ಅಥವಾ

ಒಟ್ಟು 136 ಕಡೆಗಳಲ್ಲಿ , 48 ವಚನಕಾರರು , 120 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಳ್ಳಿಯ ಹೊಲೆಯನ ಕೈಯಲ್ಲಿ ಡಿಳ್ಳಿಯದ್ಥಿಪತಿ ಸತ್ತ. ಆಳುವ ಗಂಡ ಹೆಂಡತಿಗೆ ಕೀಳಾಳಾದ. ಒಡೆದು ಬಂಟನಿಗೆ ಬಡಿಹೋರಿಯಾದ. ಹೊಡೆಯ ಹುಲ್ಲು ಕರವಾಳ ಹಿಡಿಯ ಕೊಯ್ಯಿತ್ತು. ಆತುರವೈರಿ ಮಾರೇಶ್ವರಾ.
--------------
ನಗೆಯ ಮಾರಿತಂದೆ
ಪಾದವಿಲ್ಲದ ಗುರುವಿಂಗೆ ತಲೆಯಿಲ್ಲದ ಶಿಷ್ಯನು. ಅನಾಚಾರಿ ಗುರುವಿಂಗೆ ವ್ರತಗೇಡಿ ಶಿಷ್ಯನು. ಈ ಗುರುಶಿಷ್ಯರಿಬ್ಬರೂ ಸತ್ತ ಸಾವ, ನಿಮ್ಮಲ್ಲಿ ಅರಸುವೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ತಾ ವ್ರತಿಯಾಗಿದ್ದಲ್ಲಿ ತನ್ನ ಸೀಮೆ ಒಳಗಾಗಿ, ಕಟಕ ಪಾರದ್ವಾರ ಹುಸಿ ಕೊಲೆ ಕಳವು ಅನ್ಯಾಹಾರ ಮುಂತಾದ ನಿಂದಕ ದುರ್ಜನ ಭವಿಸಂಗ ಉಳ್ಳವರ ತಂದೆತಾಯಿಯೆಂದು ಹೆಂಡಿರುಮಕ್ಕಳೆಂದು ಬಂಧುಬಳಗವೆಂದು ಅವರನು ಅಂಗಳದಲ್ಲಿ ಕೂಡಿಕೊಂಡಡೆ, ಅವರ ತಂದು ಕೊಳನಿಕ್ಕಿದಡೆ, ತಿಂಗಳು ಸತ್ತ ನಾಯಮಾಂಸವ ತಂದು ತಿಂದ ದೋಷ ತಪ್ಪದು. ಇದಕ್ಕೆ ಹಿಂದೆ ನೆನೆಯಲಿಲ್ಲ, ಮುಂದೆ ನೋಡಲಿಲ್ಲ. ಈ ತಪ್ಪು ಹೊತ್ತಲ್ಲಿಯೆ ಅಂದಿಗೆ ನೂರು ತುಂಬಿತ್ತೆಂದು ಅಂಗವ ಬಿಡಬೇಕು. ಅಂಗವ ಬಿಡದ ಭಂಡರ ಕಂಡಡೆ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗನೊಪ್ಪ.
--------------
ಅಕ್ಕಮ್ಮ
ಆಳುದ್ದಿಯದೊಂದು ಬಾವಿ ಆಕಾಶದ ಮೇಲೆ ಹುಟ್ಟಿತ್ತು ನೋಡಾ ! ಆ ಬಾವಿಯ ನೀರನೊಂದು ಮೃಗ ಬಂದು ಕುಡಿಯಿತ್ತು. ಕುಡಿಯ ಬಂದ ಮೃಗವು ಆ ನೀರೊಳಗೆ ಮುಳಿಗಿದಡೆ ಉರಿಯ ಬಾಣದಲೆಚ್ಚು ತೆಗೆದೆ ನೋಡಾ ! ಒಂದೆ ಬಾಣದಲ್ಲಿ ಸತ್ತ ಮೃಗವು, ಮುಂದಣ ಹೆಜ್ಜೆಯನಿಕ್ಕಿತ್ತ ಕಂಡೆ ! ಅಂಗೈಯೊಳಗೊಂದು ಕಂಗಳು ಮೂಡಿ, ಸಂಗದ ಸುಖವು ದಿಟವಾಯಿತ್ತು ! ಲಿಂಗಪ್ರಾಣವೆಂಬುದರ ನಿರ್ಣಯವನು ಇಂದು ಕಂಡೆನು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಧರೆಯಗಲದ ಹುಲ್ಲೆ ಹರಿದು ಮೇಯಿತ್ತ ಕಂಡೆ. ಬಲೆಯ ಬೀಸುವ ಗಂಡರಾರೂ ಇಲ್ಲ, ಹರಿದು ಹಿಡಿದಹೆನೆಂದಡೆ ತಲೆ ಕಾಣಬರುತ್ತಲಿದೆ. ಶಿರವ ಹಿಡಿದೆಹೆನೆಂಬವರಿನ್ನಾರೂ ಇಲ್ಲ. ಹರಿದಾಡುವ ಹುಲ್ಲೆಯ ಕಂಡು ಹಲವು ಬೇಳಾರ (ಬೆಳ್ಳಾರ?)ವ ಬಿಟ್ಟು, ಬೇಟೆಕಾರ ಬಲೆಯ ಬೀಸಿದಡೆ ಹುಲ್ಲೆಯಂಜಿ ಹೋಯಿತ್ತು. ಮರುಳುದಲೆಯಲ್ಲಿ ಹುಲ್ಲೆಯನೆಸೆದಯಬೇಕೆಂದು ಸರಳ ಬಿಟ್ಟು ಬಾಣವನೊಂದು ಕೈಯಲ್ಲಿ ಹಿಡಿದು (ಹಿಡಿವಡೆ?) ಹಳ್ಳಕೊಳ್ಳವ ದಾಂಟಿ ಗಟ್ಟಬೆಟ್ಟವ ಕಳೆದು ಅತ್ತ ಬಯಲ ಮರನ ತಾ ಮೊರೆಗೊಂಡಿತ್ತು. ಹತ್ತೆ ಸಾರಿದ ಮೃಗವ ತಾನೆಚ್ಚಡೆ ನಾರಿ ಹರಿದು ಬಿಲ್ಲು ಮುರಿದು ಹುಲ್ಲೆ ಸತ್ತಿತ್ತು. ಅದ ಕಿಚ್ಚಿಲ್ಲದ ನಾಡಿಗೊಯ್ದು ಸುಟ್ಟು ಬಾಣಸವ ಮಾಡಲು ಸತ್ತ ಹುಲ್ಲೆ ಕರಗಿ ಶಬ (ಸಬ?) ಉಳಿಯಿತ್ತು. ಗುಹೇಶ್ವರಾ ನಿಮ್ಮ ಶರಣ ಕಟ್ಟಿದಿರ ಬಾಣಸದ ಮನೆಗೆ ಬಂದನು.
--------------
ಅಲ್ಲಮಪ್ರಭುದೇವರು
ಮೂಗಿನಲ್ಲಿ ಕಂಡು, ಮೂರ್ತಿಯ ಕಂಗಳಲ್ಲಿ ಮಾಡಿಸಿ, ಕಿವಿಯಲ್ಲಿ ಶೋಭನ, ತಲೆಯಲ್ಲಿ ಕೈಗೂಡಿ, ಕಣ್ಣ ಕಾಡಿನ ತಲೆ ಹೊಲದಲ್ಲಿ ಸತ್ತದೇವರ ಕಂಡು, ಹುಟ್ಟಿದ ಗಿಡುವಿನ ಪತ್ರೆಯ ಕೈ ಮುಟ್ಟದೆ ಕೊಯ್ದು, ಬತ್ತಿದ ಕೆರೆಯ ಜಲವ ತುಂಬಿಕೊಂಡು, ಬಂದು ಮುಟ್ಟಿ ಪೂಜಿಸಹೋದಡೆ ಸತ್ತ ದೇವರೆದ್ದು ಪೂಜಾರಿಯ ನುಂಗಿದರು ನೋಡಾ. ತಲೆಯಲ್ಲಿ ನಡೆದು, ತಲೆಗೆಟ್ಟು ನಿರಾಳವಾದ ನಿಜಗುರು ಭೋಗೇಶ್ವರಾ, ನಿಮ್ಮ ಶರಣರಿಗಲ್ಲದೆ ಸತ್ತದೇವರನು ಸಾಯದವರು ಪೂಜಿಸಿ ನಿತ್ಯವ ಹಡೆದೆಹೆನೆಂಬ ಮಾತೆಲ್ಲಿಯದೊ ?
--------------
ಭೋಗಣ್ಣ
ಮಹಾರಾಣುವೆಯ ಬಿಟ್ಟು ಬಂದು, ಮತ್ತೆ ಒಡೆಯರು ಭಕ್ತರಲ್ಲಿ ರಾಣಿವಾಸವೆಂದು ಕಟ್ಟು ಮೆಟ್ಟುಂಟೆ ? ಖಂಡಿತ ಕಾಯವನಂಗೀಕರಿಸಿದ ಭಕ್ತಂಗೆ, ಮತ್ತೆ ಹೆಂಡತಿ ಮಕ್ಕಳು ಬಂಧುಗಳೆಂದು ಜಂಗಮಕ್ಕೆ ತಂದ ದ್ರವ್ಯವನ್ಯರಿಗಿಕ್ಕಿ, ತಾನುಂಡನಾದಡೆ, ತಿಂಗಳು ಸತ್ತ ಹುಳಿತನಾಯ ಕಾಗೆ ತಿಂದು, ಆ ಕಾಗೆಯ ಕೊಂದು ತಿಂದ ಭಂಡಂಗೆ ಕಡೆ. ನಿಃಕಳಂಕ ಮಲ್ಲಿಕಾರ್ಜುನಲಿಂಗವೆ, ನೀವೆ ಬಲ್ಲಿರಿ.
--------------
ಮೋಳಿಗೆ ಮಾರಯ್ಯ
ಆಗರದಲ್ಲಿ ಅಡಕೆ ಸಣ್ಣಾದಾಗ ತೋಟದ ಎಲೆ ಉದುರಿತ್ತು. ಉದುರುವುದಕ್ಕೆ ಮೊದಲೆ ಸುಣ್ಣವ ಸುಡುವವ ಸತ್ತ. ಇವರ ಮೂವರ ಹಂಗಿಗತನ ಬಿಟ್ಟಿತ್ತು, ಬಾಯ ಹಂಬಲಿಲ್ಲದೆ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗವು ಮೂರರ ಹಂಗ ಬಿಟ್ಟ ಕಾರಣ.
--------------
ಸಗರದ ಬೊಮ್ಮಣ್ಣ
ಸಾಯದ ಪಶುವಿಂಗೆ ಒಂದು ಗೂಟ, ಸಾಯುವ ಪಶುವಿಂಗೆ ಮೂರು ಗೂಟ, ಸತ್ತ ಪಶುವಿಂಗೆ ಆರು ಗೂಟ. ಸತ್ತ ಕರವ ಹೊತ್ತವರಿಗೆ ಅನೇಕ ಗೂಟ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಮಾಡುವ ಮಾಟದವರೆಲ್ಲರೂ ಆರೈಕೆಗೊಂಬವರಿಲ್ಲದಿರೆ, ಕೋಡಗ ಸತ್ತ ಜೋಗಿಯಂತಾದರು. ಆಗಮ ಹೇಳುವ ಅಣ್ಣಗಳೆಲ್ಲರೂ ಕೊಡುವರಿಲ್ಲದಿರೆ, ಹಾವ ಹಿಡಿದ ಕೋಡಗದಂತಾದರು. ನಾನಿನ್ನಾರ ಕೇಳುವೆ, ಇನ್ನಾರಿಗೆ ಹೇಳುವೆ. ನಾನಂಜುವೆ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಾ.
--------------
ಸಗರದ ಬೊಮ್ಮಣ್ಣ
ಅಂಗದ ಮೇಲೆ ಶಿವಲಿಂಗ ನೆಲಸುವಂಗೆ ಮೂರುಸ್ಥಲವಾಗಬೇಕು. ಅವಾವವಯ್ಯಾಯೆಂದಡೆ: ಗುರುಲಿಂಗಜಂಗಮದಲ್ಲಿ ಭಕ್ತಿ. ಅರಿವ ಸಾದ್ಥಿಸುವಲ್ಲಿ ಜ್ಞಾನ. ಕರಣಾದಿಗಳ ಭಂಗ ವೈರಾಗ್ಯ. ಇನಿತಿಲ್ಲದೆ ಲಿಂಗವ ಪೂಜಿಸಿಹೆನೆಂಬ, ಲಿಂಗವ ಧರಿಸಿಹೆನೆಂಬ ಲಜ್ಜೆಭಂಡರ ಕಂಡು, ನಾ ನಾಚಿದೆನಯ್ಯಾ. ಇದು ಕಾರಣ ಗದ್ದುಗೆಗೆಟ್ಟು ಎದ್ದಾತನು ಲಿಂಗವಲ್ಲ ಕಾಣಾ. ಲಿಂಗ ಸತ್ತ, ನಾ ಕೆಟ್ಟೆ, ರಂಡೆಗೂಳೆನಿಸಲಾರೆ. ಎನ್ನ ಹತ್ಯವ ಮಾಡಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಆರು ನೆಲೆ ಮಂಟಪದ ಕೋಣೆಯಲ್ಲಿ ಆರು ಜ್ಯೋತಿಯ ಮುಟ್ಟಿಸಿ ಆ ಜ್ಯೋತಿಯ ಬೆಳಗಿನಲ್ಲಿ ಆರು ಲಿಂಗವ ನಿರ್ಮಿಸಿ ಆರು ಲಿಂಗದ ಪ್ರತುಮೆಯಲ್ಲಿ ಆರು ಹಂತದ ಸೋಪಾನದಲ್ಲಿ ಮಹಾ ನಿರ್ಮಳವೆಂಬ ದುರ್ಗಮಂ ನಿರ್ಮಿಸಿ ಆ ದುರ್ಗದಲ್ಲಿ ಅರಸಂಗೆ ಕಾಲಿಲ್ಲದಾಕೆಯ ಮದುವೆಯ ಮಾಡಿ ತೂತಿಲ್ಲದ ಭೋಗಕ್ಕೆ ಕೂಡಿ ಬಿಂದುವಿಲ್ಲದೆ ಮಕ್ಕಳಾದ ಪರಿಯ ನೋಡಾ. ತೊಟ್ಟಿಲಿಲ್ಲದೆ ಹಾಸಿ ಮಲಗಿಸಿ ನಿದ್ರೆಗೆಯ್ಸಿದ ಶರಣನಾಚರಣೆಯನೆಂತೆಂಬೆನು. ಇದ ಕಂಡು ನಡೆಯಲರಿಯದೆ, ತಮ್ಮ ಮನ ಬಂದಂತೆ ನಡೆವರು. ಶಿವಯೋಗಕ್ಕೆ ದೂರವಾದರು ನೋಡಾ. ಹೊನ್ನ ಕಟ್ಟಿ ವಿರಕ್ತನು ಬ್ಥಿಕ್ಷೆಯೆನಲಾಗದು. ಭಕ್ತನ ಗೃಹವೆಂದು ಜಂಗಮವು ಹೋದಲ್ಲಿ ಆ ಭಕ್ತನು ಎದ್ದು ನಮಸ್ಕರಿಸಿ ತನ್ನಲ್ಲಿರ್ದ ಪದಾರ್ಥವಂ ತಾನು ಸಹವಾಗಿ ಶಿವಾರ್ಪಣವ ಮಾಡ[ಬ]ಹುದಲ್ಲದೆ. ಇದಲ್ಲದೆ, ಜಂಗಮವ ಬೇರೆ ಕುಳ್ಳಿರಿಸಿ ಉಂಡನಾದರೆ ಅವನಿಗೆ ದೀಕ್ಷೆಯ ಕೊಟ್ಟ ಗುರುವಿಗೆ ತನ್ನ ಮಾರ್ಗವ ಬಿಟ್ಟು ಶಿವಭಕ್ತನಾದರೆ ಮೋಕ್ಷವಿಲ್ಲವಾಗಿ. ಕೋಳಿ ಒಂದು ಕುಟುಕ ಕಂಡರೆ ತನ್ನ ಮರಿಗೆ ತೋರದುಳಿವುದೆ? ಕಾಗೆ ಒಂದಗುಳ ಕಂಡರೆ ತನ್ನ ಬಳಗವ ಕರೆಯದುಳಿವುದೆ? ಶಿವಭಕ್ತನಾಗಿ ತನ್ನ ಲಿಂಗವ ಪೂಜಿಸಿ ಜಂಗಮವ ಮರೆದವನಾದರೆ ಸತ್ತ ದನವಿಗೆ ನರಿ ಹೋದಂತಾಯಿತ್ತು. ಆ ನರಿ ಹೋದ ನೆನಹಿನಲ್ಲಿ ನಾಯಿ ಹೋದಂತಾಯಿತ್ತು. ಇಷ್ಟಕ್ಕಿಂದ ಕರಕಷ್ಟವೆ ಶಿವಭಕ್ತರು? ಷಟ್ಚಕ್ರದ ಭಾವದಲ್ಲಿವೊಪ್ಪಿರುವ ಶಿವಶರಣರು ತಮ್ಮ ನಡೆ ನುಡಿಗಳ ಬಿಡದೆ ನಡೆವುದು. ಅದ ಕಂಡು ಕಣ್ದೆರೆದು ನೋಡಿದೆನಯ್ಯ. ಆವ ವರ್ತನೆಯಲ್ಲಿ ತಾನಿದ್ದರೇನು? ಆವ ಭಾವ ಹೇಂಗಿದ್ದರೇನು? ನಮ್ಮಾಚರಣೆ ನಮಗೆ ಶುದ್ಧ. ಗುರು ಕಲ್ಪಿತನಾದರು ಅವನು ಹಿಂದೆ ಸಂಬಂಧವಾದ ಕಾರಣ, ಅವನಿಗೆ ಬಂಧ ದೊರಕುವದಲ್ಲದೆ ನನಗೆ ದೊರಕದೆಂದು ತಾನು ನಿಶ್ಚೆಸಿದರೆ ತನಗೆ ದೊರಕಬಲ್ಲದೆ? ತಾನು ಪೂರ್ವದಲ್ಲಿ ತಾ ಪಡದುದು ತನಗೆ ತಪ್ಪುವದೆ? ಪ್ರಾಣಿಹಿಂಸೆಯ ಮಾಡುವಾತನಾದರೆಯು ಅವನಿಗೆ ಕಲ್ಪಿತವೇತಕ್ಕೆ? ಹಿಂದೆ ಅವನು ಶಿವನಪ್ಪಣೆವಿಡಿದು ಬಂದ ಕಾರಣ ಅವನಿಗೆ ಬಂದಿತಲ್ಲದೆ ಗಗನದ ಮಂಟಪದ ಮೇಲೆ ಊಧ್ರ್ವಮುಖದ ಗದ್ದುಗೆಯ ಮಾಡಿ ಮಹಾಪ್ರಕಾಶವೆಂಬ ಬೆಳಗಂ ತೋರಿ ಓಂಕಾರವೆಂಬ ಲಿಂಗವ ಮೂರ್ತಮಾಡಿಸಿ ಅದಕ್ಕೆ ಸದ್ಭಾವವೆಂಬ ಪುಷ್ಪವ ತಂದು ಜ್ಞಾನಪ್ರಕಾಶವೆಂಬ ಜ್ಯೋತಿಯಂ ಪೊತ್ತಿಸಿ ಸದ್ಭಕ್ತಿಯೆಂಬ ನೈವೇದ್ಯಮಂ ಮಾಡಿ ನಿರ್ಮಳವೆಂಬ ಪೂಜಾರಿಯಾಗಿರ್ಪನು. ಇದನರಿಯದೆ ತಮ್ಮ ಮನ ಬಂದಂತೆ ಇಪ್ಪವರ ಲಿಂಗಹೋದವನಾದರು ಅವನ ಕಣ್ಣಲ್ಲಿ ಕಂಡು ಅವನಷ್ಟಕ್ಕಲ್ಲದೆ ಅನ್ಯರ ಗೃಹವ ಬಿಡಲೇತಕ್ಕೇ? ಪಾಪವ ಮಾಡಿದನಾರು ಅವನ ಗೃಹಕ್ಕಲ್ಲದೆ ಅವನೊಂದಿಗೆ ಬೆರಸಿದವನಾದರು ಅವನಿಗೆ ಪಾಪ ಸಂಭವಿಸುವುದುಂಟೇ? ಇದ ಸಂಕಲ್ಪವ ಮಾಡಿ ಬಿಡಲೇತಕ್ಕೆ? ಒರ್ವಾನೊಬ್ಬನು ಭವಿಯ ಒಡನಾಡಲು ಅವನ ಪಾಪವು ಅವನಲ್ಲಿಪ್ಪುದಲ್ಲದೆ ಮಿಕ್ಕಿನ ಗೃಹಕ್ಕೆ ಸಂಬಂಧವೇನು? `ಮಾಡಿದವರನಲ್ಲದೆ ಮಿಕ್ಕಿನವರ ಸಂಕಲ್ಪವ ಮಾಡಲಾಗದು'ಯೆಂಬುದು ಗುರುವಚನ. ಹೆಣ್ಣು ಬಿಂದು ಸಂಬಂಧವಾಗಲು ಆ ಭೋಗಕ್ಕೆ ಶರಣನು ಅದನು ಮನದಲ್ಲಿ ಕಂಡು ಸಂತೋಷವಾಗಿಪ್ಪ. ಇಂತೀ ಭಾವಶುದ್ಧವುಳ್ಳಾತನು ಮತ್ರ್ಯಲೋಕಕ್ಕೆ ಮರಳಿ ಬಾರನೆಂಬುದು. ಶರಣ ಸಕಲವಿದ್ಯವ ಕಲಿತು ಫಲವೇನು? ನಿಂದ್ಯನೆ ದೊರಕೊಂಡಮೇಲೆ? ಹುಣ್ಣು ಹುಗಳು ಕೋಷ್ಠವಾಗಿರಲು, ಅವರ ಕಂಡು ಜರಿಯಲಾರದೆಂಬುದೆನ್ನ ಭಾಷೆ. ಇಂದ್ರಿಯಸುಖಕ್ಕೆ ಹೋಗಿ ಬಿದ್ದು ಶಿವಮಾಡಿದರಾಯಿತ್ತೆಂಬ ಅವಿಚಾರದ ನುಡಿಯ ಕೇಳಲಾಗದು. ತನ್ನ ಮನವು ಶುದ್ಧವಾದ ಮೇಲೆ, ಸಕಲ ಸುಖಂಗಳು ತನಗುಂಟಲ್ಲದೆ, ಜ್ಞಾನಿಗೆ ಕತ್ತಲೆಯಿಲ್ಲ. ಅಜ್ಞಾನಿಗೆ ಪಾಪವಿಲ್ಲ. ಇದನರಿದು, ಮುಂದುಗೊಂಡು ತಿರುಗುವ, ಅಣ್ಣಗಳ ಕಂಡು, ನಗುತಿರ್ಪರು ನಿಮ್ಮ ಶರಣರು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
`ಏಕ ಏವ ರುದ್ರೋ ನ ದ್ವಿತೀಯಃ' ನೆಂದು ಶ್ರುತಿ ಸಾರುತ್ತಿರೆ, ಮರಳಿ ವಿಷ್ಣುವಲ್ಲದೆ ದೈವವಿಲ್ಲವೆಂಬಿರಿ. ಅಚ್ಯುತಂಗೆ ಭವವುಂಟೆಂಬುದಕ್ಕೆ ಮತ್ಸ್ಯಕೂರ್ಮವರಾಹನಾರಸಿಂಹಾವತಾರವೆ ಸಾಕ್ಷಿ. ಹರಿ ಹರನ ಭೃತ್ಯನೆಂಬುದಕ್ಕೆ ರಾಮೇಶ್ವರಾದಿಯಾದ ಪ್ರತಿಷ್ಠೆಯೇ ಸಾಕ್ಷಿ. ಇಂತಪ್ಪ ಹರಿಯನು ಹರಂಗೆ ಸರಿಯೆಂದು ನುಡಿವುತ್ತಿಹ ವಿಪ್ರರ ಬಾಯಲ್ಲಿ ಸುರಿಯವೆ ಬಾಲಹುಳುಗಳು. ಹರಿಗೆ ಹತ್ತು ಪ್ರಳಯ, ಬ್ರಹ್ಮಂಗೆ ಅನಂತಪ್ರಳಯ. ನಮ್ಮ ಹರಂಗೆ ಪ್ರಳಯ ಉಂಟಾದರೆ, ಬಲ್ಲರೆ ನೀವು ಹೇಳಿರೆ ! ನಿಮ್ಮ ವೇದದಲ್ಲಿ ಹೇಳಿಸಿರೆ ! ಅರಿಯದಿರ್ದಡೆ ಸತ್ತ ಹಾಂಗೆ ಸುಮ್ಮನಿರಿರೆ. ಇದು ಕಾರಣ ನಮ್ಮ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರದೇವನೊಬ್ಬನೆ, ಎರಡಿಲ್ಲ.
--------------
ಉರಿಲಿಂಗಪೆದ್ದಿ
ಐದು ಸರ್ಪಂಗಳಿಗೆ ತನು ಒಂದು, ದಂತವೆರಡು. ಸರ್ಪ ಕಡಿದು ಸತ್ತ ಹೆಣನು ಸುಳಿದಾಡುವುದ ಕಂಡೆ. ಈ ನಿತ್ಯವನರಿಯದಠಾವಿನಲ್ಲಿ, ಭಕ್ತಿಯೆಲ್ಲಿಯದೊ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ತುರಿಯಮೇಲೆ ಉಗುರನಿಕ್ಕಿದರೆ, ಹಿತವಾಗಿಹುದು; ಒತ್ತಿ ತುರಿಸಿದಡೆ ಒಡಲೆಲ್ಲಾ ಉರಿದ ದೃಷ್ಟಾಂತರದಂತೆ, ವಿಷಯ ತೋರಿದಡೆ ಯೋನಿ ಚಕ್ರವ ನಿಶ್ಚಯಿಸುವುದು ಆ ವಿಷಯ ತೀರಿದ ಬಳಿಕ ಆ ಯೋನಿ ಸ್ನಾನದಕುಳಿಯಿಂದ ಕಡೆಯಾಗಿಪ್ಪುದು ನೋಡ. ಸತಿಯೆಂಬುವಳು ಸತ್ತ ಶವಕಿಂದ ಕಡೆಯಾಗಿಪ್ಪಳು ನೋಡ. ಅಪ್ಪಬಾರದು ಅಪ್ಪಬಾರದು; ಅತಿ ಹೇಸಿಕೆ. ಪಶುಪತಿ ನೀ ಮಾಡಿದ ವಿಷಯವಿದ್ಥಿ ಈರೇಳು ಲೋಕವನಂಡೆಲೆವುತ್ತಿದೆ ನೋಡಾ. ಈ ಸಂಸಾರ ಪ್ರಪಂಚ ದೇವದಾನವ ಮಾನವರು ಪರಿಹರಿಸಲಾರದೆ ಆಳುತ್ತ ಮುಳುಗತ್ತಲಿಪ್ಪರು ನೋಡಾ. ಇದು ಕಾರಣ, ಸದಾಶಿವನನರಿದು ನೆನೆಯಲು ಸಂಸಾರಪ್ರಪಂಚು ಕೆಡುವುದು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಇನ್ನಷ್ಟು ... -->