬಾಯಿಲ್ಲದೆ ಸವಿದು, ಜಿಹ್ವೆಯಿಲ್ಲದೆ ರುಚಿಸಿ, ಸಂತೋಷವಿಲ್ಲದೆ ಪರಿಣಾಮಿಸಬಲ್ಲರೆ ಭಕ್ತನೆಂಬೆ. ಇಂತೀ ತ್ರಿವಿಧದ ಅನುಭಾವವ ಹೇಳಬಲ್ಲರೆ ಭಕ್ತ ಮಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯನೆಂಬೆ. ಲಿಂಗಾಂಗಿ ಎಂಬೆ, ಶಿವಜ್ಞಾನಸಂಪನ್ನರೆಂಬೆ, ಪರಶಿವಯೋಗಿಗಳೆಂಬೆ, ಚಿತ್ಪ್ರಕಾಶಜ್ಞಾನಿಗಳೆಂಬೆ, ಈ ವಚನದ ಭೇದವ ತಿಳಿಯದಿದ್ದರೆ ಸತ್ತಹಾಗೆ ಸುಮ್ಮನೆ ಇರು ಎಂದ ಕಾಣಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಹಂದಿ, ಮೊಲ, ಪಶುವ ತಿಂದವನೇ ಭಕ್ತ. ಆನೆ, ಕುದುರೆ, ನಾಯಿಯ ತಿಂದವನೇ ಮಹೇಶ್ವರ. ಕೋಣ, ಎಮ್ಮೆ, ಹುಲಿಯ ತಿಂದವನೇ ಪ್ರಸಾದಿ. ಕೋಡಗ, ಸರ್ಪ, ಉಡವ ತಿಂದವನೇ ಪ್ರಾಣಲಿಂಗಿ. ಬೆಕ್ಕನು, ಹರಿಣವನು, ಕರುಗಳನು ತಿಂದವನೇ ಶರಣನು. ಹದ್ದು, ಕಾಗೆ, ಪಿಪೀಲಿಕನ ತಿಂದವನೇ ಐಕ್ಯ. ಇಂತೀ ಎಲ್ಲವ ಕೊಂದು ತಿಂದವನ ಕೊಂದು ಯಾರೂ ಇಲ್ಲದ ದೇಶಕ್ಕೆ ಒಯ್ದು ಅಗ್ನಿ ಇಲ್ಲದೇ ಸುಟ್ಟು, ನೀರಿಲ್ಲದೆ ಅಟ್ಟು, ಕಾಲಿಲ್ಲದೆ ನಡೆದು, ಕಣ್ಣಿಲ್ಲದೆ ನೋಡಿ, ಕೈಯಿಲ್ಲದೆ ಪಿಡಿದು, ಪರಿಮಾಣವಿಲ್ಲದ ಹರಿವಾಣದಲ್ಲಿ ಗಡಣಿಸಿಕೊಂಡು, ಹಿಂದು ಮುಂದಿನ ಎಡಬಲದ ಸಂಶಯಂ ಬಿಟ್ಟು ನಿಶ್ಚಿಂತನಾಗಿ, ಸ್ವಸ್ಥ ಪದ್ಮಾಸನದಲ್ಲಿ ಮುಹೂರ್ತವ ಮಾಡಿ, ಏಕಾಗ್ರಚಿತ್ತಿನಿಂದ ಹಲ್ಲು ಇಲ್ಲದೆ ಮೆಲ್ಲಬಲ್ಲರೆ ಆತನೇ ಅಚ್ಚಪ್ರಸಾದಿ, ನಿಚ್ಚಪ್ರಸಾದಿ, ಸಮಯಪ್ರಸಾದಿ, ಏಕಪ್ರಸಾದಿ, ಗುರು ಲಿಂಗ ಜಂಗಮ ಪಾದೋದಕ ಪ್ರಸಾದಿ ಎಂಬೆನಯ್ಯಾ. ಇಂತೀ ಭೇದವನು ತಿಳಿಯದೆ ಭಕ್ತರ ಮನೆಯಲ್ಲಿ ಉನ್ನತಾಸನದ ಗದ್ದುಗೆಯ ಮೇಲೆ ಕುಳಿತು, ಅಷ್ಟವಿಧಾರ್ಚನೆ ಷೋಡಶೋಪಚಾರಗಳಿಂದ ಪೂಜೆಗೊಂಬ ಗುರುಮೂರ್ತಿಗಳು, ಚರಮೂರ್ತಿಗಳು ಇಂತೀ ಉಭಯರು ಸತ್ತ ಶವದಿಂದತ್ತತ್ತ ನೋಡಾ. ಇಂತೀ ವಿಚಾರವನು ತಿಳಿಯದೆ ನಾವು ಪರಮವಿರಕ್ತರು, ಪಟ್ಟದಯ್ಯಗಳು, ಚರಮೂರ್ತಿಗಳು, ಗುರುಸ್ಥಲದ ಅಯ್ಯತನದ ಮೂರ್ತಿಗಳೆಂದು ಪಾದಪೂಜೆಯ ಮಾಡಿಸಿಕೊಂಡು ಪಾದವ ಪಾಲಿಸುವರೆಂದು ಭಕ್ತರಿಗೆ ತೀರ್ಥವೆಂದು ಕೊಡುವಂಥವರು ಬೀದಿಬಾಜಾರದಲ್ಲಿ ಕುಳಿತು ಸೆರೆಯ ಮಾರುವ ಹೆಂಡಗಾರರು ಇವರಿಬ್ಬರು ಸರಿ ಎಂಬೆ. ಇಂತೀ ನಿರ್ಣಯವನು ತಿಳಿಯದೆ ಭಕ್ತರನಡ್ಡಗೆಡಹಿಸಿಕೊಂಡು. ಪ್ರಸಾದವೆಂದು ತಮ್ಮ ಎಡೆಯೊಳಗಿನ ಕೂಳ ತೆಗೆದು ಕೈಯೆತ್ತಿ ನೀಡುವರು. ಪೇಟೆ ಬಜಾರ, ಬೀದಿಯಂಗಡಿ ಕಟ್ಟೆಯಲ್ಲಿ ಕುಳಿತು ಹೋತು ಕುರಿಗಳನು ಕೊಂದು ಅದರ ಕಂಡವನು ಕಡಿದು ತಕ್ಕಡಿಯಲ್ಲಿ ಎತ್ತಿ ತೂಗಿ ಮಾರುವ ಕಟುಕರು ಇವರಿಬ್ಬರು ಸರಿ ಎಂಬೆ. ಇಂತೀ ಭೇದವ ತಿಳಿಯದೆ ಗುರುಲಿಂಗಜಂಗಮವೆಂಬ ತ್ರಿಮೂರ್ತಿಗಳು ಪರಶಿವಸ್ವರೂಪರೆಂದು ಭಾವಿಸಿ ಪಾದೋದಕ ಪ್ರಸಾದವ ಕೊಂಬ ಭಕ್ತನು ಕೊಡುವಂತ ಗುರುಹಿರಿಯರು ಇವರ ಪಾದೋದಕ ಪ್ರಸಾದವೆಂತಾಯಿತಯ್ಯಾ ಎಂದಡೆ. ಹಳೆನಾಯಿ ಮುದಿಬೆಕ್ಕು ಸತ್ತ ಮೂರುದಿನದ ಮೇಲೆ ಆರಿಸಿಕೊಂಡು ಬಂದು ಅದರ ಜೀರ್ಣಮಾಂಸವನು ತಿಂದು ಬೆಕ್ಕು, ನಾಯಿ, ಹಂದಿಯ ಉಚ್ಚಿಯ ಕುಡಿದಂತಾಯಿತಯ್ಯಾ. ಇಂತಿದರನುಭಾವವನು ಸ್ವಾನುಭಾವಗುರುಮೂರ್ತಿಗಳಿಂದ ತನ್ನ ಸ್ವಯಾತ್ಮಜ್ಞಾನದಿಂದ ವಿಚಾರಿಸಿ ತಿಳಿದು ನೋಡಿ, ಇಂತಿವರೆಲ್ಲರೂ ಕೂಳಿಗೆ ಬಂದ ಬೆಕ್ಕು ನಾಯಿಗಳ ಹಾಗೆ ಅವರ ಒಡಲಿಗೆ ಕೂಳನು ಹಾಕಿ, ಬೆಕ್ಕು ನಾಯಿಗಳ ಅಟ್ಟಿದ ಹಾಗೆ ಅವರನು ಅಟ್ಟಬೇಕು ನೋಡಾ. ಇಂತಿವರಲ್ಲಿ ಪಾದೋದಕ ಪ್ರಸಾದವ ಕೊಳಲಾಗದು. ಈ ಹೊಲೆಯ ಮಾದಿಗರ ಮೇಳಾಪವನು ಬಿಟ್ಟು ಸತ್ತು ಚಿತ್ತಾನಂದ ನಿತ್ಯಪರಿಪೂರ್ಣವೆಂಬ ಗುರುಲಿಂಗಜಂಗಮದ ಪಾದೋದಕ ಪ್ರಸಾದವ ಕೊಳಬಲ್ಲರೆ ಆ ಭಕ್ತರಿಗೆ ಮೋಕ್ಷವೆಂಬುದು ಕರತಳಾಮಳಕ ನೋಡೆಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
-->